110 ತಾಲೂಕುಗಳಲ್ಲಿ ಬರ: 12ಸಾವಿರ ಕೋಟಿ ಮೌಲ್ಯದ ಬೆಳೆ ನಾಶ
ರಾಜ್ಯದ 110 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದೆ. ಬರ ಪರಿಸ್ಥಿತಿಯಿಂದಾಗಿ ಈ ತಾಲೂಕುಗಳಲ್ಲಿ ಒಟ್ಟು 12 ಸಾವಿರ ಕೋಟಿ ರೂ. ಬೆಳೆ...

ಬೆಂಗಳೂರು: ರಾಜ್ಯದ 110 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದೆ. ಬರ ಪರಿಸ್ಥಿತಿಯಿಂದಾಗಿ ಈ ತಾಲೂಕುಗಳಲ್ಲಿ ಒಟ್ಟು 12 ಸಾವಿರ ಕೋಟಿ ರೂ. ಬೆಳೆ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ.
ರಾಜ್ಯದಲ್ಲಿ ಉದ್ಭವಿಸಿರುವ ಬರ ಪರಿಸ್ಥಿತಿ ಮತ್ತು ಬೀದರ್, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿ ಉಂಟಾದ ನೆರೆ ಹಾವಳಿಯಿಂದ ಆಗಿರುವ ನಷ್ಟ ಪರಿಹಾರಕ್ಕಾಗಿ ಕೇಂದ್ರದಿಂದ ಒಟ್ಟು 3373.85 ಕೋಟಿ ರೂ. ಪರಿಹಾರ ನೆರವು ಕೇಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಈ ಕುರಿತು ಕಂದಾಯ ಇಲಾಖೆ ಸಿದ್ಧಪಡಿಸಿದ ವರದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಪೈಕಿ ಬರ ಪರಿಹಾರಕ್ಕಾಗಿ 3373.85 ಕೋಟಿ ರೂ. ಹಾಗೂ ನೆರೆ ಪರಿಹಾರಕ್ಕಾಗಿ 386.44 ಕೋಟಿ ರೂ. ನೆರವು ಕೇಳಲಾಗುತ್ತಿದೆ ಎಂದು ಸಚಿವ ಜಯಚಂದ್ರ ತಿಳಿಸಿದ್ದಾರೆ.
ರಾಷ್ಟ್ರೀಯ ವಿಕೋಪ ಪರಿಹಾರ ನಿಧಿ ಮಾರ್ಗಸೂಚಿಯನ್ವಯ 3373.85 ಕೋಟಿ ರೂ. ಪರಿಹಾರ ನೀಡಬೇಕಿದ್ದು, ಈ ಮೊತ್ತ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದರು. ಇನ್ನು ಒಂದೆರಡು ದಿನಗಳಲ್ಲಿ ಕೃಷಿ ಮತ್ತು ಕಂದಾಯ ಸಚಿವರು ದೆಹಲಿಗೆ ತೆರಳಿ ನೇರವಾಗಿ ಮನವಿ ಸಲ್ಲಿಸಲಿದ್ದಾರೆ ಎಂದು ಹೇಳಿದರು.
ಉಡುಪಿ ನಗರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ 5 ಎಕರೆ ಜಾಗವನ್ನು ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣಕ್ಕಾಗಿ 30 ವರ್ಷ ಗುತ್ತಿಗೆಗೆ ಅನಿವಾಸಿ ಭಾರತೀಯ ಉದ್ಯಮಿ ಬಿ.ಆರ್. ಶೆಟ್ಟಿ ಅವರ ಬಿಆರ್‌ಎಸ್ ಆರೋಗ್ಯ ಮತ್ತು ಸಂಶೋಧನಾ ಸಂಸ್ಥೆಗೆ ಹಸ್ತಾಂತರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಈಗ ಇರುವ ಆಸ್ಪತ್ರೆಯನ್ನು ಕೆಡವಿ 200 ಕೋಟಿ ವೆಚ್ಚದಲ್ಲಿ 400 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಬಿ.ಆರ್. ಶೆಟ್ಟಿ ಮುಂದೆ ಬಂದಿದ್ದಾರೆ. ಈ ಸಂಬಂಧ ಒಡಂಬಡಿಕೆ ಮಾಡಿಕೊಳ್ಳಲು ಆರೋಗ್ಯ ಇಲಾಖೆ ಸಿದ್ಧಪಡಿಸಿದ್ದ ಕರಡು ಪ್ರಸ್ತಾವನೆಗೆ ಸಭೆ ಒಪ್ಪಿಗೆ ನೀಡಿದೆ ಎಂದು ಸಚಿವ ಜಯಚಂದ್ರ ಅವರು ತಿಳಿಸಿದರು.
ಯಾವುದೇ ಶುಲ್ಕವನ್ನೂ ವಿಧಿಸಲು ಅವಕಾಶ ನೀಡಿಲ್ಲ. ಖಾಸಗಿ ಸಹಭಾಗಿತ್ವದಲ್ಲಿ ಉತ್ತಮ ಆರೋಗ್ಯ ಸೇವೆ ನೀಡುವುದು ಸರ್ಕಾರದ ಆಶಯ. ಸಾರ್ವಜನಿಕರ ಎಲ್ಲಾ ಅನುಮಾನಗಳ ಬಗ್ಗೆ ಚರ್ಚಿಸಿಯೇ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದೂ ಅವರು ಸಮರ್ಥಿಸಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


