ಕಾಂಗ್ರೆಸ್, ಬಿಜೆಪಿಗೆ ಮತ ಕೇಳುವ ನೈತಿಕ ಹಕ್ಕಿಲ್ಲ
ಕ.ಪ್ರ.ವಾರ್ತೆ ್ಣ ಮಂಡ್ಯ ್ಣ ಮಾ.30
ಕಾವೇರಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಲು ಕಾರಣವಾಗಿರುವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ರಾಜ್ಯದ ಜನರಲ್ಲಿ ಮತ ಕೇಳುವ ನೈತಿಕತೆ ಕಳೆದುಕೊಂಡಿವೆ ಎಂದು ಸಂಸದ ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಾವೇರಿ ವಿಚಾರದಲ್ಲಿ ಕರ್ನಾಟಕದ ಹಿತದೃಷ್ಟಿ ಕಾಪಾಡುವ ಪ್ರಯತ್ನ ಮಾಡಲೇ ಇಲ್ಲ. ಇನ್ನು ಬಿಜೆಪಿಯೂ ಚಕಾರ ಎತ್ತದೆ ಮೌನ ವಹಿಸಿತು ಎಂದು ಟೀಕಿಸಿದರು.
ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದ್ದರೂ ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರು ಅಸಹಾಯಕರಾಗಿದ್ದಾರೆ. ಕಾವೇರಿ ನ್ಯಾಯಮಂಡಳಿ ಅಧಿಸೂಚನೆ ಹೊರಬಿದ್ದಿದ್ದರೂ ನಮ್ಮ ಪಾಲಿನ ನೀರನ್ನು ಉಳಿಸಿಕೊಳ್ಳಲು ಇನ್ನೂ ಅವಕಾಶಗಳಿವೆ. ನ್ಯಾಯ ಸಿಗುವವರೆಗೂ ದೇವೇಗೌಡರು ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಲಿದ್ದಾರೆ ಎಂದು ತಿಳಿಸಿದರು.
ಇನ್ನು ನಿರ್ಧಾರವಿಲ್ಲ: ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ಸಾರ್ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಯಾವ ನಿರ್ಧಾರವೂ ಕೈಗೊಂಡಿಲ್ಲ. ಸ್ಥಳೀಯ ಕ್ಷೇತ್ರಗಳ ಪರಿಸ್ಥಿತಿ-ಸನ್ನಿವೇಶ ನೋಡಿಕೊಂಡು ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಭೇದ ಭಾವ ಇಲ್ಲ: ದಿ.ಸಿದ್ದರಾಜು ಅವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಿದೆ. ಅವರ ನಿಧನದ ನಂತರವೂ ಕಲ್ಪನಾ ಅವರಿಗೆ ಉಪಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ನೀಡಿ ಗೆಲ್ಲಿಸಿದ್ದನ್ನು ಮರೆಯಬಾರದು. ಸಂಬಂಧಕ್ಕೆ ಹೆಚ್ಚಿನ ಮಹತ್ವ ನೀಡುವುದಾಗಿದ್ದರೆ ಹಿಂದೆಯೇ ತಮ್ಮಣ್ಣ ಅವರಿಗೆ ಟಿಕೆಟ್ ನೀಡಿ ಗೆಲ್ಲಿಸುತ್ತಿದ್ದೆವು ಎಂದು ಹೇಳಿದರು.
ಚುನಾವಣೆಯಲ್ಲಿ ಟಿಕೆಟ್ ಕೇಳುವುದಕ್ಕೆ ಪಕ್ಷದಲ್ಲಿರುವ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯವಿದೆ. ಯಾರಿಗೆ ಟಿಕೆಟ್ ನೀಡಬೇಕೆಂಬ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ. ಕಲ್ಪನಾ ಅವರು ಪಕ್ಷಕ್ಕೆ ವಾಪಸ್ ಬಂದರೆ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಲಾಗುವುದು ಎಂದು ಚಲುವರಾಯಸ್ವಾಮಿ ತಿಳಿಸಿದರು.
ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ, ಶಾಸಕರಾದ ಎಂ.ಶ್ರೀನಿವಾಸ್, ಸಿ.ಎಸ್.ಪುಟ್ಟರಾಜು, ರಮೇಶ್ ಬಂಡಿಸಿದ್ದೇಗೌಡ, ವಿಧಾನಪರಿಷತ್ ಸದಸ್ಯ ಬಿ.ರಾಮಕೃಷ್ಣ, ಮಾಜಿ ಶಾಸಕರಾದ ಡಿ.ಸಿ.ತಮ್ಮಣ್ಣ, ಡಾ.ಕೆ.ಅನ್ನದಾನಿ, ಪ್ರಭಾವತಿ ಜಯರಾಂ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಯುವ ಮುಖಂಡ ಅಶೋಕ್ ಜಯರಾಂ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

