ಶಂಕಿತ ಉಗ್ರರು ಮತ್ತೆ 14 ದಿನ ಸಿಸಿಬಿ ಪೊಲೀಸ್ ವಶಕ್ಕೆ
ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆ ಜತೆ ನಂಟು ಹೊಂದಿರುವ ಆರೋಪದ ಮೇಲೆ ಬಂಧಿತರಾಗಿ...

ಬೆಂಗಳೂರು: ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆ ಜತೆ ನಂಟು ಹೊಂದಿರುವ ಆರೋಪದ ಮೇಲೆ ಬಂಧಿತರಾಗಿರುವ ಭಟ್ಕಳ ಮೂಲದ ನಾಲ್ವರು ಶಂಕಿತ ಉಗ್ರರನ್ನು ಮತ್ತೆ 14 ದಿನಗಳ ಕಾಲ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬುಧವಾರಕ್ಕೆ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ 49ನೇ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆ ಅಗತ್ಯವಿರುವುದರಿಂದ ಮತ್ತೆ 14 ದಿನಗಳ ಕಾಲ ವಶಕ್ಕೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದರು.
ಮನವಿ ಪುರಸ್ಕರಿಸಿದ ನ್ಯಾಯಾಲಯ ಫೆ.3ರ ವರೆಗೆ ಸಿಸಿಬಿ ಪೊಲೀಸರ ವಶಕ್ಕೆ ನೀಡಿದೆ. ಇದೇ ವೇಳೆ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳ(ಎಟಿಎಸ್) ಅಧಿಕಾರಿಗಳು ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ವಿಚಾರಣೆಗಾಗಿ ಬಂಧಿತರನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು. ಆದರೆ, ಅರ್ಜಿ ಸಲ್ಲಿಕೆ ವೇಳೆ ಕೆಲವು ತಾಂತ್ರಿಕ ಲೋಪಗಳು ಇಧ್ದವು.
ಹೀಗಾಗಿ, ದಾಖಲೆಗಳನ್ನು ಸರಿಪಡಿಸಿಕೊಂಡು ಬನ್ನಿ ಎಂದು ನ್ಯಾಯಾಲಯ ಸೂಚಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಅರ್ಜಿಯನ್ನು ಹಿಂದಕ್ಕೆ ಪಡೆದರು. 2011ರ ಜುಲೈ 13ರಂದು ಮುಂಬೈ ಮಹಾನಾಗರದ ಹಲವೆಡೆ ಬಾಂಬ್ ಸ್ಫೋಟ ಸಂಭವಿಸಿ 26 ಮಂದಿ ಮೃತಪಟ್ಟು 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಪ್ರಕರಣದಲ್ಲಿ ಆರೋಪಿಗಳ ವಿಚಾರಣೆ ನಡೆಸಲು ಮುಂಬೈನ ಸ್ಥಳೀಯ ನ್ಯಾಯಾಲಯದಿಂದ ಬಾಡಿ ವಾರೆಂಟ್ ಅನುಮತಿ ಪಡೆದುಕೊಂಡು ಬೆಂಗಳೂರಿನ ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ.
ಇನ್ನು 2010ರ ಏ.17ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಿ ನಡೆದ ಬಾಂಬ್ ಸ್ಫೋಟ ಪ್ರಕರಣ ಸಂಬಂಧವೂ ವಿಚಾರಣೆ ನಡೆಸಲು ಪೊಲೀಸ್ ಅಧಿಕಾರಿಗಳ ತಂಡ ಸಿದ್ಧತೆ ನಡೆಸಿದ್ದು ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಮುಂದಾಗಿದೆ.
ಸಿಸಿಬಿ ಪೊಲೀಸರಿಂದ ವಿಚಾರಣೆ ಮುಗಿದ ಬಳಿಕವಷ್ಟೇ ಬೇರೆ ತನಿಖಾ ಸಂಸ್ಥೆಗಳ ವಶಕ್ಕೆ ನಾಲ್ವರು ಆರೋಪಿಗಳನ್ನು ನೀಡುವ ಸಾಧ್ಯತೆ ಇದೆ.
ದೇಶದಲ್ಲಿ ಸಂಭವಿಸಿದ ಹಲವು ಸ್ಫೋಟಗಳ ಬಗ್ಗೆ ಬಂಧಿತ ಡಾ. ಇಸ್ಮಾಯಿಲ್ ಅಫಕ್, ಸದ್ದಾಂ ಹುಸೇನ್, ಅಬ್ದುಸ್ ಸಬೂರ್ ಹಾಗೂ ರಿಯಾಜ್ ಸೈಯಿದಿ ಮಾಹಿತಿ ನೀಡಿದ್ದಾರೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಜ.8ರಂದು ಬೆಂಗಳೂರು ಹಾಗೂ ಭಟ್ಕಳದಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಅಧಿಕಾರಿಗಳು ಮೂವರನ್ನು ಬಂಧಿಸಿದ್ದರು. ದಾಳಿ ವೇಳೆ ಅಪಾರ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದವು. ಜ.11ರಂದು ದುಬೈಗೆ ತೆರಳುತ್ತಿದ್ದ ರಿಯಾಜ್ ಸೈಯಿದಿಯನ್ನು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


