ರಾಜ್ಯ

ಚುನಾವಣಾ ಅಕ್ರಮ ತಡೆಗಟ್ಟಲು ಆಂಬುಲೆನ್ಸ್, ಪೊಲೀಸ್ ವಾಹನಗಳ ತಪಾಸಣೆಗೆ ಸೂಚನೆ

ಚುನಾವಣಾ ಸಂದರ್ಭದಲ್ಲಿ ವಿಶೇಷ ವಾಹನಗಳಲ್ಲಿ ಹಣ ಸಾಗಣೆ ಮಾಡಲಾಗುತ್ತದೆ ಎಂಬ ಆರೋಪಗಳಿಗೆ ಅವಕಾಶ ನೀಡದಿರಲು ನಿರ್ಧರಿಸಿರುವ...

ಚುನಾವಣಾ ಅಕ್ರಮ ತಡೆಗಟ್ಟಲು ಆಂಬುಲೆನ್ಸ್, ಪೊಲೀಸ್ ವಾಹನಗಳ ತಪಾಸಣೆಗೆ ಸೂಚನೆ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ವಿಶೇಷ ವಾಹನಗಳಲ್ಲಿ ಹಣ ಸಾಗಣೆ ಮಾಡಲಾಗುತ್ತದೆ ಎಂಬ ಆರೋಪಗಳಿಗೆ ಅವಕಾಶ ನೀಡದಿರಲು ನಿರ್ಧರಿಸಿರುವ ಬೆಂಗಳೂರು ನಗರದ ಮೂರು ಲೋಕಸಭಾ ಕ್ಷೇತ್ರಗಳಿಗೆ ಮಾದರಿ ನೀತಿ ಸಂಹಿತೆ ಜಾರಿಗೆ ನಿಯೋಜಿತರಾಗಿರುವ ವಿಶೇಷಾಧಿಕಾರಿ ಹಾಗೂ ಭೂ ಕಂದಾಯ - ಭೂಮಾಪನಾ ಇಲಾಖೆಯ ಆಯುಕ್ತ ಮೌನೀಶ್ ಮೌದ್ಗೀಲ್ ಅವರು, ಆಂಬುಲೆನ್ಸ್ ಮತ್ತು ಪೊಲೀಸ್ ವಾಹನಗಳನ್ನೂ ಸಹ ತಪಾಸಣೆಗೆ ಒಳಪಡಿಸುವಂತೆ ಆದೇಶಿಸಿದ್ದಾರೆ. 
ಚುನಾವಣೆ ಸಂದರ್ಭದಲ್ಲಿ ಅನಗತ್ಯ ಆರೋಪಗಳಿಗೆ ಅವಕಾಶ ನೀಡದಿರಲು ಹಾಗೂ ಚುನಾವಣಾ ಪ್ರಕ್ರಿಯೆಗಳಲ್ಲಿ ಮತ್ತಷ್ಟು ಪಾರದರ್ಶಕತೆ ತರಲು ಎಲ್ಲಾ ವಾಹನಗಳನ್ನು ಸಹ ತಪಾಸಣೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ. 
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಚುನಾವಣಾ ನಿರ್ವಚನಾಧಿಕಾರಿ ಡಾ ಲೋಕೇಶ್ ಅವರ ಸಮ್ಮುಖದಲ್ಲಿ ನಡೆದ ಅಭ್ಯರ್ಥಿಗಳು ಹಾಗೂ ಅಭ್ಯರ್ಥಿಗಳ ಪ್ರತಿನಿಧಿಗಳ ಸಭೆಯಲ್ಲಿ ಎಲ್ಲಾ ರೀತಿಯ ಅಕ್ರಮಗಳನ್ನು ತಡೆಯಲು ಮುಂದಿನ ಮೂರು ದಿನಗಳಲ್ಲಿ ದಿನದ 24 ಗಂಟೆಯೂ ನಿಗಾ ಇಡಲಾಗುವುದು. ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿ ಮತ್ತು ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಚುನಾವಣೆಯ ಪಾವಿತ್ರ್ಯತೆಗೆ ಧಕ್ಕೆ ಬರುವ ಯಾವುದೇ ಕ್ರಮವನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. 
ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನ, ರಾಷ್ಟ್ರೀಯ ಪಕ್ಷಗಳು ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರಕ್ಕಾಗಿ ಮಾಡಿರುವ ವೆಚ್ಚದ ವಿವರಗಳನ್ನು ಕೇಂದ್ರ ಚುನಾವಣಾ ಆಯೋಗ ಬಹಿರಂಗಪಡಿಸಬೇಕು. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯೋರ್ವರು ಈ ನಿಟ್ಟಿನಲ್ಲಿ ಭಾರತ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು. 
ಅಭ್ಯರ್ಥಿಗಳ ಚುನಾವಣಾ ವೆಚ್ಚದ ಗರಿಷ್ಠ ಮಿತಿ 70 ಲಕ್ಷ ರೂ ಆಗಿದೆ. ಆದರೆ, ಚುನಾವಣೆಗಾಗಿ ಪಕ್ಷಗಳು ಮಾಡುವ ಚುನಾವಣಾ ವೆಚ್ಚದ ಗರಿಷ್ಠ ಮಿತಿ ಎಷ್ಟು? ಎಂಬದರ ಬಗ್ಗೆ ಮಾಹಿತಿ ಇಲ್ಲ. ಒಂದೆಡೆ ಅಭ್ಯರ್ಥಿ ಹಾಗೂ ಮತ್ತೊಂದೆಡೆ ಪಕ್ಷ ಹೀಗೆ ಚುನಾವಣಾ ವೆಚ್ಚ ಮಾಡುವುದರಿಂದ ಚುನಾವಣಾ ಕಣದಲ್ಲಿರುವ ಪಕ್ಷೇತರ ಅಭ್ಯರ್ಥಿಗಳಿಗೆ ನ್ಯಾಯ ದೊರೆಯುವುದಿಲ್ಲ ಎಂದು ಪಕ್ಷೇತರ ಅಭ್ಯರ್ಥಿಗಳು ಆರೋಪಿಸಿದರು.
ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಒಳಗೊಂಡಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಸಚಿವರು ಸಾರ್ವಜನಿಕರ ತೆರಿಗೆ ಹಣದಲ್ಲಿ ಸಂಬಳ ಮತ್ತು ಭತ್ಯಗಳನ್ನು ಪಡೆಯುತ್ತಿದ್ದರೂ ಸಾರ್ವಜನಿಕರ ಕೆಲಸ ಮಾಡದೇ ಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಮತ್ತೋರ್ವ ಅಭ್ಯರ್ಥಿ ಆರೋಪಿಸಿದರು.  
ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾಷ್ಟ್ರೀಯ ಪಕ್ಷಗಳು ಆಯೋಜಿಸಿರುವ ಬೈಕ್ ರ್ಯಾಲಿಗಳಲ್ಲಿ ಶಿರಸ್ತ್ರಾಣ( ಹೆಲ್ಮೆಟ್ ) ಇಲ್ಲದೆ ಸವಾರಿ ಮಾಡುತ್ತಿದ್ದರೂ ಸಂಬಂಧಿತ ಅಧಿಕಾರಿಗಳು ಇತ್ತ ಗಮನಿಸುತ್ತಿಲ್ಲ ಎಂದು ಮತ್ತೊಬ್ಬ ಅಭ್ಯರ್ಥಿ ಸಭೆಯ ಗಮನಕ್ಕೆ ತಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.