ಕೊಡಗು ಜಿಲ್ಲೆಯ ಭೂಕುಸಿತ, ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಸುರೇಶ್ ಕುಮಾರ್ ಭೇಟಿ
ನೂತನ ಸಚಿವರಾದ ಎಸ್.ಸುರೇಶ್ ಕುಮಾರ್ ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಮಡಿಕೇರಿ: ನೂತನ ಸಚಿವರಾದ ಎಸ್.ಸುರೇಶ್ ಕುಮಾರ್ ಅವರು ಕುಶಾಲನಗರ, ನೆಲ್ಯಹುದಿಕೇರಿ ಬಳಿಯ ಕುಂಬಾರಗುಂಡಿ, ಸಿದ್ದಾಪುರ ಬಳಿಯ ಕರಡಿಗೋಡು ಮತ್ತಿತರ ಪ್ರವಾಹ ಪೀಡಿತ ಪ್ರದೇಶಗಳು, ತೋರ ಭೂ ಕುಸಿತ ಪ್ರದೇಶ, ಮಾಕುಟ್ಟ ರಸ್ತೆ ವೀಕ್ಷಣೆ ಹಾಗೂ ವಿರಾಜಪೇಟೆಯ ಅಯ್ಯಪ್ಪ ಬೆಟ್ಟದಲ್ಲಿ ಭೂಮಿ ಬಿರುಕು ಬಿಟ್ಟಿರುವ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರ ಜೊತೆ ಮಾತನಾಡಿದ ಸಚಿವರು, ಪ್ರವಾಹದಿಂದ ತುಂಬಾ ತೊಂದರೆಗೆ ಒಳಗಾಗಿದ್ದು, ಸ್ಥಳಾಂತರವಾಗಲು ಮನಸ್ಸು ಮಾಡಬೇಕು. ಸರ್ಕಾರದಿಂದ ಮನೆ ನಿರ್ಮಿಸಿಕೊಡಲಾಗುವುದು ಎಂದು ಅವರು ಜನರಿಗೆ ತಿಳಿಸಿದರು. ಅದಕ್ಕೆ ಸಂತ್ರಸ್ತರು ಕೂಲಿ ಮಾಡಿ ಬದುಕುತ್ತಿದ್ದೆವು, ಪ್ರವಾಹದಿಂದಾಗಿ ಮನೆ ಕಳೆದುಕೊಂಡಿದ್ದು, ದಿಕ್ಕು ತೋಚದಂತಾಗಿದೆ ಎಂದು ಅಳಲು ತೋಡಿಕೊಂಡರು.
ಮನೆ ಕಳೆದುಕೊಂಡ ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಲಾಗುವುದು. ಆ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಕೈಗೊಳ್ಳಲಿದೆ ಎಂದರು. ಕುಂಬಾರಗುಂಡಿ ಮತ್ತು ಕರಡಿಗೋಡು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಕೊಡಗು ಜಿಲ್ಲೆಯಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಸುರಿದ ಧಾರಾಕಾರ ಮಳೆಗೆ ಸಾಕಷ್ಟು ನಷ್ಟ ಉಂಟಾಗಿದ್ದು, ಈ ಸಂಬಂಧ ಸಚಿವ ಸಂಪುಟಕ್ಕೆ ವರದಿ ಸಲ್ಲಿಸಲಾಗುವುದು ಎಂದರು.
ರಾಜ್ಯದ ಹನ್ನೆರಡು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಸಾಕಷ್ಟು ಆಸ್ತಿ-ಪಾಸ್ತಿ ನಷ್ಟವಾಗಿದ್ದು, ಪ್ರವಾಹದಿಂದ ಸಾಕಷ್ಟು ಮನೆಗಳಿವೆ ಹಾನಿಯಾಗಿವೆ. ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಬೇಕಿದೆ. ಆ ನಿಟ್ಟಿನಲ್ಲಿ ಪುನರ್ವಸತಿ ಕಲ್ಪಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ, ಜಿಲ್ಲೆಯಲ್ಲಿ ಪ್ರವಾಹದಿಂದಾಗಿ ಸುಮಾರು 190 ಕ್ಕೂ ಹೆಚ್ಚು ಮನೆಗಳು ಹಾನಿಯಾಗಿರುವ ಬಗ್ಗೆ ಮಾಹಿತಿ ಇದ್ದು, ಈ ಕುಟುಂಬಗಳನ್ನು ಸ್ಥಳಾಂತರಿಸಿ ಮನೆ ನಿರ್ಮಿಸಿಕೊಡಬೇಕಿದೆ ಎಂದರು. ಈಗಾಗಲೇ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದ ಸಂತ್ರಸ್ತರಿಗೆ 10 ಸಾವಿರ ರೂ ಪರಿಹಾರ ನೀಡಲಾಗಿದೆ. ಕೇಂದ್ರದ ಗೃಹ ಸಚಿವರು ಮತ್ತು ಹಣಕಾಸು ಸಚಿವರು ರಾಜ್ಯ ಪ್ರವಾಸ ಕೈಗೊಂಡು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಿದ್ದಾರೆ. ಸದ್ಯದಲ್ಲೇ ಹಣ ಬಿಡುಗಡೆಯಾಗಲಿದೆ ಎಂದು ಸುರೇಶ್ ಕುಮಾರ್ ಅವರು ತಿಳಿಸಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಸಚಿವರಿಗೆ ಸಾಥ್ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


