ಅತ್ಯಾಚಾರಕ್ಕೆ 'ಪ್ರತಿ'ಧ್ವನಿ
ರಾಯಚೂರು: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಾಗುತ್ತಿರುವ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಖಂಡಿಸಿ ನಗರದಲ್ಲಿ ಮಂಗಳವಾರ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮತ್ತಿತರೆ ಸಂಘಟನಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿವರೆಗೆ ಸಾಗಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ ಜನವಾದಿ ಮಹಿಳಾ ಸಂಘಟನೆ, ಎಸ್ಎಫ್ಐ ಮತ್ತು ಸಿಐಟಿಯು ಸಂಘಟನೆಗಳ ಕಾರ್ಯಕತರು ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣಗಳ ಹೆಚ್ಚಳ ಆತಂಕಕಾರಿಯಾಗಿದೆ ಎಂದು ದೂರಿದರು.
ಮಹಿಳೆಯರು ಮತ್ತು ಮಕ್ಕಳ ಮೇಲಾಗುತ್ತಿರುವ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ತಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪ್ರಬಲ ಕಾನೂನು ರಚನೆ ಅವಶ್ಯವಾಗಿದ್ದು ಸರ್ಕಾರ ಕಾನೂನು ಸುವ್ಯವಸ್ಥೆ ಬಿಗಿಗೊಳಿಸುವಲ್ಲಿ ಅಸಡ್ಡೆ ಪ್ರದರ್ಶಿಸಿದೆ ಎಂದು ಟೀಕಿಸಿದರು.
ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ: ರಾಜ್ಯದಲ್ಲಿ ಕಳೆದೊಂದು ವಾರದಲ್ಲಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಕೇಸುಗಳ ಸಂಖ್ಯೆ ಹೆಚ್ಚಳವಾಗಿವೆ. ಇಂಥ ಪ್ರಕರಣಗಳು ಹೆಚ್ಚುತ್ತಿದ್ದರೂ ಸರ್ಕಾರ ಮಾತ್ರ ಕಾನೂನು ಕ್ರಮ ಕೈಗೊಳ್ಳುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ಪ್ರದರ್ಶಿಸಿದೆ. ಸರ್ಕಾರದ ವಿಳಂಬ ನೀತಿಯಿಂದಾಗಿ ಮತ್ತಷ್ಟು ಅತ್ಯಾಚಾರದ ಪ್ರಕರಣಗಳ ಹೆಚ್ಚಳಕ್ಕೆ ದಾರಿ ಮಾಡಿದೆ ಎಂದು ಆತಂಕ ವ್ಯಕ್ತಪಡಿಸಿದರು.
ವಿರೋಧ ಪಕ್ಷ ಬಿಜೆಪಿ ಸಹ ರಾಜಕೀಯ ಲಾಭಕ್ಕಾಗಿ ಅತ್ಯಾಚಾರದ ಪ್ರಕರಣಗಳನ್ನು ಬಳಸಿಕೊಳ್ಳುತ್ತಿದ್ದು ಅದು ಸರಿಯಲ್ಲ. ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣಗಳು ಹೆಚ್ಚಳ ಕಾಣುತ್ತಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಆರೋಪಿಸಿದರು.
ಸೂಕ್ತ ರಕ್ಷಣೆಯಿಲ್ಲ: ರಾಜ್ಯದಲ್ಲಿ ಸದ್ಯ ಮಹಿಳೆಯರು ಹಾಗೂ ಯುವತಿಯರಿಗೆ ಸೂಕ್ತ ರಕ್ಷಣೆಯಿಲ್ಲವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇಂಥ ಪ್ರಕರಣಗಳನ್ನು ದಾಖಲಿಸಲು ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ದೂರಿದರು.
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ತಡೆಗೆ ಸರ್ಕಾರ ಕೂಡಲೇ ಪ್ರಬಲ ಕಾನೂನು ರೂಪಿಸಲು ಮುಂದಾಗಬೇಕು. ಇಂಥ ಅಪರಾಧ ಎಸಗುವ ಆರೋಪಿಗಳ ವಿರುದ್ಧ ಕೂಡಲೇ ವಿಳಂಬ ಅನುಸರಿಸದೆ ಪ್ರಕರಣ ದಾಖಲಿಸಿ ಬಂಧಿಸಬೇಕು. ಮಹಿಳೆಯರ ರಕ್ಷಣೆಗೆ ಸರ್ಕಾರ ಸಹಾಯವಾಣಿ ಆರಂಭಿಸಬೇಕು. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

