ಆತ್ಮಹತ್ಯೆಗೆ ಯತ್ನಿಸಿದ್ದ ಪಿಎಸ್ಐ ರೂಪ ಅಪಾಯದಿಂದ ಪಾರು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಹಿರಿಯ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಮಂಗಳವಾರ ಆತ್ಮಹತ್ಯೆಗೆ ಯತ್ನಿಸಿದ್ದ ವಿಜಯನಗರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರೂಪಾ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಬೆಂಗಳೂರು: ಹಿರಿಯ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಮಂಗಳವಾರ ಆತ್ಮಹತ್ಯೆಗೆ ಯತ್ನಿಸಿದ್ದ ವಿಜಯನಗರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರೂಪಾ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ನಿನ್ನೆ ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೂಪಾ ತೆಂಬದ ಅವರನ್ನು ಸಮೀಪದ ಸುಗುಣಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ರೂಪಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಸ್ತುತ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆ ಮೂಲಗಳ ಪ್ರಕಾರ ರೂಪಾ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಪ್ರಸ್ತುತ ಆವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ತುರ್ತು ನಿಗಾಘಟಕದಲ್ಲೇ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪೋಕ್ಸೋ ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಪ್ರಕರಣವೊಂದರ ಸಂಬಂಧ ವಿಜಯನಗರ ಪೊಲೀಸ್ ಇನ್ಸ್ ಪೆಕ್ಟರ್ ಸಂಜೀವ್ ಗೌಡ ಮತ್ತು ರೂಪ ತೆಂಬದ ಅವರ ನಡುವೆ ಈ ಹಿಂದೆ ವಾಗ್ವಾದವಾಗಿತ್ತು ಎಂದು ಹೇಳಲಾಗುತ್ತಿದೆ. ಅಲ್ಲದೆ ಇನ್ಸ್ ಪೆಕ್ಟರ್ ಸಂಜೀವ್ ಅವರು ಠಾಣೆಯ ಡೈರಿಯಲ್ಲಿ ರೂಪಾ ಅವರಿಂದ ಕರ್ತವ್ಯಲೋಪವಾಗಿದೆ ಎಂದು ವರದಿ ಬರೆದಿದ್ದರು. ಇದರಿಂದ ಬೇಸತ್ತ ರೂಪ ಅವರು ಮನೆಗೆ ತೆರಳಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ.
ಇನ್ನು ರೂಪಾ ಆತ್ಮಹತ್ಯೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರ ಕುಟುಂಬಸ್ಥರು, ವಿಜಯನಗರ ಠಾಣಾಧಿಕಾರಿ ಸಂಜೀವ್ ಗೌಡ ಅವರು ರೂಪಾ ಅವರ ಮೇಲೆ ಒತ್ತಡ ಹೇರುತ್ತಿದ್ದರು. ಅವರ ಹೆಚ್ಚಾದ ಒತ್ತಡದಿಂದಾಗಿಯೇ ರೂಪಾ ಅವರು ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸಂಜೀವ್ ಗೌಡ ವಿರುದ್ಧ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು
ಈ ನಡುವೆ ರೂಪಾ ಆತ್ಮಹತ್ಯೆ ಪ್ರಕರಣ ವಿಚಾರದಲ್ಲಿ ಮಹಿಳಾ ಆಯೋಗ ಮಧ್ಯಪ್ರವೇಶ ಮಾಡಿದ್ದು, ವಿಜಯನಗರ ಇನ್ಸ್ ಪೆಕ್ಟರ್ ಸಂಜೀವ್ ಗೌಡ ಅವರ ವಿರುದ್ಧ ಕಿರುಕುಳ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಮಾತನಾಡಿರುವ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಅವರು, ಮಹಿಳೆ ಪೊಲೀಸ್ ಅಧಿಕಾರಿಗಳ ಒತ್ತಡ ನಿವಾರಣೆಗಾಗಿ ಮಹಿಳಾ ಆಯೋಗ ಅವರಿಗೆ ಕೌನ್ಸಲಿಂಗ್ ನಡೆಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


