ರಕ್ಷಣಾ ಇಲಾಖೆಗೆ ಸಂಬಂಧಪಟ್ಟ 10 ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ; ಸಿಎಂ ಕುಮಾರಸ್ವಾಮಿ
ಕೇಂದ್ರ ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಂ ಅವರು ರಾಜ್ಯದಲ್ಲಿ ಬಾಕಿ ಉಳಿದಿರುವ 10 ರಕ್ಷಣಾ ಇಲಾಖೆಗೆ ಸಂಬಂಧಪಟ್ಟ...

ಬೆಂಗಳೂರು: ಕೇಂದ್ರ ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಂ ಅವರು ರಾಜ್ಯದಲ್ಲಿ ಬಾಕಿ ಉಳಿದಿರುವ 10 ರಕ್ಷಣಾ ಇಲಾಖೆಗೆ ಸಂಬಂಧಪಟ್ಟ ಯೋಜನೆಗಳಿಗೆ ಅನುಮತಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ನಗರದಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ರಕ್ಷಣಾ ಇಲಾಖೆಯ ಭೂಮಿಯನ್ನು ವರ್ಗಾಯಿಸುವ ಕುರಿತು ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿಧಾನಸೌಧದಲ್ಲಿ ಇಂದು ಮಾತುಕತೆ ನಡೆಸಿದರು.
ಕಳೆದ ಬಾರಿ ನಾನು ದೆಹಲಿಗೆ ಹೋಗಿದ್ದಾಗ ಬೆಂಗಳೂರಿನಲ್ಲಿ ನಮ್ಮ ಮೆಟ್ರೊ ಯೋಜನೆಗೆ ರಕ್ಷಣಾ ಇಲಾಖೆಯ ಭೂಮಿಯನ್ನು ನೀಡುವಂತೆ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಮನವಿ ಮಾಡಿದ್ದೆ. ಮೆಟ್ರೊ ಜಾಲವನ್ನು ವಿಸ್ತರಿಸಲು ಮತ್ತು ಮೆಟ್ರೊ ನಿಲ್ದಾಣಗಳ ನಿರ್ಮಾಣಕ್ಕೆ ಹೆಚ್ಚಿನ ಭೂಮಿಯ ಅವಶ್ಯಕತೆಯಿದ್ದು ಅದು ರಕ್ಷಣಾ ಇಲಾಖೆಗೆ ಸೇರಿದ ಸ್ಥಳವಾಗಿದೆ. ಈ ಭೂಮಿಯನ್ನು ನೀಡುವಂತೆ ಕೇಳಿಕೊಂಡಿದ್ದೆ ಎಂದು ಸಿಎಂ ಹೇಳಿದರು.
ರೈಲ್ವೆ ಮೇಲ್ಸೇತುವೆ (ಆರ್‌ಒಬಿ), ಸರ್ವಿಸ್ ರಸ್ತೆ, ಪಾದಚಾರಿ ಮಾರ್ಗ, ಮೆಟ್ರೋ ಎರಡನೇ ಹಂತದ ಯೋಜನೆ ಸೇರಿದಂತೆ ಹಲವು ಕಾಮಗಾರಿಗಳಿಗೆ ನಗರದಲ್ಲಿರುವ ರಕ್ಷಣಾ ಇಲಾಖೆಗೆ ಸೇರಿದ ಸುಮಾರು 16 ಎಕರೆ ಭೂಮಿಯ ಅವಶ್ಯಕತೆ ಇದೆ. ಇದನ್ನು ಹಸ್ತಾಂತರಿಸಿ, ಬದಲಿ ಭೂಮಿಯನ್ನು ಪಡೆಯಲು ಅವಕಾಶ ಕಲ್ಪಿಸುವಂತೆ ಮುಖ್ಯಮಂತ್ರಿ ರಕ್ಷಣಾ ಸಚಿವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯಗಳಿಗೆ ಸಂಬಂಧಪಟ್ಟ ಕೆಲಸಗಳನ್ನು ತ್ವರಿತವಾಗಿ ಕೈಗೊಂಡು ಅಭಿವೃದ್ಧಿಗೆ ರಾಜ್ಯ ಸರ್ಕಾರದ ಜೊತೆ ಎಲ್ಲಾ ರೀತಿಯಲ್ಲಿ ಸಹಕರಿಸುವುದಾಗಿ ಸಚಿವೆ ತಿಳಿಸಿದರು.
ವಿಧಾನಸೌಧಕ್ಕೆ ಆಗಮಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ವಿಧಾನಸೌಧದ ಪೂರ್ವದ್ವಾರದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಚಿವ ಕೆ ಜೆ ಜಾರ್ಜ್ ಸೇರಿದಂತೆ ಬೆಂಗಳೂರು ಮೇಯರ್ ಸಂಪತ್ ರಾಜ್, ಕೇಂದ್ರ ರಕ್ಷಣಾ ಇಲಾಖೆಯ ಅಪರ ಕಾರ್ಯದರ್ಶಿ ಸುಭಾಷ್ ಚಂದ್ರ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು, ರಕ್ಷಣಾ ಇಲಾಖೆ ಅಧಿಕಾರಿಗಳು ಹಾಗೂ ಸೇನೆಯ ಅಧಿಕಾರಿಗಳು ಭಾಗವಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


