ಸ್ಯಾಂಡಲ್ ವುಡ್ ಹಿರಿಯ ನಟ ಸರಿಗಮ ವಿಜಿ ನಿಧನ
ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು.
ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ. ಸರಿಗಮ ವಿಜಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಜನವರಿ 16 ಬೆಳಿಗ್ಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ವಿಜಿ ಅವರದ್ದು ಬಲು ಸುದೀರ್ಘವಾದ ಸಿನಿಮಾ ಮತ್ತು ರಂಗಭೂಮಿ ಪಯಣ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ ಅವರ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು ಕೊಟ್ಟಿತ್ತು. ಇದೇ ಕಾರಣಕ್ಕೆ ಅವರಿಗೆ ಸರಿಗಮ ವಿಜಿ ಹೆಸರು ಬಂದಿತ್ತು. ನಾಟಕದಿಂದ ಸಿನಿಮಾಕ್ಕೆ ಪದಾರ್ಪಣೆ ಮಾಡಿದ ವಿಜಿ ಅವರು ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರ ಕೆಲವೆಡೆ ವಿಲನ್ ಪಾತ್ರಗಳಲ್ಲಿಯೂ ನಟಿಸಿದ್ದಾರೆ.
ಆರಂಭದಲ್ಲಿ ಕೆಲ ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ ವಿಜಿ ಅವರು ‘ಬೆಳುವಲದ ಮಡಿಲಲ್ಲಿ’ ಸಿನಿಮಾ ಮೂಲಕ ನಟರಾಗಿ ಎಂಟ್ರಿ ಕೊಟ್ಟರು. ಅದಾದ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಲೇ ಸಾಗಿದ ವಿಜಿ ಅವರು 2018ರ ಹೊತ್ತಿಗೆ ವಿಜಯ್ ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದರು. 80 ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದರು. ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದ ಸರಿಗಮ ವಿಜಿ ಅವರು ಕೆಲ ಧಾರಾವಾಹಿಗಳ ನಿರ್ದೇಶನವನ್ನೂ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



