ರಾಜ್ಯ

ಕೊರೋನಾ ವೈರಸ್: ದಕ್ಷಿಣ ಕನ್ನಡದಲ್ಲಿ ಅಗತ್ಯವೆನಿಸಿದರೆ ಕಠಿಣ ಕ್ರಮ: ಸಚಿವ ಕೋಟ ಪೂಜಾರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಅಗತ್ಯವೆನಿಸಿದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ಕೊರೋನಾ ವೈರಸ್: ದಕ್ಷಿಣ ಕನ್ನಡದಲ್ಲಿ ಅಗತ್ಯವೆನಿಸಿದರೆ ಕಠಿಣ ಕ್ರಮ: ಸಚಿವ ಕೋಟ ಪೂಜಾರಿ
ಸಚಿವ ಕೋಟಾ ಶ್ರೀನಿವಾಸ ಪೂಜಾರಿ
Published On :

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಅಗತ್ಯವೆನಿಸಿದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ಬಂಟ್ವಾಳ ತಾಲ್ಲೂಕಿನ ಕಸಬಾ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಸಚಿವರು ಹಾಗೂ ಸಂಸದರು ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ತುರ್ತು ಸಭೆ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ನಡೆಯಿತು. ಬಂಟ್ವಾಳದಲ್ಲಿ  ಮೇ 3ರವರೆಗೆ ಲಾಕ್ ಡೌನ್‌ನಲ್ಲಿ ಯಾವುದೇ ವಿನಾಯಿತಿ ಇಲ್ಲ. ಕಸಬಾ ಹೋಬಳಿಯ 92 ಮನೆಗಳು ಹಾಗೂ ನರಿಕೊಂಬು ಗ್ರಾಮಪಂಚಾಯತ್ ವ್ಯಾಪ್ತಿಯ 213 ಮನೆಗಳಲ್ಲಿ ಪ್ರತಿನಿತ್ಯ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಿಬ್ಬಂದಿಗಳು ಭೇಟಿಕೊಟ್ಟು ವರದಿ ನೀಡಬೇಕು.  ಬಂಟ್ವಾಳ ಕಸಬಾ ಹಾಗೂ ನರಿಕೊಂಬು ಭಾಗದಲ್ಲಿ ಲಾಕ್ ಡೌನ್ ನಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ದ.ಕ. ಜಿಲ್ಲೆಯಲ್ಲಿ ಒಟ್ಟು 19 ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ 12 ಪ್ರಕರಣಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಉಳಿದ ಪ್ರಕರಣಗಳಲ್ಲಿ ನಿಗಾವಹಿಸಲಾಗಿದೆ ಎಂದು ಸಚಿವರು ತಿಳಿಸಿದರು. ಈ ಮಧ್ಯೆ ಫಸ್ಟ್ ನ್ಯೂರೋ ಆಸ್ಪತ್ರೆಯ 198  ಸಿಬ್ಬಂದಿ ಹಾಗೂ ಇನ್ನಿತರರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಈ ಪೈಕಿ 49 ಪ್ರಕರಣಗಳ ವರದಿ ಬಂದಿದ್ದು, 48 ನೆಗೆಟಿವ್ ಒಂದು ಪಾಸಿಟಿವ್ ಆಗಿರುತ್ತದೆ. ಜಿಲ್ಲಾಡಳಿತದ ಪೂರ್ಣ ಕಣ್ಗಾವಲಿನಲ್ಲಿ ಕೊರೋನ ನಿಯಂತ್ರಣ ಮಾಡಲಾಗುತ್ತಿದೆ. ಸಾರ್ವಜನಿಕರು ಯಾವುದೇ  ಕಾರಣಕ್ಕೆ ಘಟನೆಗಳನ್ನು ಲಘುವಾಗಿ ತೆಗೆದು ಕೊಳ್ಳದೆ, ಸ್ವಯಂ ಪ್ರೇರಿತ ಕಫ್ಯೂ೯ಗೆ ಒಳಪಡಬೇಕು. ಇಲ್ಲವಾದಲ್ಲಿ ಅನಿವಾರ್ಯವಾದರೆ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಬಂಟ್ವಾಳ ಕಸಬಾ ಹಾಗೂ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿ ಸೀಲ್ಡ್  ಡೌನ್ ಮಾಡಿ, ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮ್ ತೆರೆಯಲಾಗಿದೆ. ಸಾರ್ವಜನಿಕರ ಅನುಕೂಲಕ್ಕೆ ದೂರವಾಣಿ ಸಂಪರ್ಕ ನೀಡಲಾಗಿದೆ. 11 ಅಧಿಕಾರಿಗಳನ್ನು ಈ ಪ್ರದೇಶದಲ್ಲಿ ಹಗಲು-ರಾತ್ರಿ ಕರ್ತವ್ಯಕ್ಕೆ  ನಿಯೋಜಿಸಲಾಗಿದೆ. ಸಾರ್ವಜನಿಕರು ಮನೆಯಲ್ಲಿದ್ದುಕೊಂಡು ಅಗತ್ಯ ಸಾಮಾಗ್ರಿಗಳನ್ನು ತೆಗೆದುಕೊಳ್ಳಬಹುದು ಎಂದರು.

ಅಂತೆಯೇ ದಿನಸಿ ಸಾಮಗ್ರಿ, ಹಾಲು ದಿನಪತ್ರಿಕೆ, ಔಷಧಿ, ಊಟೋಪಚಾರ ತರಕಾರಿ ಹಣ್ಣು ಮಾಂಸಗಳನ್ನು ಸಾರ್ವಜನಿಕರ ಬೇಡಿಕೆಯಂತೆ ಒದಗಿಸಲು ಹಾಗೂ ಬ್ಯಾಂಕಿಂಗ್ ಸೇವೆ ಗ್ಯಾಸ್ ಇನ್ನಿತರ ಸೇವೆ ತುರ್ತು ಸೇವೆಗಳನ್ನು ಒದಗಿಸಲು ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ  ಎಂದು ಕೋಟ‌ ಶ್ರೀನಿವಾಸ ಪೂಜಾರಿ ಹೇಳಿದರು. ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಅಧಿಕಾರಿಗಳು ಮಾರ್ಗಸೂಚಿಗಳನ್ನು ಸರಿಯಾಗಿ ಜಾರಿಗೆ ತಂದು, ಕಟ್ಟೆಚ್ಚರದಿಂದ ಕಾರ್ಯನಿರ್ವಹಿಸಬೇಕು, ವಲಸೆ ಕಾರ್ಮಿಕರು ಹಾಗೂ ಜಿಲ್ಲೆಯ ಸಮಸ್ಯೆಗಳಿಗೆ ತಕ್ಷಣ ಪರಿಹಾರ  ನೀಡಬೇಕು. ಆಹಾರ ಪೂರೈಕೆಯನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಹೇಳಿದ್ದಾರೆ. ಸಭೆಯಲ್ಲಿ ಶಾಸಕ ರಾಜೇಶ್ ನಾಯಕ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ತಹಶೀಲ್ದಾರ್ ರಶ್ಮಿ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.