'ಶಾಂತಿಯುತ ಹೋರಾಟ ಹಿಂಸೆಗೆ ತಿರುಗಿದ್ದು ನೋವಾಗಿದೆ': NEET ಪ್ರತಿಭಟನೆಗೆ Salman Khan ಬೆಂಬಲ
ಈ ಹೋರಾಟ ವಿದ್ಯಾರ್ಥಿಗಳು ಮತ್ತು ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ್ದಾಗಿದ್ದು, ಇದನ್ನು ಯಾವುದೇ ಕಾರಣಕ್ಕೂ ರಾಜಕೀಯಗೊಳಿಸಬಾರದು.

ನವದೆಹಲಿ: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಶಾಂತಿಯುತವಾಗಿ ಆರಂಭವಾದ ಪ್ರತಿಭಟನೆ ಹಿಂಸಾತ್ಮಕ ತಿರುವು ಪಡೆದುಕೊಂಡಿರುವುದು ನೋವು ತಂದಿದೆ ಎಂದು ಹೇಳಿರುವ ಅವರು, ಈ ಹೋರಾಟ ವಿದ್ಯಾರ್ಥಿಗಳು ಮತ್ತು ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ್ದಾಗಿದ್ದು, ಇದನ್ನು ಯಾವುದೇ ಕಾರಣಕ್ಕೂ ರಾಜಕೀಯಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.
ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿರುವ ಸಲ್ಮಾನ್ ಖಾನ್, "ಪ್ರಶ್ನೆಪತ್ರಿಕೆ ಸೋರಿಕೆ ಅತ್ಯಂತ ಗಂಭೀರ ಸಮಸ್ಯೆ. ಪ್ರತಿಭಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳ ಬಗ್ಗೆ ನನಗೆ ತುಂಬಾ ನೋವಾಗಿದೆ. ನನ್ನ ಮನಸ್ಸು ಅವರೊಂದಿಗಿದೆ" ಎಂದು ಬರೆದುಕೊಂಡಿದ್ದಾರೆ.
ಇದೇ ವೇಳೆ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಅವರು, "ಇದು ಅತ್ಯಂತ ಶಾಂತಿಯುತವಾಗಿ ಆರಂಭವಾದ ಹೋರಾಟ. ಆದರೆ, ಅದು ಹಿಂಸಾತ್ಮಕ ಸ್ವರೂಪ ಪಡೆದಿರುವುದು ತುಂಬಾ ಬೇಸರ ತಂದಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ವ್ಯವಸ್ಥೆಗಾಗಿ ಒಂದಾಗಿರುವುದು ಪ್ರೇರಣಾದಾಯಕ. ಅಲ್ಲದೆ, ಈ ಹೋರಾಟ ವಿದ್ಯಾರ್ಥಿಗಳು ಮತ್ತು ಶಿಕ್ಷಣ ವ್ಯವಸ್ಥೆಯ ನಡುವಿನ ವಿಚಾರ. ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು. ಇದರ ಶ್ರೇಯಸ್ಸು ಭಾರತದ ವಿದ್ಯಾರ್ಥಿಗಳಿಗೇ ಸಲ್ಲಬೇಕು ಎಂದು ಒತ್ತಿ ಹೇಳಿದ್ದಾರೆ.
ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಸಲ್ಮಾನ್, "ಎಲ್ಲರಿಗೂ ಒಳ್ಳೆಯದಾಗುವ ಪರಿಹಾರ ಸಿಗಲಿ ಎಂದು ಪ್ರಾರ್ಥಿಸುತ್ತಿದ್ದೇನೆ. ಇದು ಎಲ್ಲರಿಗೂ ಗೆಲುವಿನ ಪರಿಸ್ಥಿತಿಯಾಗಬೇಕು" ಎಂದಿದ್ದಾರೆ.
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯ ಆರೋಪದ ಬಳಿಕ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಹಲವು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ, ಪ್ರಶ್ನೆಪತ್ರಿಕೆ ಸೋರಿಕೆಗೆ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ.
ಈ ಪ್ರತಿಭಟನೆಗೆ ಬೆಂಬಲ ಸೂಚಿಸಿ ಶಿಕ್ಷಣ ಸುಧಾರಣಾ ಹೋರಾಟಗಾರ ಸೋನಂ ವಾಂಗ್‌ಚುಕ್ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ್ದರು. ಆದರೆ, ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ದೆಹಲಿ ಪೊಲೀಸರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರ ನಂತರ ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ್ದು, ವಿದ್ಯಾರ್ಥಿಗಳ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸುವುದಾಗಿ ಘೋಷಿಸಿದ್ದಾರೆ.
ಸುಮಾರು 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿದ ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಬಳಿಕ ಈ ಪ್ರತಿಭಟನೆ ದೇಶವ್ಯಾಪಿ ವಿದ್ಯಾರ್ಥಿ ಚಳವಳಿಯಾಗಿ ರೂಪುಗೊಂಡಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮಾತ್ರವಲ್ಲದೆ, ಪರೀಕ್ಷಾ ವ್ಯವಸ್ಥೆಯಲ್ಲಿನ ಪಾರದರ್ಶಕತೆ, ಮೌಲ್ಯಮಾಪನದ ದೋಷಗಳು ಹಾಗೂ ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡದಂತಹ ವಿಷಯಗಳೂ ಈ ಹೋರಾಟದ ಕೇಂದ್ರಬಿಂದುವಾಗಿವೆ.
ಸಲ್ಮಾನ್ ಖಾನ್ ಅವರ ಬೆಂಬಲದೊಂದಿಗೆ ಚಿತ್ರರಂಗದ ಅನೇಕ ಗಣ್ಯರೂ ವಿದ್ಯಾರ್ಥಿಗಳ ಪರ ಧ್ವನಿ ಎತ್ತಿದ್ದಾರೆ. ತಳಪತಿ ವಿಜಯ್, ಸೋನು ಸೂದ್, ವೀರ್ ದಾಸ್, ದಿಯಾ ಮಿರ್ಜಾ, ಶಬಾನಾ ಆಜ್ಮಿ, ಪ್ರಕಾಶ್ ರಾಜ್, ರಿತೇಶ್ ದೇಶ್‌ಮುಖ್, ಜೆನೆಲಿಯಾ ದೇಶ್‌ಮುಖ್, ಸೋಹಾ ಅಲಿ ಖಾನ್, ಅದಿತಿ ರಾವ್ ಹೈದರಿ, ಹ್ಯೂಮಾ ಖುರೇಷಿ, ಭೂಮಿ ಪೆಡ್ನೇಕರ್, ನಸೀರುದ್ದೀನ್ ಶಾ, ನಂದಿತಾ ದಾಸ್, ಕಿರಣ್ ರಾವ್ ಸೇರಿದಂತೆ ಹಲವು ಕಲಾವಿದರು ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ಅಗತ್ಯ ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



