ಬೆಂಗಳೂರು ಗ್ರಾಮಾಂತರ

ಶಾಸಕದ್ವಯರಿಂದ ಅಧಿಕಾರಿಗಳ ತರಾಟೆ

Published On :

ರಾಮನಗರ: ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಚರ್ಚಿಸಲು ಕರೆದಿದ್ದ ಸಭೆಗೆ ಸಮರ್ಪಕ ಮಾಹಿತಿ ನೀಡಲು ವಿಫಲರಾದ ಅಧಿಕಾರಿಗಳನ್ನು ಶಾಸಕದ್ವಯರು ತರಾಟೆಗೆ ತೆಗೆದುಕೊಂಡರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೈಗೊಂಡಿರುವ ಕ್ರಮಗಳನ್ನು ಪರಾಮರ್ಶಿಸಲು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ಕರೆಯಲಾಗಿತ್ತು. ಈ ಸಭೆಗೆ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡಲು ವಿಫಲರಾದರು. ಇದರಿಂದ ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಕೆ.ರಾಜು ಕೆಂಡಾಮಂಡಲರಾದರು.
ಬರ ಬಂದಿರುವುದು ಅಧಿಕಾರಿಗಳು ಹಬ್ಬವಾಗಿದೆ. ಬರ ನಿರ್ವಹಣೆ ನೆಪದಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಬಿಡುಗಡೆಯಾದ ಅನುದಾನದ ಬಗ್ಗೆ ಯಾವುದೇ ಲೆಕ್ಕ ಪತ್ರಗಳನ್ನು ನಿರ್ವಹಣೆ ಮಾಡದೆ, ಅನುದಾನದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸರಿಯಾದ ಮಾಹಿತಿಯೊಂದಿಗೆ ಶನಿವಾರ ಬರುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಸಭೆಯನ್ನು ಮುಂದೂಡಲಾಯಿತು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಚ್.ಸಿ. ಬಾಲಕೃಷ್ಣ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಕುರಿತು ಸಭೆ ನಡೆಸಬೇಕಿತ್ತು. ಗದ್ಗುಗೆ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿರುವ ರೇಣುಕಾಚಾರ್ಯ ಈ ಜಿಲ್ಲೆಯನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.
ಸಮಸ್ಯೆ  ಉಲ್ಬಣ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ಹೆಚ್ಚುತ್ತಿದೆ. ಜನರಿಗೆ ಸಮರ್ಪಕ ಕುಡಿಯುವ ನೀರು ಒದಗಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ. ಅವಶ್ಯಕತೆ ಇರುವ ಕಡೆ ಮಾತ್ರ ಕೊಳವೆ ಬಾವಿಗಳನ್ನು ಕೊರೆಸಬೇಕು. ಆದರೆ ಕೆಲವು ಜಿ.ಪಂ. ಸದಸ್ಯರು ಪ್ರತಿಷ್ಠೆಗಾಗಿ ಪೈಪೋಟಿಗೆ ಬಿದ್ದು ಅನಗತ್ಯವಾಗಿ ಕೊಳವೆ ಬಾವಿಗಳನ್ನು ಕೊರೆಸಿ, ಅನುದಾನವನ್ನು ಪೋಲು ಮಾಡುತ್ತಿರುವುದು ಸರಿಯಲ್ಲ. ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಫೆ.15ರೊಳಗೆ ಖರ್ಚು ಮಾಡಬೇಕೆಂದು ತಾಕೀತು ಮಾಡಿದರು.
ಜಿಲ್ಲೆಯ ಬರ ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ವೈಯಕ್ತಿಕ ದ್ವೇಷ ಮತ್ತು ರಾಜಕೀಯವನ್ನು ಬದಿಗೊತ್ತಿ ಸಮರ್ಪಕ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಸೂಕ್ತ ಕ್ರಮಕ್ಕೆ ಶಿಫಾರಸ್ಸು ಮಾಡುವತೆ ಜಿ.ಪಂ. ಪ್ರಭಾರ ಸಿಇಒ ಸಿದ್ದರಾಮಯ್ಯ ಅವರಿಗೆ ಶಾಸಕ ಕೆ.ರಾಜು ಸೂಚನೆ ನೀಡಿದರು.
ಸಭೆಯಲ್ಲಿ ಜಿ.ಪಂ. ಅಧ್ಯಕ್ಷ ಕೆ. ಮುದ್ದುರಾಜ್ ಯಾದವ್, ಸದಸ್ಯ ಎಚ್.ಎಲ್.ಚಂದ್ರ, ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ, ಅಪರ ಜಿಲ್ಲಾಧಿಕಾರಿ ಅರ್ಚನಾ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.