ಶಿವಮೊಗ್ಗ

ನಾಳೆ ಕಾಂಗ್ರೆಸ್ ಸಮಾವೇಶ: ಕಾಗೋಡು

Published On :

ಶಿವಮೊಗ್ಗ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಬಲ ತೋರಿಸಲು ಜ.23ರಂದು ಜಿಲ್ಲಾ ಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಕಾಂಗ್ರೆಸ್‌ನೊಂದಿಗೆ ಬನ್ನಿ, ಬದಲಾವಣೆ ತನ್ನಿ ಎಂಬ ಘೋಷಣೆ ಅಡಿಯಲ್ಲಿ ಜಿಲ್ಲೆಯಲ್ಲಿ ಈ ಮೂಲಕ ಕಾರ್ಯತಂತ್ರ ರೂಪಿಸಲು ಮುಂದಾಗಿದೆ.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಬಿಜೆಪಿ ಭ್ರಷ್ಟಾಚಾರದಿಂದ ಜನರು ರೋಸಿಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದೃಢಗೊಳಿಸಲು ಈ ಸಮಾವೇಶ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10.30ಕ್ಕೆ ಬುದ್ಧನಗರದಲ್ಲಿರುವ ಎಕ್ಸಿಬಿಷನ್ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಸೇರಿದಂತೆ ಹಲವರು ಪಾಲ್ಗೊಳ್ಳುವರು. 15 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.
ಪ್ರಜ್ಞಾಹೀನ ಸರ್ಕಾರ: ರಾಜ್ಯ ಸರ್ಕಾರವು ಕಳೆದ ನಾಲ್ಕುವರೆ ವರ್ಷದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದೆ. ಏನು ಮಾಡಿದರೂ ಚೇತರಿಸಿಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ಮುಖ್ಯಮಂತ್ರಿಯಾಗಿದ್ದರವರು ಜೈಲಿಗೆ ಹೋಗಿ ಬರುತ್ತಾರೆ. ಮಂತ್ರಿಗಳಲ್ಲಿ ಜೈಲಿನಲ್ಲಿರುತ್ತಾರೆ. ನೈತಿಕತೆ ಕಳೆದುಕೊಂಡಿರುವ ಈ ಸರ್ಕಾರ ಮುಂದುವರಿಯಬಾರದು ಎಂದು ಕಾಗೋಡು ತಿಮ್ಮಪ್ಪ ಕಿಡಿಕಾರಿದರು.
 ಒಕ್ಕಲೆಬ್ಬಿಸುವ ಹುನ್ನಾರ: ಮೂಲ ಸೌಕರ್ಯ ಸಿಗದೆ ಜನರು ಪರದಾಡುತ್ತಿರುವಾಗ ಕೋಟಿ ಕೋಟಿ ಲೆಕ್ಕದಲ್ಲಿ ಬಜೆಟ್ ಮಂಡಿಸುತ್ತಾರೆ. ರಾಜ್ಯಾದ್ಯಂತ ಬರ ಪರಿಸ್ಥಿತಿ ಇದ್ದರೂ ಕ್ರಮ ಕೈಗೊಂಡಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಶೂನ್ಯ ಎಂದು ಟೀಕಿಸಿದ ಅವರು, ಅರಣ್ಯ ಹಕ್ಕು ಕಾಯ್ದೆಯ ಸಮರ್ಪಕ ಅನುಷ್ಠಾನ ಆಗುತ್ತಿಲ್ಲ. ಇನ್ನೊಂದೆಡೆ ಇಂಡೀಕರಣದ ಹೆಸರಿನಲ್ಲಿ ರೈತರನ್ನು, ಬಡವರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಯುತ್ತಿದೆ ಎಂದ ಅವರು, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಭೂಸಂಬಂಧಿ ಗೊಂದಲಗಳನ್ನು ಪರಿಹರಿಸಲು ಮೊದಲ ಆದ್ಯತೆ ನೀಡುವುದು. ಜನರಿಗೆ ಭೂಮಿಯ ಹಕ್ಕು ನೀಡುವುದು ಎಂದರು.
ವಲಸೆ ರಾಜಕೀಯ: ಕಾಂಗ್ರೆಸ್ ಪಕ್ಷಕ್ಕೆ ಬೇಳೂರು ಬರ್ತಾರಾ ನೀವು ಸಾಗರ ಕ್ಷೇತ್ರದಿಂದ ಸ್ಪರ್ಧಿಸುತ್ತೀರಾ ಎಂದು ಕೇಳಿದಾಗ, ನಾವು ಪಕ್ಷದ ಒಬ್ಬ ಕಾರ್ಯಕರ್ತನಾಗಿ ಇದಕ್ಕೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಅದನ್ನು ಪಕ್ಷದ ವರಿಷ್ಠರು ನಿರ್ಣಯಿಸುತ್ತಾರೆ. ಬೇಳೂರು ಪಕ್ಷ ಸೇರ್ಪಡೆ ಬಗ್ಗೆ ಜಿಲ್ಲಾ ಸಮಿತಿ ತನ್ನ ಅಭಿಪ್ರಾಯವನ್ನು ಕೆಪಿಸಿಸಿಗೆ ತಿಳಿಸಿದೆ. ಮುಂದಿನ ತೀರ್ಮಾನ ಅವರಿಗೆ ಬಿಟ್ಟದ್ದು ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಯಾರಾದರೂ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆಂದರೆ ಅವರು ಮೊದಲು ಕಾರ್ಯಕರ್ತರಾಗಿ ಕೆಲಸ ಮಾಡಬೇಕು. ಬಂದ ಕೂಡಲೇ ನಾಯಕರಾಗಬೇಕೆಂಬ ಆಸೆಗೆ ಪ್ರೋತ್ಸಾಹ ಇಲ್ಲ ಎಂದು ಸೂಚ್ಯವಾಗಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ, ಮುಖಂಡರಾದ ಕೆ.ಬಿ. ಪ್ರಸನ್ನಕುಮಾರ್, ಪಿ. ರುದ್ರೇಶ್, ಎಚ್.ಎಸ್. ಸುಂದರೇಶ್, ಎಚ್.ಸಿ. ಯೋಗೀಶ್, ಎಸ್.ಪಿ. ದಿನೇಶ್, ಕಲಗೋಡು ರತ್ನಾಕರ್, ಕೆ. ರಂಗನಾಥ್, ಕೆ. ದೇವೇಂದ್ರಪ್ಪ, ವಿಜಯಲಕ್ಷ್ಮೀ ಸಿ. ಪಾಟೀಲ್, ಜಮೀಲಾ ಖಾನಂ ಸೇರಿದಂತೆ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.