ಮೀಸಲು ಅರಣ್ಯದಲ್ಲಿ ಅಕ್ರಮ ರೆಸಾರ್ಟ್: ಸರ್ಕಾರಕ್ಕೆ ನೋಟಿಸ್
ಚಿಕ್ಕಮಗಳೂರು ಜಿಲ್ಲೆಯ ಮೀಸಲು ಅರಣ್ಯ ಪ್ರದೇಶದಲ್ಲಿ ವನ್ಯಜೀವಿ ವಾರ್ಡನ್ ಒಬ್ಬರು ಅಕ್ರಮವಾಗಿ ರೆಸಾರ್ಟ್...

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೀಸಲು ಅರಣ್ಯ ಪ್ರದೇಶದಲ್ಲಿ ವನ್ಯಜೀವಿ ವಾರ್ಡನ್ ಒಬ್ಬರು ಅಕ್ರಮವಾಗಿ ರೆಸಾರ್ಟ್ ನಿರ್ಮಾಣ ಮಾಡುತ್ತಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ವನ್ಯಜೀವಿ ವಾರ್ಡನ್ ಡಿ.ಎಸ್.ಸತೀಶ್ ಗೌಡ ಅವರು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಮೀಸಲು ಅರಣ್ಯ ಪ್ರದೇಶದ ಸರ್ವೇ ನಂ.216ರಲ್ಲಿ ರು.2 ಕೋಟಿ ವೆಚ್ಚದಲ್ಲಿ ಬೃಹತ್ ರೆಸಾರ್ಟ್ ನಿರ್ಮಾಣ ಮಾಡುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಇದನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿತ್ತು. ಗುರುವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಮತ್ತು ನ್ಯಾ. ರಾಮಮೋಹನ ರೆಡ್ಡಿ ಅವರಿದ್ದ ವಿಭಾಗೀಯ ಪೀಠ, ಅರಣ್ಯ ಮತ್ತು ಕಂದಾಯ ಇಲಾಖೆ ಹಾಗೂ ಸತೀಶ್ ಗೌಡರಿಗೆ ನೋಟಿಸ್ ಜಾರಿ ಮಾಡಿದೆ.
ವನ್ಯಜೀವಿ ವಾರ್ಡನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸತೀಶ್ ಗೌಡ ಅವರು, ವನ್ಯಜೀವಿ ರಕ್ಷಣಾ ಕಾಯ್ದೆ ಮತ್ತು ಕರ್ನಾಟಕ ಅರಣ್ಯ ಸಂರಕ್ಷಣೆ ಕಾಯ್ದೆ 1980 ಹಾಗೂ ಅರಣ್ಯ ಕಾಯ್ದೆ 1963 ಉಲ್ಲಂಘಿಸಿ ಸುಮಾರು ರು.2 ಕೋಟಿ ವೆಚ್ಚದಲ್ಲಿ ಭದ್ರಾ ಮೀಸಲು ಅರಣ್ಯ ಪ್ರದೇಶದಲ್ಲಿ ರೆಸಾರ್ಟ್ ನಿರ್ಮಾಣ ಮಾಡುತ್ತಿದ್ದಾರೆ. ಗ್ರಾಮ ಪಂಚಾಯ್ತಿಯಿಂದ ಕೃಷಿ ಜಮೀನಿನಲ್ಲಿ ಫಾರ್ಮ್‌ಹೌಸ್ ನಿರ್ಮಾಣ ಮಾಡುವುದಾಗಿ ಹೇಳಿ ಅನುಮತಿ ಪಡೆದಿದ್ದಾರೆ. ಬಳಿಕ ಅರಣ್ಯ ಪ್ರದೇಶದಲ್ಲಿ ಭೂ ಪರಿವರ್ತನೆಗೆ ಮತ್ತು ಕಟ್ಟಡ ನಿರ್ಮಾಣಕ್ಕೆ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆದಿಲ್ಲ ಎಂದು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಅರ್ಜಿಯಲ್ಲಿ ಹೇಳಲಾಗಿದೆ.
ಅಲ್ಲದೆ, ಸಿಗೇಕ್ಕನ್ ಬೆಟ್ಟದ ಬಳಿ ಹರಿಯುವ ತೊರೆಯ ದಿಕ್ಕು ಬದಲಿಸಿ ನೀರನ್ನು ರೆಸಾರ್ಟ್‌ನ ಈಜುಕೊಳಕ್ಕೆ ಹರಿಸಲಾಗುತ್ತಿದೆ. ಮಾತ್ರವಲ್ಲದೇ ಅರಣ್ಯ ಸಂಪತ್ತಾದ ಮರಗಳನ್ನು ಕತ್ತರಿಸಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಈ ಸಂಬಂಧ ಅರಣ್ಯಾಧಿಕಾರಿಗಳು ಸತೀಶ್ ಗೌಡ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರೂ ಮುಂದಿನ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ಆಕ್ಷೇಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


