ಹೊಸ ಕೊರೋನಾ ವೈರಾಣು ನಿಯಂತ್ರಣಕ್ಕೆ ಕ್ರಮ, ಆತಂಕಪಡುವ ಅಗತ್ಯ ಇಲ್ಲ: ಸಚಿವ ಸುಧಾಕರ್
ಯುನೈಟೆಡ್ ಕಿಂಗ್ ಡಮ್(ಇಂಗ್ಲೆಂಡ್)ನಲ್ಲಿ ಹೊಸ ಬಗೆಯ ಕೊರೋನಾ ವೈರಾಣು ಕಂಡುಬಂದಿದೆ. ಇದು ವೇಗವಾಗಿ ಹರಡುವ ಲಕ್ಷಣ ಹೊಂದಿದ್ದರೂ, ರೋಗದ ತೀವ್ರತೆ ಹೆಚ್ಚಿಸುವುದಿಲ್ಲ.

ಬೆಂಗಳೂರು: ಯುನೈಟೆಡ್ ಕಿಂಗ್ ಡಮ್(ಇಂಗ್ಲೆಂಡ್)ನಲ್ಲಿ ಹೊಸ ಬಗೆಯ ಕೊರೋನಾ ವೈರಾಣು ಕಂಡುಬಂದಿದೆ. ಇದು ವೇಗವಾಗಿ ಹರಡುವ ಲಕ್ಷಣ ಹೊಂದಿದ್ದರೂ, ರೋಗದ ತೀವ್ರತೆ ಹೆಚ್ಚಿಸುವುದಿಲ್ಲ. ಆದರೂ ಅತ್ಯಂತ ಎಚ್ಚರಿಕೆ ವಹಿಸಬೇಕಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಉದ್ದೇಶಿಸಿ ಮಾತನಾಡಿದ ಸಚಿವರು, ಯುಕೆ, ಡೆನ್ಮಾರ್ಕ್, ನೆದರ್ ಲ್ಯಾಂಡ್ ಮೊದಲಾದ ಐರೋಪ್ಯ ರಾಷ್ಟ್ರಗಳಲ್ಲಿ ಹೊಸ ಬಗೆಯ ಕೊರೋನಾ ವೈರಾಣು ಕಾಣಿಸಿಕೊಂಡಿದೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಪತ್ರ ಬಂದಿದ್ದು, ನಾಳೆ ರಾತ್ರಿಯಿಂದ ಯುಕೆಯಿಂದ ಬರುವ ವಿಮಾನಗಳ ಆಗಮನ ನಿರ್ಬಂಧಿಸಲಾಗುತ್ತದೆ ಎಂದರು.
ನಿನ್ನೆ ರಾಜ್ಯಕ್ಕೆ 291 ಜನರು ಬ್ರಿಟಿಷ್ ಏರ್ ವೇಸ್ ನಿಂದ ಬಂದಿದ್ದರು. 246 ಜನರು ಏರ್ ಇಂಡಿಯಾದಿಂದ ಬಂದಿದ್ದರು. ಈ ಪೈಕಿ 138 ಜನರು ನೆಗೆಟಿವ್ ವರದಿ ತಂದಿಲ್ಲ. ಇಂತಹವರನ್ನು ಒಂದು ವಾರ ಕಾಲ ಮನೆಯಲ್ಲೇ ನಿಗಾ ಇರಿಸಲಾಗುತ್ತದೆ. ನಾಳೆಯಿಂದ ವಿಮಾನ ನಿಲ್ದಾಣಗಳಲ್ಲಿ ಕಿಯೋಸ್ಕ್ ಇಟ್ಟು, ಅಲ್ಲಿ ತಪಾಸಣೆ ಮಾಡಲಾಗುವುದು ಎಂದು ಅವರು ಹೇಳಿದರು.
ಈ ವೈರಾಣು ಹರಡುವ ವೇಗ ಹೆಚ್ಚಿದೆ. ಆದರೆ ರೋಗ ತೀವ್ರವಾಗಿರುವುದಿಲ್ಲ. ಆದ್ದರಿಂದ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕಿದೆ. ಹೊಸ ವರ್ಷದ ಅದ್ದೂರಿ ಆಚರಣೆಗಳನ್ನು ಕೈಬಿಡಬೇಕಿದೆ. ಕೆಲ ಹೋಟೆಲ್ ಗಳಲ್ಲಿ ಬುಕಿಂಗ್ ಮಾಡಿ ಆಚರಣೆ ಮಾಡಲು ಸಿದ್ಧತೆ ನಡೆಸಿರುವುದು ಕಂಡುಬಂದಿದೆ. ಹೀಗೆ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಸರ್ಕಾರಕ್ಕೆ ಜನರ ಆರೋಗ್ಯ ಮುಖ್ಯವಾಗಿದ್ದು, ಹೊಸ ಬಗೆಯ ವೈರಾಣು ಬರುವ ಸಂದರ್ಭದಲ್ಲಿ ಇನ್ನಷ್ಟು ಎಚ್ಚರಿಕೆಯಿಂದ ಇರಬೇಕು ಎಂದರು.
ಕಳೆದ 14 ದಿನಗಳಲ್ಲಿ ಬೇರೆ ದೇಶಗಳಿಂದ ರಾಜ್ಯಕ್ಕೆ ಬಂದವರು ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು. ಯುನೈಟೆಡ್ ಕಿಂಗ್ ಡಮ್ ನಿಂದ ಬಂದವರು ಹಾಗೂ ಬೇರೆ ದೇಶಗಳಿಂದ ಬಂದವರಿಗೂ 7 ದಿನಗಳ ಕ್ವಾರಂಟೈನ್ ಗೆ ಒಳಪಡಿಸಬೇಕು ಎಂದು ನಿರ್ಧರಿಸಲಾಗಿದೆ. ಯುಕೆಯಿಂದ ಬಂದವರನ್ನು 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಬೇಕೆಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ ಎಂದು ತಿಳಿಸಿದರು.
ಶೈಕ್ಷಣಿಕ ಚಟುವಟಿಕೆಗೆ ಸಂಬಂಧಿಸಿದಂತೆ ವಹಿಸಬೇಕಾದ ಎಚ್ಚರಿಕೆ ಕುರಿತು ಮತ್ತೊಮ್ಮೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


