ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅಸಮಾಧಾನ
ಸಿದ್ದರಾಮಯ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಹಿರಿಯ ಮುಖಂಡ, ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಮತ್ತೊಮ್ಮೆ ಅಸಮಾಧಾನ ಹೊರಹಾಕಿದ್ದಾರೆ.

ಶಿವಮೊಗ್ಗ: ಸಿದ್ದರಾಮಯ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಹಿರಿಯ ಮುಖಂಡ, ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಮತ್ತೊಮ್ಮೆ ಅಸಮಾಧಾನ ಹೊರಹಾಕಿದ್ದಾರೆ.
ಪಾರದರ್ಶಕ ಆಡಳಿತ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರದಲ್ಲಿ ಮುಂದುವರೆಯದೆ ಇದ್ದರೆ ಒಳಿತು ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕಾಗೋಡು ತಿಮ್ಮಪ್ಪ, " ಅಧಿಕಾರ ವಹಿಸಿಕೊಂಡ ದಿನದಿಂದಲೂ ಪಾರದರ್ಶಕತೆಯ ಮಂತ್ರ ಜಪಿಸುತ್ತಿದ್ದಾರೆ. ಆದರೆ ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ಎಲ್ಲಿದೆ? ಸರ್ಕಾರಕ್ಕೆ ಪತ್ರ ಬರೆದರೆ ಅದು ಎಲ್ಲಿದೆ ಎಂಬುದು ಯಾರಿಗೂ ತಿಳಿಯುವುದಿಲ್ಲ. ಹೀಗಿರುವಾಗ ಸರ್ಕಾರ ಪಾರದರ್ಶಕತೆ ಬಗ್ಗೆ ಏಕೆ ಜನರಿಗೆ ಭರವಸೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಇನ್ನು ರಾಜ್ಯ ಸರ್ಕಾರ ಬರ ಪರಿಸ್ಥಿತಿ ನಿರ್ವಹಣೆ ಮಾಡುತ್ತಿರುವ ರೀತಿಯ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿರುವ ಕಾಗೋಡು ತಿಮ್ಮಪ್ಪ, "ವಿಧಾನಮಂಡಲ ಅಧಿವೇಶನಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಶಾಸಕರು ವಿಫಲರಾಗಿದ್ದಾರೆ. ಶಾಸಕನಾಗಿ ಅಧಿವೇಶನಗಳಲ್ಲಿ ನಾನು ಪಾಲ್ಗೊಳ್ಳುವಂತಿದ್ದಿದ್ದರೆ, ಕಾಗೋಡು ತಿಮ್ಮಪ್ಪ ಯಾರೆಂಬುದನ್ನು ತೋರಿಸುತ್ತಿದ್ದೆ". ಎಂದಿದ್ದಾರೆ.
ರಾಜ್ಯ ಸರ್ಕಾರವೇ 136 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಆದರೆ ಬರ ನಿರ್ವಹಣೆ ವಿಷಯದಲ್ಲಿ ಸರ್ಕಾರ ಆಸಕ್ತಿ ತೋರುತ್ತಿಲ್ಲ, ಹಲವು ತಾಲೂಕುಗಳಲ್ಲಿ ಜಾನುವಾರುಗಳಿಗೆ, ಜನರಿಗೆ ಕುಡಿಯಲು ನೀರೂ ಸಿಗುತ್ತಿಲ್ಲ ಎಂದು ಕಾಗೋಡು ತಿಮ್ಮಪ್ಪ ಸರ್ಕಾರದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಮ್ಮ ಅಸಹಾಯಕತೆ ಬಗ್ಗೆಯೂ ಮಾತನಾಡಿರುವ ಕಾಗೋಡು ತಿಮ್ಮಪ್ಪ, ನಾನು ಸೂಕ್ಷ್ಮವಾದ ಸ್ಥಾನದಲ್ಲಿದ್ದೇನೆ, ಪಕ್ಷದಿಂದ ದೂರವಿದ್ದೇನೆ, ಸಭಾಧ್ಯಕ್ಷನಾಗಿದ್ದುಕೊಂಡು ಪ್ರಾಮಾಣಿಕನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ ಎಂಬ ತೃಪ್ತಿ ಇದೆ. ಸಭಾಧ್ಯಕ್ಷನಾಗುವುದು ಒಂದು ರೀತಿಯ ಶಿಕ್ಷೆ, ಜೈಲಿನಲ್ಲಿದ್ದಂತೆ ಭಾಸವಾಗುತ್ತಿದೆ ಎಂದು ತಿಮ್ಮಪ್ಪ ಅಸಹಾಯಕತೆ ತೋಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


