ಹಾವೇರಿ

ಟಿಇಟಿ ಕಡ್ಡಾಯ ಬೇಡ

Published On :

ಹಾವೇರಿ: ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸುತ್ತಿರುವುದು ಸ್ವಾಗತಾರ್ಹ. ಆದರೆ, ಈಗಾಗಲೇ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದವರಿಗೂ ಟಿಇಟಿ ಕಡ್ಡಾಯ ಮಾಡುವುದಕ್ಕೆ ತಮ್ಮ ವಿರೋಧವಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.
ನಗರದ ಅಕ್ಕನ ಬಳಗದ ಜ್ಞಾನಗಂಗಾ ಶಿಕ್ಷಣ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡುತ್ತಿರುವ ಶಿಕ್ಷಕರನ್ನು ಗುರುವಾರ ಭೇಟಿಯಾದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.
ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ಟಿಇಟಿ ಕಡ್ಡಾಯ ಮಾಡಲು ಹೊರಟಿರುವುದಕ್ಕೆ ತಮ್ಮ ವಿರೋಧವಿಲ್ಲ. ಆದರೆ, ಈಗಾಗಲೇ ಶಿಕ್ಷಕರಾಗಿ ಅನೇಕ ವರ್ಷ ಕಾರ್ಯನಿರ್ವಹಿಸಿದವರಿಗೂ ಕಡ್ಡಾಯ ಮಾಡುವುದು ಸರಿಯಲ್ಲ. ಶಿಕ್ಷಕರಾಗಿ ಸೇವೆಗೆ ಸೇರುವ ಮುನ್ನ ಅವರು ಪ್ರವೇಶ ಪರೀಕ್ಷೆ ಪಾಸಾಗಿಯೇ ಬಂದಿದ್ದಾರೆ. ಅಲ್ಲದೇ ಈಗ ಪಠ್ಯಕ್ರಮ ಬದಲಾಗಿದ್ದು, ಅವರು ಮತ್ತೆ ಪರೀಕ್ಷೆ ಬರೆಯುವ ಅಗತ್ಯವೇ ಇಲ್ಲ. ಒಂದು ವೇಳೆ ಹಳಬರು ಪರೀಕ್ಷೆಯಲ್ಲಿ ಫೇಲಾದರೆ ಏನು ಮಾಡಬೇಕು ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ಇದಕ್ಕಾಗಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು.  ಏ. 28ರಂದು ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದ್ದು, ಅಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು. ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ನಿಟ್ಟಿನಲ್ಲಿ ಆ ಶಾಲೆಯ ಮೂಲ ಸೌಲಭ್ಯಗಳನ್ನು ಪರಿಶೀಲಿಸಲು 3 ಸದಸ್ಯರ ಸಮಿತಿಯೊಂದನ್ನು ರಚಿಸಿದೆ. ನಾನು ಶಿಕ್ಷಣ ಸಚಿವನಾಗಿದ್ದಾಗ ಎಲ್ಲ ಅರ್ಹ ಅನುದಾನರಹಿತ ಶಾಲೆಗಳಿಗೆ ಅನುದಾನ ನೀಡಲಾಗಿತ್ತು. ನಂತರ 3 ವರ್ಷಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿಕೊಳ್ಳದಿದ್ದರೆ ಅನುದಾನ ನಿಲ್ಲಿಸಲಾಗುವುದು ಎಂದು ತಿಳಿಸಲಾಗಿತ್ತು. ಆದರೆ ಈ ಸರ್ಕಾರ ಶಾಲೆಗಳಿಗೆ ಗ್ರ್ಯಾಂಟ್ ನೀಡಲು ಮೀನಮೇಷ ಎಣಿಸುತ್ತಿರುವುದು ಸರಿಯಲ್ಲ. ಅಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು. ಇದಕ್ಕೂ ಮುನ್ನ ಶಿಕ್ಷಕರನ್ನು ಉದ್ದೇಶಿಸಿ ಅವರು ಮಾತನಾಡಿದರು. ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಸ್ಪಂದಿಸುವ ಭರವಸೆ ನೀಡಿದರು. ಸಂಘಟನೆ ಬಲಪಡಿಸಿ ಸಮಸ್ಯೆ ವಿರುದ್ಧ ಹೋರಾಡದಿದ್ದರೆ ಮುಂದೆ ತೊಂದರೆಯಾಗುವುದು ನಿಶ್ಚಿತ. ನಿರಂತರ ಮೌಲ್ಯಮಾ ಪನ, ವರ್ಗಾವಣೆ ನೀತಿ, ಹೆಚ್ಚುವರಿ ಶಿಕ್ಷಕರಿಗೆ ಆಗುತ್ತಿರುವ ತೊಂದರೆ ಇತ್ಯಾದಿ ಸಮಸ್ಯೆ ಕುರಿತು ತಮ್ಮ ಗಮನಕ್ಕೆ ತರುವಂತೆ  ತಿಳಿಸಿದರು.  
ಪಕ್ಷ ಸಂಘಟನೆ: ಪಕ್ಷಕ್ಕೆ ಉತ್ತರ ಕರ್ನಾಟಕ ಭಾಗದಲ್ಲಿ ಅಳಿವು ಉಳಿವಿನ ಪ್ರಶ್ನೆ ಎದುರಾಗಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಉಕ ಭಾಗದಲ್ಲಿ ಪಕ್ಷ ಸಂಘಟನೆ ಕುರಿತಂತೆ ಚರ್ಚಿಸಲು ಸಭೆ ಕರೆಯುತ್ತಿದ್ದೇನೆ. ಜೆಡಿಎಸ್ಗೆ ಸಮರ್ಥ ನಾಯಕರ ಕೊರತೆಯಿಲ್ಲ. ಆದರೆ ಚುನಾವಣೆ ಸಂದರ್ಭದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳುವವರು ನಮಗೆ ಅಗತ್ಯವಿಲ್ಲ. ಆದ್ದರಿಂದ ಪಕ್ಷದಿಂದ ಹೊರ ಹೋಗುವವರು ಹೋಗಬಹುದು. ಜನತಾ ಪರಿವಾರ ಸೇರಲು ಅನೇಕ ನಾಯಕರು ಒಲವು ತೋರುತ್ತಿದ್ದಾರೆಂದರು.


ಎ. ಕೃಷ್ಣಪ್ಪ ನಿಧನ ದೊಡ್ಡ ನಷ್ಟ
ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಎ. ಕೃಷ್ಣಪ್ಪ ಅವರ ಅಕಾಲಿಕ ನಿಧನದಿಂದ ಪಕ್ಷ ಹಾಗೂ ರಾಜ್ಯ ರಾಜಕೀಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಬಸವರಾಜ ಹೊರಟ್ಟಿ ಹೇಳಿದರು. ಕಳೆದ ಒಂದು ವರ್ಷದಿಂದ ಪಕ್ಷದ ರಾಜ್ಯಾಧ್ಯಕ್ಷರಾಗಿ ಉತ್ತಮ ರೀತಿಯಲ್ಲಿ ಅವರು ಕಾರ್ಯನಿರ್ವಹಿಸಿದ್ದರು. ಹಿಂದುಳಿದ ನಾಯಕರಾಗಿ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಲು ಶ್ರಮಿಸಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ಗೆ ಪರ್ಯಾಯವಾಗಿ ಜೆಡಿಎಸ್ ಬೆಳೆಸುವುದು ಅವರ ಆಶಯವಾಗಿತ್ತು. ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧಿಸಿ ವ್ಯಾಪಕ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ನಷ್ಟವಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.