ಅಕ್ರಮ ಸಕ್ರಮ ಪ್ರಕ್ರಿಯೆ ಆರಂಭಿಸಬೇಡಿ: ಹೈ ಆದೇಶ
ಅಕ್ರಮ-ಸಕ್ರಮ ಯೋಜನೆಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸ್ವೀಕರಿಸಿ. ಆದರೆ, ಯಾವುದೇ ಪ್ರಕ್ರಿಯೆ ಆರಂಭಿಸಬೇಡಿ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ..

ಬೆಂಗಳೂರು: ಅಕ್ರಮ-ಸಕ್ರಮ ಯೋಜನೆಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸ್ವೀಕರಿಸಿ. ಆದರೆ, ಯಾವುದೇ ಪ್ರಕ್ರಿಯೆ ಆರಂಭಿಸಬೇಡಿ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಯೋಜನೆಯನ್ನು ಪ್ರಶ್ನಿಸಿ ಸಿಟಿಜನ್ ಫೋರಂ ಫಾರ್ ಮಂಗಳೂರು ಡೆವಲಪ್‍ಮೆಂಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿತ್ತು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಮತ್ತು ನ್ಯಾ.ರಾಮಮೋಹನ ರೆಡ್ಡಿ ಅವರಿದ್ದ ವಿಭಾಗೀಯ ಪೀಠ, ಪ್ರಕ್ರಿಯೆಗೆ ಚಾಲನೆ ನೀಡದಂತೆ ಸೂಚಿಸಿ ನಗರಾಭಿವೃದ್ಧಿ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಮುಂದಿನ ವಿಚಾರಣೆ ವೇಳೆ ಒಟ್ಟಾರೆ ಕಟ್ಟಡಗಳು ಹಾಗೂ ನಿಯಮ ಉಲ್ಲಂಘಿಸಿರುವ ಕಟ್ಟಡಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಏ.15ಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಈ ಹಿಂದೆಯೇ ಸುಪ್ರೀಂ ಕೋರ್ಟ್ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸದಂತೆ ಆದೇಶ ನೀಡಿದೆ. ನಿಯಮ ಉಲ್ಲಂಘಿಸಿ ನಿರ್ಮಾಣ ಆಗಿರುವ ಎಷ್ಟು ಕಟ್ಟಡಗಳನ್ನು ಈವರೆಗೆ ನೆಲಸಮ ಮಾಡಿದ್ದೀರಿ ಎಂದು ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರನ್ನು ಖಾರವಾಗಿ ಪ್ರಶ್ನಿಸಿದೆ. ಯೋಜನೆ ಜಾರಿಯ ಹಿಂದೆ ಸರ್ಕಾರಕ್ಕೆ ಯಾವುದೇ ಪಟ್ಟಭದ್ರ ಹಿತಾಸಕ್ತಿ ಇರಕೂಡದು. ಕೆಲವು ಸಂಶೋಧನಾ ಸಂಸ್ಥೆಗಳು ಬೆಂಗಳೂರಿಗೆ ಕಾಲಿಡುತ್ತಿವೆ. ಇವನ್ನು ನಗರದ ಹೊರ ವಲಯಕ್ಕೆ ಸ್ಥಳಾಂತರಿಸುವ ಕಡೆ ಚಿಂತನೆ ನಡೆಸಬೇಕು. ನಗರದ ಹೊರಭಾಗದಲ್ಲಿರುವ ಸಂಸ್ಥೆಗಳು ಹಾಗೂ ನಗರ ವ್ಯಾಪ್ತಿಯಲ್ಲಿರುವ ಸಂಸ್ಥೆಗಳ ಪಟ್ಟಿ ಮಾಡುವ ಅಗತ್ಯವಿದೆ ಎಂದು ಪೀಠ ಸರ್ಕಾರಕ್ಕೆ ಸಲಹೆ ನೀಡಿತು.
ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್ ಜನರಲ್, ಈಗಾಗಲೇ 12ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳನ್ನು ನಗರದ ಹೊರಭಾಗಕ್ಕೆ ಸ್ಥಳಾಂತರಿಸಲಾಗಿದೆ. ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವಂತೆ ಕೋರಿ ಒಟ್ಟಾರೆ ಕಟ್ಟಡಗಳಲ್ಲಿ ಶೇ.10ರಷ್ಟು ಮಾತ್ರ ಅರ್ಜಿ ಸಲ್ಲಿಕೆ ಆಗಬಹುದು ಎಂದು ಪೀಠಕ್ಕೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


