ಮಹದಾಯಿ: ಬಂದ್ ಗೆ ಬೆಂಗಳೂರು, ಮೈಸೂರು, ಹಾಸನದಲ್ಲಿ ಉತ್ತಮ ಪ್ರತಿಕ್ರಿಯೆ
ಮಹಾದಾಯಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕದ ವಿರುದ್ಧವಾಗಿ ಬಂದಿರುವ ತೀರ್ಪನ್ನು ಖಂಡಿಸಿ...

Published On :
ಬೆಂಗಳೂರು: ಮಹಾದಾಯಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕದ ವಿರುದ್ಧವಾಗಿ ಬಂದಿರುವ ತೀರ್ಪನ್ನು ಖಂಡಿಸಿ ಮತ್ತು ರಾಜ್ಯದ ಜನಪ್ರತಿನಿಧಿಗಳು ಕೇಂದ್ರದಲ್ಲಿ ಸರಿಯಾದ ವಾದ ಮಂಡಿಸುತ್ತಿಲ್ಲ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಮೈಸೂರು, ಹಾಸನದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೆ, ಬೀದರ್, ದಕ್ಷಿಣ ಕನ್ನಡದಲ್ಲಿ ಅಷ್ಟೊಂದು ಪರಿಣಾಮ ಬೀರಿಲ್ಲ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಅಂಗಡಿ-ಮುಂಗಟ್ಟುಗಳು ಇಂದು ಬೆಳಗ್ಗೆಯಿಂದಲೇ ಮುಚ್ಚಿವೆ. ರಾಜ್ಯ ರಸ್ತೆ ಸಾರಿಗೆ ಬಸ್ಸುಗಳು ರಸ್ತೆಗಿಳಿದಿಲ್ಲ. ಖಾಸಗಿ ಬಸ್ಸು, ಆಟೋ ಎಂದಿನಂತೆ ಸಂಚರಿಸುತ್ತಿವೆ. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸ್ ಪಡೆ ನಿಯೋಜಿಸಲಾಗಿದೆ.
ಮೈಸೂರು ನಗರದ ಹೃದಯ ಭಾಗದಲ್ಲಿ ವ್ಯಾಪಾರ, ವಹಿವಾಟು ಇಲ್ಲದೆ ಸ್ಥಬ್ಧವಾಗಿದೆ. ಆದರೆ ಹೊಟೇಲ್ ಮತ್ತು ರೆಸ್ಟೋರೆಂಟ್ ಗಳು ಎಂದಿನಂತೆ ತೆರೆದಿವೆ. ಹೊಟೇಲ್ ಗಳ ನೌಕರರು ಮತ್ತು ಉದ್ಯಮಿಗಳು ತಮ್ಮ ತೋಳಿಗೆ ಕಪ್ಪು ಪಟ್ಟಿ ಧರಿಸಿ ಬೆಂಬಲ ಸೂಚಿಸಿದ್ದಾರೆ.
ಮೈಸೂರು ಬಸ್ ನಿಲ್ದಾಣದಲ್ಲಿ ಬಸ್ ಮತ್ತು ಜನ ಸಂಚಾರವಿಲ್ಲದೆ ಮರುಭೂಮಿ ನೋಟ ಕಾಣಿಸಿತ್ತು. ರೈಲು ಸೇವೆಯಿದ್ದರೂ ಪ್ರಯಾಣಿರಕು ಅಷ್ಟೊಂದು ಸಂಖ್ಯೆಯಲ್ಲಿರಲಿಲ್ಲ. ಮೈಸೂರು ಜಿಲ್ಲಾಧಿಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸದಿದ್ದರೂ ಖಾಸಗಿ ಶಾಲೆಗಳು ಜಿಲ್ಲೆಯಲ್ಲಿ ರಜೆ ಘೋಷಿಸಿವೆ. ಸರ್ಕಾರಿ ಶಾಲಾ ಕಾಲೇಜುಗಳು ತೆರೆದಿದ್ದವು. ಸರ್ಕಾರಿ ಸಂಸ್ಥೆಗಳು ತೆರೆದಿದ್ದರೂ ಕೆಲಸ ಕಾರ್ಯಗಳಿಗಾಗಿ ಬಂದವರ ಸಂಖ್ಯೆ ತೀರಾ ವಿರಳವಾಗಿತ್ತು. ಒಟ್ಟಾರೆ ಕರ್ನಾಟಕ ಬಂದ್ ಗೆ ಮೈಸೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಹುಬ್ಬಳ್ಳಿ: ಮಹಾದಾಯಿ ವಿವಾದಕ್ಕೆ ಸಂಬಂಧಪಟ್ಟಂತೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಸಿ.ಎಸ್.ಶಿವಳ್ಳಿ ಮತ್ತು ಇತರ ನಾಯಕರನ್ನು ಬಂಧಿಸಲಾಯಿತು. ನವಲಗುಂದ ತಾಲ್ಲೂಕಿನ ಯಮನೂರು ಗ್ರಾಮದಲ್ಲಿ ಪೊಲೀಸರ ಕಾರ್ಯಾಚರಣೆಗೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಹಾಸನ: ಹಾಸನ ಜಿಲ್ಲೆಯಲ್ಲಿ ಕೂಡ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ, ಶಾಲಾ-ಕಾಲೇಜುಗಳು ಮುಚ್ಚಿದ್ದವು. ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದರೆ, ಸರ್ಕಾರಿ ಬಸ್ಸುಗಳೂ ಇರಲಿಲ್ಲ. ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ರೈತ ಸಂಘ ಮತ್ತು ಇತರ ಸಂಘಟನೆಗಳು ಇಂದು ಬಂದ್ ಗೆ ಕರೆ ನೀಡಿವೆ.
