ರಾಜ್ಯ ಬಜೆಟ್

ದಾಖಲೆಯ 14ನೇ ಬಜೆಟ್ ಮಂಡನೆ: ಐದು ಚುನಾವಣಾ ಭರವಸೆಗಳಿಗೆ 52,000 ಕೋಟಿ ರೂ. ವೆಚ್ಚ- ಸಿದ್ದರಾಮಯ್ಯ

ನಮ್ಮ ಸರ್ಕಾರದ ಐದು ಪ್ರಮುಖ ಚುನಾವಣಾ 'ಖಾತರಿ'ಗಳಿಗಾಗಿ ವಾರ್ಷಿಕವಾಗಿ ಅಂದಾಜು 52,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುವುದು ಮತ್ತು 1.3 ಕೋಟಿ ಕುಟುಂಬಗಳಿಗೆ ಇದರಿಂದ ಪ್ರಯೋಜನವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ದಾಖಲೆಯ 14ನೇ ಬಜೆಟ್ ಮಂಡನೆ: ಐದು ಚುನಾವಣಾ ಭರವಸೆಗಳಿಗೆ 52,000 ಕೋಟಿ ರೂ. ವೆಚ್ಚ- ಸಿದ್ದರಾಮಯ್ಯ
ಕಾಂಗ್ರೆಸ್ ನ 5 ಗ್ಯಾರೆಂಟಿಗಳು-ಸಿದ್ದರಾಮಯ್ಯ
Published On :

ಬೆಂಗಳೂರು: ದಾಖಲೆಯ 14ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಚುನಾವಣಾ ಭರವಸೆಗಳನ್ನು ಎತ್ತಿ ತೋರಿಸಿದರು. ಗ್ಯಾರಂಟಿಗಳನ್ನು ಬಿಟ್ಟಿ ಯೋಜನೆಗಳು ಎಂದು ಟೀಕಿಸುವವರಿಗೆ ಬಜೆಟ್ ಭಾಷಣದಲ್ಲಿಯೇ ತಿರುಗೇಟು ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಕೇವಲ ಬಿಟ್ಟಿ ಕೊಡುಗೆಗಳೆಂದು ಹೇಳುವವರು ಒಮ್ಮೆ ನಮ್ಮ ಬಡವರು, ಶ್ರಮಿಕರ ಬದುಕನ್ನು ಗಮನಿಸಬೇಕಾಗಿದೆ. ನಮ್ಮ ಐದು ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡುವುದು, ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಸೇರಿದಂತೆ ಗೊಂದಲ ಮೂಡಿಸುವ ಕೆಲಗಳನ್ನು ಮಾಡುತ್ತಿರುವ ವಿರೋಧ ಪಕ್ಷದವರಿಗೆ ಒಂದು ಮಾತು ಹೇಳಲು ಬಯಸುತ್ತೇನೆ. ತಾವು ವಿರೋಧ ಪಕ್ಷದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ. ಆದರೆ, ಶ್ರೀಸಾಮಾನ್ಯರಿಗೆ ಅಪಮಾನ ಮಾಡಬೇಡಿ ಎಂದು ವಿನಂತಿಸುತ್ತೇನೆ ಎಂದರು.

ಜನರು ಬುದ್ಧಿವಂತರು, ಪ್ರಜ್ಞಾವಂತರು. ಇಂತಹ ತರ್ಕರಹಿತ ಆಲೋಚನೆಗಳನ್ನು ನಂಬುವುದಿಲ್ಲ. ವಾಸ್ತವವೆಂದರೆ, ಜನ ನಿಮ್ಮಿಂದ ಬೇಸತ್ತು ಇಷ್ಟೊಂದು ಭಾರಿ ಬಹುಮತದಿಂದ ನಮ್ಮನ್ನು ಆರಿಸಿ ವಿಧಾನಸೌಧಕ್ಕೆ ಕಳುಹಿಸಿದ್ದಾರೆ ಎಂದು ತಿರುಗೇಟು ನೀಡಿದರು.

