ಇಂದು ಬಳ್ಳಾರಿ ಬಂದ್ಗೆ ಎಬಿವಿಪಿ ಕರೆ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಫೆ. 4
ವಿದ್ಯಾರ್ಥಿ ಸಾವನ್ನು ಖಂಡಿಸಿ ನಡೆಸಿದ ಪ್ರತಿಭಟನೆಯಲ್ಲಿ ಬಂಧಿತರಾದ ವಿದ್ಯಾರ್ಥಿಗಳಿಗೆ ಪೊಲೀಸರು ಕೋಳ ತೊಡಿಸಿರುವ ಕ್ರಮವನ್ನು ಖಂಡಿಸಿ ಎಬಿವಿಪಿಯಿಂದ ಫೆ. 5ರಂದು ಬಳ್ಳಾರಿ ಬಂದ್ಗೆ ಕರೆ ನೀಡಲಾಗಿದೆ ಎಂದು ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ಬಾಲಾಜಿ, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ ಪವಾರ್ ತಿಳಿಸಿದರು.
ನಗರದಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾರ್ಥಿ ಮುಖಂಡರಿಗೆ ಕೈಕೋಳ ಹಾಕಿಕೊಂಡು ನ್ಯಾಯಾಲಯಕ್ಕೆ ಕರೆತಂದ ಪೊಲೀಸರ ಕ್ರಮ ಸರಿಯಲ್ಲ, ವಿದ್ಯಾರ್ಥಿ ಸಾವಿನ ನ್ಯಾಯ ಕೇಳಲು ಚಳವಳಿ ನಡೆಸಿದ ವಿದ್ಯಾರ್ಥಿ ಮುಖಂಡರನ್ನು ಅಮಾನವೀಯವಾಗಿ ನಡೆಸಿಕೊಂಡಿರುವ ಪೊಲೀಸರ ವರ್ತನೆಯನ್ನು ಖಂಡಿಸಿ ಬಂದ್ಗೆ ಕರೆ ನೀಡಲಾಗಿದೆ ಎಂದರು.
ಇತ್ತೀಚೆಗೆ ನಳಂದಾ ಕಾಲೇಜಿನ ವಿದ್ಯಾರ್ಥಿ ಹೊಸಪೇಟೆ ಮೂಲದ ಕೃಷ್ಣಮೂರ್ತಿಯ ಆತ್ಮಹತ್ಯೆ ಹಿಂದೆ ಕೈವಾಡ ಇರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ತನಿಖೆಯಾಗಬೇಕು ಎಂದು ಶಾಲಾ-ಕಾಲೇಜು ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಂದಿ ಶಾಲೆ ಎಬಿವಿಪಿಗೆ ಸ್ಪಂಧಿಸಲಿಲ್ಲ, ಈ ಹಿನ್ನೆಲೆಯಲ್ಲಿ ವಾಗ್ವಾದ ನಡೆಯಿತೇ ವಿನಃ ಪೊಲೀಸರು ವಿದ್ಯಾರ್ಥಿಗಳನ್ನು ಥಳಿಸುವ ಪ್ರಸಂಗ ಇರಲಿಲ್ಲ. ಗಲಾಟೆಗೆ ಪೊಲೀಸರೆ ಕಾರಣರಾಗಿದ್ದಾರೆ. ವಿದ್ಯಾರ್ಥಿ ಚಳವಳಿಯನ್ನು ಹತ್ತಿಕ್ಕಲೆಂದು ಪೊಲೀಸರು ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ದೂರು ದಾಖಲಿಸಿದ್ದಾರೆ ಎಂದು ಆರೋಪಿಸಿದರು.
ಮಾನವ ಪಕ್ಕು ಉಲ್ಲಂಘನೆ: ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಸಾವಿಗೆ ನ್ಯಾಯ ಒದಗಿಸಿಕೊಡಬೇಕು ಹಾಗೂ ಪೊಲೀಸರ ವರ್ತನೆಯನ್ನು ಖಂಡಿಸಿ ಫೆ. 5ರಂದು ಕರೆ ನೀಡಿರುವ ಬಳ್ಳಾರಿ ಬಂದ್ ಶಾಂತಿಯುತವಾಗಿರುತ್ತದೆ. ಸ್ವಯಂಪ್ರೇರಣೆಯ ಬಂದ್ ಆಗಿದೆ. ವಿದ್ಯಾರ್ಥಿ ಮುಖಂಡರಿಗೆ ಕೈಕೋಳ ಹಾಕಿರುವ ಪೊಲೀಸರು ಮಾನವ ಹಕ್ಕು ಉಲ್ಲಂಘನೆ ಮಾಡಿದ್ದಾರೆ, ಎಬಿವಿಪಿ ಮುಖಂಡರನ್ನು ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸುಳ್ಳು ಮೊಕದ್ದಮೆ ದಾಖಲಿಸಿದ್ದಾರೆ. ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ದೂರಿದರು.
ನಗರ ಹೊರವಲಯದ ಖಾಸಗಿ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಸಾಗಾಟ ನಡೆಯುತ್ತಿದ್ದು, ಇದನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಪೋಷಕರು ಲಕ್ಷಾಂತರ ಹಣ ವ್ಯಯಿಸಿ ಖಾಸಗಿ ಕಾಲೇಜುಗಳ ವಿದ್ಯಾಭ್ಯಾಸಕ್ಕೆ ಕಳುಹಿಸುತ್ತಾರೆ. ಆದರೆ, ಕಾಲೇಜುಗಳಲ್ಲಿ ಮಾದಕ ವಸ್ತುಗಳ ಸಾಗಾಟ ನಡೆಯುತ್ತಿದೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ತಂದಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡ ಅಡವಿಸ್ವಾಮಿ, ಶಿವಪ್ರಸಾದ್, ಶ್ರೀಧರ್ ಸೇರಿದಂತೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

