ಶಿಕ್ಷಣ ಹಕ್ಕು ಕಾಯ್ದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಒಪ್ಪಿಗೆ
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆ...

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆ(ಆರ್ ಟಿಇ) ಗೆ ತಿದ್ದುಪಡಿ ತರಲು ಮುಂದಾಗಿದೆ.
ಸ್ಥಳೀಯ ಪ್ರದೇಶದ ನಿಗದಿತ ಪರಿಧಿಯಲ್ಲಿ ಸರ್ಕಾರಿ ಶಾಲೆಗಳು ಇಲ್ಲದಿದ್ದಲ್ಲಿ ಮಾತ್ರ ಖಾಸಗಿ ಶಾಲೆಗಳಿಗೆ ಆರ್‌ಟಿಇ ಅಡಿ ಪ್ರವೇಶ ಕಲ್ಪಿಸುವ ಮಹತ್ವದ ನಿರ್ಧಾರವನ್ನು ನಿನ್ನೆ ನಡೆದ ಸಚಿವ ಸಂಪುಟ ಸಭೆ ಕೈಗೊಂಡಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕರ್ನಾಟಕ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಲು ಮಕ್ಕಳ ಹಕ್ಕು (ತಿದ್ದುಪಡಿ) ನಿಯಮ 2018’ಕ್ಕೆ ಅನುಮೋದನೆ ನೀಡಲಾಯಿತು.
ಈ ಕುರಿತ ತಿದ್ದುಪಡಿ ವಿಧೇಯಕವನ್ನು ಮುಂಬರುವ ವಿಧಾನಮಂಡಲದ ಉಭಯ ಸದನಗಳ ಅಧಿವೇಶನದಲ್ಲಿ ಮಂಡಿಸಿ ಸದನದ ಒಪ್ಪಿಗೆ ಪಡೆಯಲಾಗುತ್ತದೆ.
ಸಂಪುಟ ಸಭೆಯ ಬಳಿಕ ಈ ಬಗ್ಗೆ ವಿವರ ನೀಡಿದ ಕಾನೂನು ಮತ್ತು ಸಂಸದೀಯ ಸಚಿವ ಕೃಷ್ಣ ಬೈರೇಗೌಡ, ಆರ್‌ಟಿಇ ನಿಯಮಾವಳಿಗೆ ತಿದ್ದುಪಡಿ ತರಲು ಒಪ್ಪಿಗೆ ನೀಡಲಾಗಿದೆ. ಸರ್ಕಾರಿ ಶಾಲೆ ಇಲ್ಲದಿರುವಂತಹ ಸ್ಥಳೀಯ ಪ್ರದೇಶದಲ್ಲಿ ಮಾತ್ರ ಆರ್‌ಟಿಇ ಅಡಿ ಖಾಸಗಿ ಶಾಲೆಯ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. ನಿಯಮಾವಳಿಗೆ ತಿದ್ದುಪಡಿ ತರುವ ಮೂಲಕ ಸರ್ಕಾರಿ ಶಾಲೆಗಳು ಇಲ್ಲದ ಪ್ರದೇಶದಲ್ಲಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಲು ನಿಗದಿತ ಶುಲ್ಕವನ್ನು ಪಾವತಿಸಲು ಸರ್ಕಾರ ಸಮ್ಮತಿಸಿದೆ ಎಂದು ತಿಳಿಸಿದರು.
ಸ್ಥಳೀಯವಾಗಿ ಸರ್ಕಾರಿ ಶಾಲೆ ಇದ್ದು, ಅಲ್ಲಿ ಮಕ್ಕಳಿಗೆ ಕಡ್ಡಾಯ ಮತ್ತು ಉಚಿತ ಶಿಕ್ಷಣ ಸಿಗಬೇಕು. ಒಂದು ವೇಳೆ ಸರ್ಕಾರಿ ಶಾಲೆ ಇಲ್ಲದಿದ್ದರೆ ಖಾಸಗಿ ಶಾಲೆಯನ್ನು ಗುರುತಿಸಿ ಅಲ್ಲಿ ಪ್ರವೇಶ ಪಡೆಯುವ ಮಕ್ಕಳಿಗೆ ಸರ್ಕಾರವು ಶುಲ್ಕ ಪಾವತಿಸಬೇಕು ಎಂದು ಆರ್‌ಟಿಇ ನಿಯಮ ಜಾರಿಗೊಳಿಸಲಾಗಿದೆ. ಆದರೆ, ರಾಜ್ಯದಲ್ಲಿ ಸರ್ಕಾರಿ ಶಾಲೆ ಇದ್ದರೂ ಖಾಸಗಿ ಶಾಲೆಗೆ ಮಕ್ಕಳು ಸೇರ್ಪಡೆಯಾಗಲು ಒಪ್ಪಿಗೆ ನೀಡಲಾಗಿತ್ತು. ಸರ್ಕಾರ ಈ ಹಿಂದೆ ನಿಯಮವನ್ನು ಸರಿಯಾಗಿ ಪಾಲನೆ ಮಾಡದೆ ಸರ್ಕಾರಿ ಶಾಲೆಗಳಿದ್ದರೂ ಖಾಸಗಿ ಶಾಲೆಗಳಿಗೆ ಪ್ರವೇಶ ಕೊಡಿಸಲಾಗಿದೆ. ಆರ್‌ಟಿಇ ಉದ್ದೇಶ ಅದಾಗಿರಲಿಲ್ಲ. ಹೀಗಾಗಿ ನಿಯಮಾವಳಿಯಲ್ಲಿ ತಿದ್ದುಪಡಿ ತರಲು ಉದ್ದೇಶಿಸಲಾಗಿದ್ದು, ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಇನ್ನು ಮುಂದೆ ಸರ್ಕಾರಿ ಶಾಲೆ ಇಲ್ಲದ ಕಡೆಗಳಲ್ಲಿ ಮಾತ್ರ ಖಾಸಗಿ ಶಾಲೆಗಳ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


