ಅಂಗವಿಕಲರ ಬೇಡಿಕೆಗೆ ಡೆಡ್ಲೈನ್
ತುಮಕೂರು: ಅಂಗವಿಕಲರ ಹಲವು ಬೇಡಿಕೆ ಕುರಿತಂತೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗಮನಹರಿಸಿ ಫೆ.3ರೊಳಗೆ ಸ್ಪಷ್ಟ ಭರವಸೆ ನೀಡದಿದ್ದರೆ ಸಿಎಂ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣ ವೇದಿಕೆ ಅಧ್ಯಕ್ಷ ಸಿ.ಗಂಗರಾಜು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೌತಿಕ ಪರಿಶೀಲನೆಯ ನೆಪದಲ್ಲಿ ಜಿಲ್ಲೆಯ 15 ಸಾವಿರ ಅಂಗವಿಕಲರಿಗೆ ನೀಡುತಿದ್ದ ಮಾಸಾಶನ ರದ್ದುಪಡಿಸಲಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಸಂಬಂಧಪಟ್ಟ ಮಂತ್ರಿಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದಿದ್ದಾರೆ.
ಕಳೆದ ಎರಡು ವರ್ಷಗಳಿಂದ ಪರಿಶೀಲಿಸುವ ಮಾತನಾಡುತ್ತಿರುವ ಜಿಲ್ಲಾಡಳಿತ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ ಅಂಗವಿಕಲರ ಪುನರ್ವಸತಿಗೆಂದು ನೇಮಕಗೊಂಡಿರುವ ವಿ.ಆರ್.ಡಬ್ಲ್ಯೂ, ಎಂ.ಆರ್.ಡಬ್ಲ್ಯುಗಳಿಗೆ ನೀಡುತ್ತಿರುವ ಅಲ್ಪ ಗೌರವಧನವನ್ನು ಸರಿಯಾದ ಸಮಯಕ್ಕೆ ನೀಡುತ್ತಿಲ್ಲ. ಕೆಲವು ತಾಲೂಕುಗಳಲ್ಲಿ 10 ತಿಂಗಳಿನಿಂದ ಇವರಿಗೆ ಗೌರವಧನ ದೊರೆತ್ತಿಲ್ಲ.
ಸುಮಾರು 16 ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈ ಹಿಂದೆ ತುಮಕೂರಿನಲ್ಲಿ ಅಂಗವಿಕಲರ ಜಿಲ್ಲಾ ಅಂಗವಿಕಲ ಕಲ್ಯಾಣ ವೇದಿಕೆಯ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ಕಾನೂನು ಸಚಿವ ಎಸ್. ಸುರೇಶ್ ಕುಮಾರ್, ತುಮಕೂರು ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರುಗಳು ಮುಖ್ಯಮಂತ್ರಿಗಳ ಬಳಿ ಮಾತನಾಡಿ ಅಂಗವಿಕಲರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗುವುದಾಗಿ ಭರವಸೆ ನೀಡಿದ್ದರು. ಇದಾಗಿ ಒಂದು ವರ್ಷ ಕಳೆಯುತ್ತಾ ಬಂದಿದ್ದರೂ ಒಂದು ಬೇಡಿಕೆ ಈಡೇರಿಲ್ಲ ಎಂದಿದ್ದಾರೆ.
ಹೀಗಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು, ಈ ಮನವಿಗೆ ಫೆ.3 ರೊಳಗೆ ಸ್ಪಂದಿಸದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಶಿವಣ್ಣ ಅವರೊಂದಿಗೆ ನಿಯೋಗ ಹೋಗಿ ಭೇಟಿ ಮಾಡಿ ಅಂಗವಿಕಲರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಡಲಾಗುವುದು. ಆಗಲೂ ಸ್ಪಂದಿಸದಿದ್ದರೆ ರಾಜ್ಯದ ಎಲ್ಲಾ ಅಂಗವಿಕಲರೊಂದಿಗೆ ಮುಖ್ಯಮಂತ್ರಿಗಳ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಸಿ.ಗಂಗರಾಜು ತಿಳಿಸಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣ ವೇದಿಕೆಯ ಉಪಾಧ್ಯಕ್ಷ ಗಂಗಾಧರಪ್ಪ, ಇನಾಯತ್ ಖಾನ್, ರಮೇಶ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

