ನೀರಿಗಾಗಿ ಅರಸೀಕೆರೆ ಬಂದ್
ಅರಸೀಕೆರೆ: ಬರಗಾಲದಿಂದ ತತ್ತರಿಸಿರುವ ತಾಲೂಕಿನ ಕೆರೆಗಳಿಗೆ ನೀರು ಒದಗಿಸಬೇಕು ಎಂದು ಒತ್ತಾಯಿಸಿ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಕಳೆದೊಂದು ತಿಂಗಳಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದರೂ ಜಿಲ್ಲಾಧಿಕಾರಿಯಾಗಲಿ, ಸರ್ಕಾರವಾಗಲಿ ಸ್ಪಂದಿಸದ ಕಾರಣ ರೈತ ಸಂಘ, ಕರವೇ ಹಾಗೂ ಪ್ರಗತಿಪರ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಅರಸೀಕೆರೆ ಬಂದ್ ಸಂಪೂರ್ಣ ಯಶಸ್ವಿಯಾಯಿತು.
ಬಂದ್ ಕರೆಯ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಪಟ್ಟಣದ ಎಲ್ಲ ಅಂಗಡಿ ಮುಂಗಟ್ಟುಗಳು, ತರಕಾರಿ ಮಾರುಕಟ್ಟೆ, ಕೃಷಿ ಉತ್ಪನ್ನ ಮಾರುಕಟ್ಟೆ, ಚಿತ್ರಮಂದಿರಗಳು, ಬ್ಯಾಂಕ್, ಸರ್ಕಾರಿ ಕಚೇರಿಗಳು ಬಂದ್ ಮಾಡುವ ಮೂಲಕ ಬೆಂಬಲಿಸಿದವು. ವಕೀಲರು ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸುವ ಮೂಲಕ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಬಸ್ ಸಂಚಾರಕ್ಕೆ ಬಂದ್ನಿಂದ ವಿನಾಯಿತಿ ನೀಡಲಾಗಿತ್ತು.
ಪಟ್ಟಣದ ಕೋಡಿಮಠ ಕಾಲೇಜಿನಿಂದ ಸಾವಿರಾರು ವಿದ್ಯಾರ್ಥಿಗಳು ಸೇರಿದಂತೆ ಸಹಸ್ರಾರು ರೈತರು, ನಗರ ಪ್ರದೇಶದ ಜನರು, ರಾಷ್ಟ್ರೀಯ ಹೆದ್ದಾರಿಯ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರಗಳ ಮಲತಾಯಿ ಧೋರಣೆಯನ್ನು ತೀವ್ರವಾಗಿ ಖಂಡಿಸಿ 'ಬೇಕೆ ಬೇಕು ನೀರು ಬೇಕು' ಎಂದು ಘೋಷಣೆಗಳನ್ನು ಕೂಗಿದರು. ರಾಷ್ಟ್ರೀಯ ಹೆದ್ದಾರಿ ಮೂಲಕ ಮೆರವಣಿಗೆಯಲ್ಲಿ ಸಾಗಿ ಪಟ್ಟಣದ ತಾಲೂಕು ಕಚೇರಿ ಎದುರು ಜಮಾಯಿಸಿದ ರೈತ ಮುಖಂಡರು ಅರ್ಧ ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಣಿ ನಡೆಸಿದ್ದರಿಂದ ವಾಹನ ಸಂಚಾರದಲ್ಲಿ ತೀವ್ರ ಅಡಚಣೆ ಉಂಟಾಗಿತ್ತು. ಅಗತ್ಯ ವಸ್ತುಗಳ ಖರೀದಿಗಾಗಿ ಪಟ್ಟಣಕ್ಕೆ ಆಗಮಿಸಿದ್ದ ಜನರು ಪರದಾಡುವಂತಾಗಿತ್ತು. ಆಟೋ ಚಾಲಕರ ಸಂಘ, ಕರವೇ, ಕೆಂಪೇಗೌಡ ವೇದಿಕೆ, ವರ್ತಕರ ಸಂಘ, ವಕೀಲರ ಸಂಘ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ, ಸ್ತ್ರೀ ಶಕ್ತಿ ಸಂಘಗಳು, ವಿದ್ಯಾರ್ಥಿ ಸಂಘಟನೆಗಳು ಬಂದ್ಗೆ ಸಂಪೂರ್ಣ ಬೆಂಬಲ ಘೋಷಿಸಿದ್ದವು.
ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರೈತ ಸಂಘದ ರಾಜ್ಯ ಕಾರ್ಯದರ್ಶಿ ಆನೇಕೆರೆ ರವಿ, ಜಿಲ್ಲಾ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್, ನೀರಾವರಿ ತಜ್ಞ ಪ್ರೊ.ಕೆ.ಆರ್.ಬಸವರಾಜ್, ಜಿಲ್ಲಾ ಬಿಜೆಪಿ ವಕ್ತಾರ ಎನ್.ಡಿ.ಪ್ರಸಾದ್, ಯುವ ಮೋರ್ಚಾ ಅಧ್ಯಕ್ಷ ರಮೇಶ್, ನಗರಾಧ್ಯಕ್ಷ ಹೀರಣ್ಣಯ್ಯ, ವಕೀಲರ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್, ಕರವೇ ತಾಲೂಕು ಅಧ್ಯಕ್ಷ ಹೇಮಂತ್ ಕುಮಾರ್, ಹಾರನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ನಂದೀಶ್, ಓಂಕಾರಪ್ಪ, ಕರೀಂ ಸಾಬ್, ರೈತ ಮುಖಂಡರಾದ ಲಕ್ಕಮ್ಮ, ಜವನಹಳ್ಳಿ ನಿಂಗಪ್ಪ, ಡಿ.ಎಂ.ಕುರ್ಕೆ ಜಯದೇವ್ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

