ವಿಷಾಹಾರ ಸೇವಿಸಿ 3 ವಿದ್ಯಾರ್ಥಿಗಳ ದಾರುಣ ಸಾವು; ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ
ವಿಷಾಹಾರ ಸೇವನೆಯಿಂದಾಗಿ ವಸತಿ ಶಾಲೆಯೊಂದರ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿ ಇಬ್ಬರು ಗಂಭೀರವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ..

ತುಮಕೂರು: ವಿಷಾಹಾರ ಸೇವನೆಯಿಂದಾಗಿ ವಸತಿ ಶಾಲೆಯೊಂದರ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿ ಇಬ್ಬರು ಗಂಭೀರವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರಿನ ಚಿಕ್ಕನಾಯಕನ ಹಳ್ಳಿಯಲ್ಲಿವ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ರಾತ್ರಿ ಊಟ ಸೇವಿಸಿದ ಬಳಿಕ ಐವರು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ, ಪ್ರಥಮ ಚಿಕಿತ್ಸೆ ಬಳಿಕೆ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಮಾರ್ಗ ಮಧ್ಯೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿಗಳನ್ನು ಶಾಂತಮೂರ್ತಿ, ಆಕಾಂಕ್ಷ ಪಲ್ಲಕ್ಕಿ ಮತ್ತು ಶ್ರೇಯಸ್ ಎಂದು ಗುರುತಿಸಲಾಗಿದೆ.
ಅಂತೆಯೇ ಸುದರ್ಶನ್ ಎಂಬ ಮತ್ತೋರ್ವ ವಿದ್ಯಾರ್ಥಿ ಹಾಗೂ ವಸತಿ ಶಾಲೆಯ ಗಾರ್ಡ್ ಕೂಡ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಈ ಖಾಸಗಿ ಶಾಲೆ ಮಾಜಿ ಶಾಸಕ ಕಿರಣ್ ಕುಮಾರ್ ಅವರಿಗೆ ಸೇರಿದ ಶಾಲೆಯಾಗಿದೆ ಎಂದು ತಿಳಿದುಬಂದಿದೆ. ಇಬ್ಬರ ಸ್ಥಿತಿಯೂ ಗಂಭೀರವಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಇನ್ನು ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ತುಮಕೂರು ಜಿಲ್ಲಾ ಡಿಎಚ್ ಒ ರಂಗಸ್ವಾಮಿ ಅವರು, ಮೇಲ್ನೋಟಕ್ಕೆ ವಿಷಾಹಾರ ಸೇವನೆಯಿಂದಾಗಿ ವಿದ್ಯಾರ್ಥಿಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಸೇವಿಸಿದ ಆಹಾರದ ಮಾದರಿಗಳನ್ನು ಸಂಗ್ರಹಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಹಾಸ್ಟೆಲ್ ನ ಇತರೆ ವಿದ್ಯಾರ್ಥಿಗಳು ಊಟ ಸೇವಿಸದ ಕಾರಣ ಅವರಿಗೆ ಯಾವುದೇ ತೊಂದರೆಯಾಗಿಲ್ಲ. ಮೊದಲು ಈ ಐವರು ಊಟ ಸೇವಿಸಿ ಅಸ್ವಸ್ಥರಾಗಿದ್ದರು. ಹೀಗಾಗಿ ಹಾಸ್ಟೆಲ್ ಉಳಿದ ವಿದ್ಯಾರ್ಥಿಗಳು ಊಟ ಸೇವಿಸಿರಲಿಲ್ಲ ಎಂದು ಹೇಳಿದ್ದಾರೆ.
ಪ್ರಸ್ತುತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ತನಿಖೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ
ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮಾಹಿತಿ ಕೇಳಿದೆ. ಇನ್ನು ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಘಟನೆಯಲ್ಲಿ ವಿದ್ಯಾರ್ಥಿಗಳು ಸಾವನ್ನಪ್ಪಿದ ವಿಚಾರ ಕೇಳಿ ತುಂಬಾ ನೋವಾಗಿದೆ. ವಿದ್ಯಾರ್ಥಿಗಳ ಸಾವಿಗೆ ಕಾರಣವಾದ ಅಂಶಗಳ ಕುರಿತು ತನಿಖೆ ನಡೆಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಆದೇಶ ನೀಡಿದ್ದೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


