ಗುಲ್ಬರ್ಗಾ

ಮತದಾನ ಪವಿತ್ರ ಹಕ್ಕು: ಜಿಲ್ಲಾಧಿಕಾರಿ

Published On :

ಗುಲ್ಬರ್ಗ: ಚುನಾವಣಾ ಸಮಯದಲ್ಲಿ ನಿರ್ಲಕ್ಷ್ಯತನ ತೊರದೆ ಮತ ಚಲಾಯಿಸುವ ಮೂಲಕ ವೈಯಕ್ತಿಕ ಹಾಗೂ ದೇಶದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಎಲ್ಲರೂ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಪ್ರಸನ್ನಕುಮಾರ್ ಅಭಿಪ್ರಾಯಪಟ್ಟರು.
ಶುಕ್ರವಾರ ನಗರದ ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಚುನಾವಣಾ ಆಯೋಗ ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಅಭಿವೃದ್ಧಿ ಚುನಾಯಿತ ಪ್ರತಿನಿಧಿಗಳ ಕೈಯಲ್ಲಿರುತ್ತದೆ. ಆದರೆ ಅವರನ್ನು ಆಯ್ಕೆಮಾಡುವ ಹಕ್ಕು ನಮ್ಮ ಕೈಯಲ್ಲಿಯೇ ಇದೆ. ಇದರಿಂದಾಗಿ ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಬೇಕು. ಇದಕ್ಕೆ ಅರ್ಹರಾದ ಎಲ್ಲರೂ ಮತದಾನ ಮಾಡಬೇಕು ಎಂದು ಕರೆ ನೀಡಿದರು.
ಗ್ರಾಮ, ತಾಲೂಕು, ಜಿಲ್ಲೆ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಜನ ಪ್ರತಿನಿಧಿಗಳನ್ನು ಆಯ್ಕೆ ಮಾಡಿದಲ್ಲಿ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಮತದಾರರು ಜಾಗೃತರಾಗಬೇಕು ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಲ್ಲವಿ ಆಕುರಾತಿ ಮಾತನಾಡಿ, ಚುನಾವಣಾ ಆಯೋಗ ದಿನೇ ದಿನೇ ಆಧುನಿಕತೆ ಅಳವಡಿಸಿಕೊಳ್ಳುತ್ತಿದೆ. ಈಗ ಇಂಟರ್ನೆಟ್, ಆನ್‌ಲೈನ್ ಮುಖಾಂತರವೂ ಮತದಾರ ಪಟ್ಟಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
ಐಎಎಸ್ ಪ್ರೋಬೇಷನರಿ ಅಧಿಕಾರಿ ಅಭಿರಾಮ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಭೂಷಣ, ಪ್ರಾಂಶುಪಾಲರಾದ ಬಡಶೇಷಿ, ಸಿದ್ದರಾಮಯ್ಯ ಹಿರೇಮಠ, ಎಸ್.ಎನ್. ಬಬಳಗಾಂ, ಕಲ್ಯಾಣರಾಮ್ ಅವರು ಮಾತನಾಡಿದರು.
ಗುಲ್ಬರ್ಗ ಸಹಾಯಕ ಆಯುಕ್ತ ಹರ್ಷಾ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜು ಅವರು ಚುನಾವಣೆಯ ಮತ ಚಲಾಯಿಸಲು ಪ್ರೇರೇಪಿಸುವ ಪ್ರತಿಜ್ಞಾವಿಧಿ ಬೋಧಿಸಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಅಧಿಕಾರಿಗಳು ಸೇರಿದಂತೆ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಪ್ರಸ್ತಾವಿಕ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.