ನಮ್ಮ ಸರ್ಕಾರದ ಐದು ಪ್ರಮುಖ ಚುನಾವಣಾ 'ಖಾತರಿ'ಗಳಿಗಾಗಿ ವಾರ್ಷಿಕವಾಗಿ ಅಂದಾಜು 52,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುವುದು ಮತ್ತು 1.3 ಕೋಟಿ ಕುಟುಂಬಗಳಿಗೆ ಇದರಿಂದ ಪ್ರಯೋಜನವಾಗಲಿದೆ ಎಂದು ಹೇಳಿದರು.

ವಿಧಾನಸಭೆಯಲ್ಲಿ 2023-2024ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯ, ಐದು ಪ್ರಮುಖ ಚುನಾವಣಾ 'ಖಾತರಿ'ಗಳಿಗಾಗಿ ವಾರ್ಷಿಕವಾಗಿ ಅಂದಾಜು 52,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುವುದು. ಇದರಿಂದ 1.3 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಲಿದೆ ಎಂದು ಶುಕ್ರವಾರ ಹೇಳಿದ್ದಾರೆ.

ನಮ್ಮ ಐದು ಖಾತರಿಗಳ ಮೂಲಕ ಸರ್ಕಾರವು ಪ್ರತಿ ಕುಟುಂಬಕ್ಕೆ ತಿಂಗಳಿಗೆ ಸರಾಸರಿ ನಾಲ್ಕು ಸಾವಿರದಿಂದ ಐದು ಸಾವಿರ ರೂಪಾಯಿಗಳ ಹೆಚ್ಚುವರಿ ಆರ್ಥಿಕ ನೆರವನ್ನು ನೀಡುತ್ತದೆ. ಇದು ವಾರ್ಷಿಕವಾಗಿ ಸರಾಸರಿ 48,000 ದಿಂದ 60,000 ರೂ.ಗಳಷ್ಟು ಆಗುತ್ತದೆ. ಇದು ಸಾರ್ವತ್ರಿಕ ಮೂಲ ಆದಾಯ (Universal basic income) ಎಂಬ ಪರಿಕಲ್ಪನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಯ ಹೊಸ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿದೆ ಎಂದರು. 

ನಮ್ಮ ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಿರುವ ಸಂಪನ್ಮೂಲವನ್ನು ನಮ್ಮ ಸರ್ಕಾರವು ಜನರಿಗೆ ಹೆಚ್ಚಿನ ಹೊರೆಯಾಗದಂತೆ ಹೊಂದಿಸಲಿದೆ. ಈ ನಿಟ್ಟಿನಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟುವುದರ ಜೊತೆಗೆ ಸರ್ಕಾರದ ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು. 

ಕೆಲವು ರಾಜಕೀಯ ವಿಶ್ಲೇಷಕರ ಪ್ರಕಾರ, ಈ ಚುನಾವಣಾ ಪೂರ್ವ ಭರವಸೆಗಳು ಮತದಾರರ ಮೇಲೆ ವ್ಯಾಪಕ ಪ್ರಭಾವ ಬೀರಿದ್ದು, ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅದ್ಭುತ ಗೆಲುವಿಗೆ ಕಾರಣವಾಯಿತು.

224 ಸದಸ್ಯ ಬಲದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಪಡೆದುಕೊಂಡಿದೆ.

13 ಬಜೆಟ್ ಮಂಡಿಸಿದ್ದ ಮಾಜಿ ಸಿಎಂ ದಿವಂಗತ ರಾಮಕೃಷ್ಣ ಹೆಗಡೆ ಅವರ ದಾಖಲೆಯನ್ನು ಮುರಿದು ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿ ವಿಧಾನಸಭೆಯಲ್ಲಿ 14ನೇ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.