ಅಪೌಷ್ಟಿಕತೆ ಆತಂಕದಲ್ಲಿ ಸಮಾಜ
ರಾಯಚೂರು: ದೇಶದ ಮುಂದಿನ ಪೀಳಿಗೆಯ ಆರೋಗ್ಯ ಕಾಪಾಡುವುದು ಸಮಾಜದಲ್ಲಿನ ಎಲ್ಲರ ಹೊಣೆ. ಈ ನಿಟ್ಟಿನಲ್ಲಿ ಈಗಿನಿಂದಲೇ ಮಕ್ಕಳ ಆರೋಗ್ಯ ಸಂರಕ್ಷಣೆಯ ಕಾರ್ಯ ಮಾಡಬೇಕಿದೆ. ಯೋಜನಾಬದ್ಧ ರೀತಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ ಮಕ್ಕಳಲ್ಲಿನ ಅಪೌಷ್ಟಿಕತೆಯ ಸಮಸ್ಯೆ ಹೋಗಲಾಡಿಸಲು ಮುಂದಾಗುವಂತೆ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾ. ಎನ್.ಕೆ. ಪಾಟೀಲ್ ಕರೆ ನೀಡಿದರು.
ನಗರದಲ್ಲಿ ಶನಿವಾರ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳಲ್ಲಿನ ಅಪೌಷ್ಟಿಕತೆ ತಡೆಗಟ್ಟುವುದರ ಬಗೆಗಿನ ಸಮಗ್ರ ಕಾರ್ಯ ಯೋಜನೆ ಅನುಷ್ಠಾನ ಹಾಗೂ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಕುರಿತ ಅರಿವು ನೆರವು ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅನುಷ್ಠಾನಕ್ಕೆ ಸಲಹೆ ನೀಡಿ: ದೇಶದ ಜನಸಂಖ್ಯೆಯ ಹೆಚ್ಚಳದೊಂದಿಗೆ ಆರೋಗ್ಯ ಸಂಬಂಧಿ ಸಮಸ್ಯೆಗಳು ಏರುಮುಖವಾಗಿ ಸಾಗುತ್ತಿವೆ. ಅದರಲ್ಲೂ ಮಕ್ಕಳಲ್ಲಿನ ಅಪೌಷ್ಟಿಕತೆಯ ಸಮಸ್ಯೆ ಸಮಾಜವನ್ನು ಆತಂಕಕ್ಕೆ ದೂಡಿದೆ. ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆ ನಿಟ್ಟಿನಲ್ಲಿ ಜಾರಿಗೆ ತಂದಿರುವ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲರೂ ಶ್ರಮಿಸಬೇಕಿದೆ ಎಂದು ಸಲಹೆ ನೀಡಿದರು.
ಮಕ್ಕಳು ದೇಶದ ಭವಿಷ್ಯದ ಪ್ರಜೆಗಳು. ದೇಶದ ಭವಿಷ್ಯದ ಏಳಿಗೆಗೆ ಮಕ್ಕಳ ಆರೋಗ್ಯದೆಡೆಗೆ ಗಮನ ಕೊಡುವುದು ಅವಶ್ಯಕ. ಈ ನಿಟ್ಟಿನಲ್ಲಿ ಸಮಾಜದ ಮೇಲೆ ಬಹುದೊಡ್ಡ ಹೊಣೆಯಿದೆ. ಸಮಾಜದಲ್ಲಿನ ಎಲ್ಲರೂ ತಮ್ಮ ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಾಗೃತಗೊಳ್ಳುವಂತೆ ಕರೆ ನೀಡಿದರು.
ಗ್ರಾಮೀಣ ಭಾಗದಲ್ಲಿನ ಬಡತನ, ಶಿಕ್ಷಣದ ಕೊರತೆ, ಆರ್ಥಿಕ ಮುಗ್ಗಟ್ಟುನಂತಹ ಪರಿಸ್ಥಿತಿಯಿಂದಾಗಿ ಅಪೌಷ್ಟಿಕತೆಯ ಪ್ರಮಾಣ ಹೆಚ್ಚಾಗಿದೆ. ಗ್ರಾಮೀಣ ಭಾಗದವರಲ್ಲಿ ಜಾಗೃತಿ ಮೂಡಿಸುವ ಮೂಲಕ ಪಾಲಕರಲ್ಲಿ ಮಕ್ಕಳ ಲಾಲನೆ, ಪೋಷಣೆ, ಶಿಕ್ಷಣ ಕೊಡಿಸುವಿಕೆಗೆ ಹೆಚ್ಚಿನ ಒತ್ತು ನೀಡಲು ಶ್ರಮ ಅಗತ್ಯ ಎಂದರು.
ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ವರದಿ: ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಶೋಕ ನಿಜಗಣ್ಣವರ್ ಮಾತನಾಡಿ, 2012ರಲ್ಲಿಯೇ ಅಪೌಷ್ಟಿಕತೆ ಸಮಸ್ಯೆಗೆ ಸಂಬಂಧಿಸಿ ಮಕ್ಕಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ನೇತೃತ್ವದ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ವರದಿಯ ಶಿಫಾರಸಿಗೆ ಸರ್ಕಾರ ಸಮ್ಮತಿಸಿದೆ ಎಂದು ಹೇಳಿದರು.
ಜಿಪಂ ಸಿಇಒ ವಿಜಯ ಜೋತ್ಸ್ನಾ ಮಾತನಾಡಿ, ಸರ್ಕಾರ ಅಪೌಷ್ಟಿಕತೆಗೆ ಸಂಬಂಧಿಸಿ ಕಾಲದಿಂದ ಕಾಲಕ್ಕೆ ನೀಡಿದ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ಅರಣ್ಯ ಇಲಾಖೆ ಸಹಯೋಗದೊಂದಿಗೆ 100 ಎಕರೆ ಸರ್ಕಾರಿ ಜಮೀನಿನಲ್ಲಿ ಹಣ್ಣಿನ ಗಿಡಗಳನ್ನು ಬೆಳೆಸಿ ಮಕ್ಕಳಿಗೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಸಮಾರಂಭದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಪಿ.ಜಿ.ಎಂ. ಪಾಟೀಲ್, ಡಾ. ನರಸಿಂಹ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಡಿಡಿ ಲಕ್ಷ್ಮಿಕಾಂತಮ್ಮ, ವಕೀಲರ ಸಂಘದ ಅಧ್ಯಕ್ಷ ಭಾನುರಾಜ್ ಸೇರಿ ಅನೇಕರಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಎ.ಎಸ್. ಪಚ್ಚಾಪುರೆ ವಹಿಸಿದ್ದರು. ವಿವಿಧೆಡೆಯಿಂದ ಆಗಮಿಸಿದ್ದ ಶಿಕ್ಷಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

