ಸಂಚಾರ ದಟ್ಟಣೆ ನಿವಾರಣೆಗೆ ಶೀಘ್ರದಲ್ಲೇ ರಸ್ತೆಗಿಳಿಯಲಿವೆ 10 ಸಾವಿರ ಎಲೆಕ್ಟ್ರಿಕ್ ಬಸ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದೊಡ್ಡ ತಲೆನೋವಾಗಿ ಪರಿಣಮಿಸಿರುವ ಸಂಚಾರ ದಟ್ಟಣೆ ನಿವಾರಣೆಗೆ ಉಪ ಮುಖ್ಯಮಂತ್ರಿ ಹಾಗೂ ಐಟಿ ಬಿಟಿ ಸಚಿವ ಡಾ.ಸಿಎನ್. ಅಶ್ವತ್ಥ್ ನಾರಾಯಣ್ ಅವರು ಕ್ರಮ ಕೈಗೊಂಡಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದೊಡ್ಡ ತಲೆನೋವಾಗಿ ಪರಿಣಮಿಸಿರುವ ಸಂಚಾರ ದಟ್ಟಣೆ ನಿವಾರಣೆಗೆ ಉಪ ಮುಖ್ಯಮಂತ್ರಿ ಹಾಗೂ ಐಟಿ ಬಿಟಿ ಸಚಿವ ಡಾ.ಸಿಎನ್. ಅಶ್ವತ್ಥ್ ನಾರಾಯಣ್ ಅವರು ಕ್ರಮ ಕೈಗೊಂಡಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಬೆಂಗಳೂರು ನಗರ ಅಭಿವೃದ್ಧಿ ಕುರಿತು ನಗರಾಭಿವೃದ್ಧಿ, ಬಿಡಿಎ, ಬಿಬಿಎಂಪಿ, ಬಿಎಂಆರ್ಸಿಎಲ್, ಜಲಮಂಡಳಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ನಡೆಸಿದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅಶ್ವತ್ಥ ನಾರಾಯಣ್ ಅವರು, ಸಂಚಾರ ದಟ್ಟಣೆ, ರಸ್ತೆ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸಾರಿಗೆಗೆ ಹೆಚ್ಚಿನ ಒತ್ತು ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಹಾಗೂ ಆಡಳಿತ ಯಂತ್ರ ಪುನರ್ ರೂಪಿಸುವ ಚಿಂತನೆ ಹೊಂದಿರುವುದಾಗಿ ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ಪ್ರಮುಖವಾಗಿ ಸಂಚಾರ ದಟ್ಟಣೆ, ರಸ್ತೆ ಸಮಸ್ಯೆ ಹೆಚ್ಚಾಗುತ್ತಿದೆ. ವಾಹನಗಳ ಸಂಖ್ಯೆ ಕೂಡಾ ಹೆಚ್ಚಾಗುತ್ತಿದೆ. ಹೀಗಾಗಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಯೋಜನೆಗಳನ್ನು ರೂಪಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಹಲವಾರು ಸಲಹೆ, ಸೂಚನೆಗಳು ಬಂದಿವೆ. ವಿಶೇಷವಾಗಿ ಬೆಂಗಳೂರು ಅಭಿವೃದ್ಧಿ ಕುರಿತಂತೆ ಸಿದ್ಧಪಡಿಸಿರುವ ಮಾಸ್ಟರ್ ಪ್ಲಾನ್ ಮರು ಪರಿಶೀಲನೆ ಮಾಡಬೇಕು. 10 ಸಾವಿರ ವಿದ್ಯುತ್ ಚಾಲಿತ ಬಸ್ ಸಂಚಾರ ಆರಂಭ, ಮೆಟ್ರೋ ರೈಲು ಕಾಮಗಾರಿಗೆ ಇನ್ನಷ್ಟು ವೇಗ ನೀಡುವುದು, ಪೆರಿಪೆರಲ್ ರಸ್ತೆ, ಎಲಿವೇಟೆಡ್ ರಸ್ತೆ ನಿರ್ಮಾಣ, ಉಪನಗರ ರೈಲು ಸೇವೆ ಯೋಜನೆ ಜಾರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಎಲ್ಲಾ ಯೋಜನೆಗಳಿಗೆ ಭೂ ಸ್ವಾಧೀನದ ಸಮಸ್ಯೆ ಮೂಲವಾಗಿರುತ್ತದೆ. ಇದನ್ನು ಹೇಗೆ ಪರಿಹರಿಸಬೇಕು ಎಂಬ ಸಲಹೆಗಳನ್ನು ಸಭೆಯಲ್ಲಿ ಬಂದಿವೆ ಎಂದು ತಿಳಿಸಿದ್ದಾರೆ.
ಮೆಟ್ರೋ ರೈಲು ಕಾಮಗಾರಿ ಇನ್ನಷ್ಟು ವೇಗವಾಗಿ ನಡೆಯಬೇಕು. ಈವರೆಗೆ ಕೇವಲ 42 ಕಿಮೀ ಮಾರ್ಗ ರಚನೆಯಾಗಿದೆ. ಆದರೆ ಉದ್ದೇಶಿತ ಗುರಿ ಸುಮಾರು 240 ಕಿಮೀ ಇದೆ. ಆದ್ದರಿಂದ ಕಾಮಗಾರಿ ವೇಗವಾಗಿ ನಡೆಯಬೇಕು. ಬಿಎಂಟಿಸಿ ಪ್ರಸ್ತುತ 6500 ಬಸ್ ಗಳನ್ನು ಹೊಂದಿದ್ದು, ಇದು 10 ಸಾವಿರಕ್ಕೆ ಹೆಚ್ಚಿಸಬೇಕು. ಬೆಂಗಳೂರು ನಗರದ ಮೇಲಿನ ಒತ್ತಡ ಕಡಿಮೆ ಮಾಡಲು ಉಪನಗರದ ಮೇಲಿನ ಒತ್ತಡ ಕಡಿಮೆ ಮಾಡಲು ಉಪನಗರ ರೈಲು ಯೋಜನೆ ಆದಷ್ಟು ಬೇಗ ಆರಂಭಿಸಬೇಕು ಎಂಬ ಸಲಹೆಯನ್ನು ಹಲವರು ನೀಡಿದ್ದಾರೆಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


