ಲ್ಯಾಬ್ ವಿವಾದ: ಸಿದ್ದು ವಿರುದ್ಧದ ಆರೋಪಗಳ ಕುರಿತು ವರದಿ ಪಡೆದ ಸೋನಿಯಾ
ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಗ್ನಾಸ್ಟಿಕ್ ಲ್ಯಾಬ್ ಸ್ಥಾಪಿಸಲು ಅನುಮತಿ ನೀಡಿರುವ ವಿವಾದಕ್ಕೆ ಸಂಬಂಧಿಸಿ ಈಗಾಗಲೇ ಸಾಕಷ್ಟು ಸಂಕಷ್ಟಗಳನ್ನು ಅನುಭವಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...

ನವದೆಹಲಿ: ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಗ್ನಾಸ್ಟಿಕ್ ಲ್ಯಾಬ್ ಸ್ಥಾಪಿಸಲು ಅನುಮತಿ ನೀಡಿರುವ ವಿವಾದಕ್ಕೆ ಸಂಬಂಧಿಸಿ ಈಗಾಗಲೇ ಸಾಕಷ್ಟು ಸಂಕಷ್ಟಗಳನ್ನು ಅನುಭವಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಸಿದ್ದರಾಮಯ್ಯ ಅವರ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳ ಸಂಬಂಧ ಇದೀಗ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿಯವರು ದೆಹಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಂದ ವರದಿ ಪಡೆದಿದ್ದಾರೆಂದು ಹೇಳಲಾಗುತ್ತಿದೆ.
ದೆಹಲಿಯಲ್ಲಿ ಈಗಾಗಲೇ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರು ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಆರೋಪಗಳ ಸಂಬಂಧ ಸೋನಿಯಾ ಗಾಂಧಿಯವರಿಗೆ ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ.
ಸಿದ್ದರಾಮಯ್ಯ ಅವರು ತಮ್ಮ ಪುತ್ರ ಡಾ.ಯತೀಂದ್ರ ಅವರ ಪಾಲುದಾರಿಯ ಸಂಸ್ಥೆಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಡಯಾಗ್ನಾಸ್ಟಿಕ್ಸ್ ಸೆಂಟರ್ ತೆರೆಯಲು ಒಡಂಬಡಿಕೆ ಮಾಡಿರುವುದು ಮತ್ತು ಪುತ್ರನ ವ್ಯವಹಾರ ಪಾಲುದಾರ ಡಾ.ರಾಜೇಶ ಗೌಡ ಪಾಲುದಾರಿಕೆ ಕಂಪನಿಗೆ ಬಿಡಿಎ ಅಕ್ರಮವಾಗಿ ಹೆಬ್ಬಾಳದಲ್ಲಿ ಜಮೀನು ಮಂಜೂರು ಮಾಡಿದ ಪ್ರಕರಣಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಪರಮೇಶ್ವರ್ ಅವರು ಕಾಂಗ್ರೆಸ್ ನಾಯಕರೊಂದಿಗೆ ಹಂಚಿಕೊಂಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ದೆಹಲಿಯಲ್ಲಿ ಸೋನಿಯಾ ಅವರನ್ನು ಭೇಟಿಯಾದ ಪರಮೇಶ್ವರ್ ಅವರು ಸುಮಾರು 30 ನಿಮಿಷಗಳಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಭೇಟಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ಪರಮೇಶ್ವರ್ ಅವರು, ರಾಜ್ಯದ ಸಾಕಷ್ಟು ವಿಚಾರಗಳ ಕುರಿತಂತೆ ಸೋನಿಯಾ ಗಾಂಧಿಯವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಆದರೆ, ಈ ಬಗ್ಗೆ ಮತ್ತಷ್ಟು ಮಾಹಿತಿ ನೀಡಲು ನಿರಾಕರಿಸಿದ್ದಾರೆ.
ಸಿಎಂ ಸಿದ್ದು ವಿರುದ್ಧ ದೋಷಾರೋಪ ಪಟ್ಟಿ ದಾಖಲಿಸಲಿದೆ ಎಸಿಬಿ?
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಈ ಹಿಂದೆ ಕೇಳಿಬಂದಿದ್ದ ವಾಚ್ ವಿವಾದ ರಾಜ್ಯದಲ್ಲಿ ಭಾರಿ ಚರ್ಚೆಯನ್ನುಂಟು ಮಾಡಿತ್ತು. ಇದಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಅವರ ವಿರುದ್ಧ ನಗರದ ವಕೀಲ ನಟರಾಜ ಶರ್ಮಾ ಅವರು ಏಪ್ರಿಲ್ 2 ರಂದು ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದೂರು ದಾಖಲಿಸಿದ್ದರು.
ಇದೀಗ ದೂರನ್ನು ಸ್ವೀಕರಿಸಿರುವ ಎಸಿಬಿ, ಪ್ರಕರಣ ಸಂಬಂಧ ಭ್ರಷ್ಟಾಚಾರ ನಿಗ್ರಹದ ಅಡಿಯಲ್ಲಿ ತನಿಖೆ ನಡೆಸಲು ಹಾಗೂ ದೋಷರೋಪ ದಾಖಲಿಸಿಕೊಳ್ಳಲು 15 ದಿನಗಳ ಕಾಲ ಕಾಲಾವಕಾಶ ಕೇಳಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


