ಬೆಂಗಳೂರು ನಗರ

'ಕೈ'ನಿಂದ ಕಾದು ನೋಡುವ ತಂತ್ರ

Published On :

ಬೆಂಗಳೂರು: ಅಧಿಕಾರಕ್ಕೆ ಬಂದ ನಂತರ ಐದನೇ ಬಾರಿಗೆ ರಾಜ್ಯ ಬಿಜೆಪಿ ಸರ್ಕಾರ ಸ್ವಪಕ್ಷೀಯರಿಂದಲೇ ಗಂಡಾಂತರ ಎದುರಿಸುತ್ತಿದ್ದು, ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕಾದು ನೋಡುವ ತಂತ್ರಕ್ಕೆ ಶರಣಾಗಲು ನಿರ್ಧರಿಸಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲು ನಿರ್ಧರಿಸಿದ್ದು, ಅವಿಶ್ವಾಸ ನಿರ್ಣಯ ಮಂಡಿಸದೇ ಇರಲು ಚಿಂತನೆ ನಡೆಸಿದ್ದಾರೆ.
ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲ ಅಧಿವೇಶನ ಸಂದರ್ಭದಲ್ಲೇ ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶವಿತ್ತು. ಆದರೆ ಸಂಖ್ಯಾಬಲ ಇಲ್ಲದೇ ಇರುವುದರಿಂದ ಈ ನಡೆ ಸೂಕ್ತವಲ್ಲ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ.
ಜತೆಗೆ ಅವಿಶ್ವಾಸ ನಿರ್ಣಯ ಮಂಡಿಸಿದರೆ ಕೆಜೆಪಿ ಜತೆ ಸೇರಿಕೊಂಡು ಸರ್ಕಾರ ಬೀಳಿಸಿದ ಅಪಕೀರ್ತಿ ಬರುತ್ತದೆ. ಇದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಜತೆಗೆ ಜೆಡಿಎಸ್‌ನ್ನು ನೆಚ್ಚಿಕೊಂಡು ಸರ್ಕಾರ ಉರುಳಿಸುವ ಪ್ರಯತ್ನಕ್ಕೆ ಕೈ ಹಾಕುವುದು ಸಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದೆ.
ಕುತೂಹಲಕಾರಿ ಸಂಗತಿ ಎಂದರೆ ರಾಜ್ಯದಲ್ಲಿ ಅಧಿಕಾರ ಹಿಡಿದ ನಂತರ ಐದನೇ ಬಾರಿಗೆ ಗಂಡಾಂತರ ಎದುರಿಸುತ್ತಿರುವ ಬಿಜೆಪಿ ಸರ್ಕಾರಕ್ಕೆ ಪ್ರತಿ ಬಾರಿ ಕೆಡುಕುಂಟು ಮಾಡುತ್ತಿರುವುದು ಸ್ವಪಕ್ಷೀಯರೇ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮೊದಲ ಬಾರಿಗೆ ಬಂಡೆದ್ದ ರೆಡ್ಡಿ ಸೋದರರು 40ಕ್ಕೂ ಹೆಚ್ಚು ಶಾಸಕರನ್ನು ಹೈದ್ರಾಬಾದ್‌ಗೆ ಕರೆದೊಯ್ದು ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ದಿದ್ದರು. ಆದರೆ ಬಿಜೆಪಿ ರಾಷ್ಟ್ರೀಯ ನಾಯಕಿ ಸುಷ್ಮಾ ಸ್ವರಾಜ್ ಮಧ್ಯಸ್ಥಿಕೆಯಿಂದ ಸರ್ಕಾರ ಬಚಾವ್ ಆಗಿತ್ತು.
ನಂತರ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ 13 ಶಾಸಕರು ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಭರವಸೆ ಇಲ್ಲ ಎಂದು ರಾಜಭವನಕ್ಕೆ ತೆರಳಿ ಮನವಿ ನೀಡಿದಾಗ ರಾಜ್ಯಪಾಲರು ವಿಶ್ವಾಸ ಮತ ಸಾಬೀತುಪಡಿಸುವಂತೆ ಸೂಚಿಸಿದ್ದರು. ಆಗ ಪ್ರತಿಪಕ್ಷ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ ಚಲಾಯಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.