ಬೆಳಗಾವಿ, ಸವದತ್ತಿ, ರಾಮದುರ್ಗ, ಬೈಲಹೊಂಗಲ ಪಟ್ಟಣ, ಖಾನಾಪುರ ಪಟ್ಟಣಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಬಳ್ಳಾರಿ: ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬಳ್ಳಾರಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾಮಾನ್ಯ ಜನಜೀವನ ಸ್ವಲ್ಪ ಮಟ್ಟಿಗೆ ಪರಿಣಾಮ ಬೀರಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿತ್ತು. ಸರ್ಕಾರಿ ಬಸ್ಸು ಸಂಚರಿಸಲಿಲ್ಲ. ಪ್ರಯಾಣಿಕರು ಖಾಸಗಿ ವಾಹನಗಳಿಗೆ ಅವಲಂಬಿಸಬೇಕಾಗುತ್ತಿತ್ತು.
ಹೈದರಾಬಾದ್-ಕೊಲ್ಲಾಪುರ ಎಕ್ಸ್ ಪ್ರೆಸ್ ರೈಲನ್ನು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಡೆಹಿಡಿದರು.ಬಳ್ಳಾರಿ ನಗರದ ಮುಖ್ಯ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಿದರು. ಮಹಾದಾಯಿ ನದಿ ನೀರನ್ನು ಕರ್ನಾಟಕ ಭಾಗದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ ರೈತರಿಗೆ ಸಹ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಪ್ರಧಾನಿ ಮೋದಿಯವರು ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸಿ ರಾಜ್ಯದ ರೈತರಿಗೆ ನ್ಯಾಯ ದೊರಕಿಸಿಕೊಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಕೆಲವು ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ ತೆರೆದಿದ್ದರೂ ಕೂಡ ಪ್ರತಿಭಟನಾಕಾರರು ಒತ್ತಾಯಿಸಿದ್ದರಿಂದ ನಂತರ ಮುಚ್ಚಲಾಯಿತು. ಜಿಲ್ಲೆಯ ಯಾವುದೇ ಭಾಗದಲ್ಲಿ ಅಹಿತಕರ ಘಟನೆ ವರದಿಯಾಗಿಲ್ಲ.
ಬೀದರ್: ಕರ್ನಾಟಕ ಬಂದ್ ಗೆ ಬೀದರ್ ನಲ್ಲಿ ತೀವ್ರ ಕಡಿಮೆ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಾಲಾ, ಕಾಲೇಜುಗಳು, ಖಾಸಗಿ ಸಂಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸಿವೆ. ಉತ್ತರ ಕರ್ನಾಟಕ ಸಾರಿಗೆ, ಖಾಸಗಿ ವಾಹನಗಳು ಎಂದಿನಂತೆ ಓಡಾಡುತ್ತಿದ್ದವು. ಬೀದರ್ ನ ಕೇಂದ್ರ ಸರ್ಕಾರಿ ಕಚೇರಿಗಳ ಸಮೀಪ, ರೈಲ್ವೆ ಸ್ಟೇಷನ್ ಗಳ ಮುಂದೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಬಂದ್ ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೂಡ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಾಲಾ ಕಾಲೇಜುಗಳು, ಖಾಸಗಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿವೆ. ಸರ್ಕಾರಿ ಮತ್ತು ಖಾಸಗಿ ವಾಹನಗಳು ಎಂದಿನಂತೆ ಸಂಚಾರ ನಡೆಸುತ್ತಿದ್ದವು.ಇನ್ನೂ ಹಲವು ಜಿಲ್ಲೆಗಳ ವರದಿಗಳು ಬರುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


