ಹೊಸ ವರ್ಷಾಚರಣೆ: ಹೋಟೆಲ್, ರೆಸಾರ್ಟ್‌ಗಳು ಅನುಸರಿಸಬೇಕಾದ ಮಾರ್ಗಸೂಚಿ ಬಿಡುಗಡೆ
ಹೊಸ ವರ್ಷಾಚರಣೆಗೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹೋಟೆಲ್ ರೆಸಾರ್ಟ್ ಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಬೆಂಗಳೂರು: ಹೊಸ ವರ್ಷಾಚರಣೆಗೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹೋಟೆಲ್ ರೆಸಾರ್ಟ್ ಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಕೋವಿಡ್ -19 ಪಿಡುಗಿನಿಂದ ಕುಂಠಿತಗೊಂಡಿರುವ ಪ್ರವಾಸೋದ್ಯಮ ಕ್ಷೇತ್ರವನ್ನು ಹಂತಹಂತವಾಗಿ ಸುಧಾರಿಸುವ ಹಾಗೂ ಉತ್ತೇಜಿಸುವ ಸಲುವಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಹರಡುವಿಕೆ ಪ್ರಮಾಣ ಹತೋಟಿಗೆ ತರಲು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಬಗ್ಗೆ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿರುತ್ತದೆ ಎಂದು ಪ್ರವಾಸೋದ್ಯಮ ಇಲಾಖಾ ನಿರ್ದೇಶಕರು ಸುತ್ತೋಲೆಯಲ್ಲಿ ಹೇಳಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಕೆಲವು ಹೋಟೆಲ್ ರೆಸಾರ್ಟ್ ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯಲು ಹಾಗೂ ಮಾದಕ ವಸ್ತುಗಳ ಬಳಕೆ ಹಾಗೂ ಸೇವನೆಗೆ ಉತ್ತೇಜಿಸುವಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಹಾಗೂ ಸಮಾಜ ಘಾತುಕ ಚಟುವಟಿಕೆಗಳನ್ನು ನಡೆಸಲು ಅನುಕೂಲಕರ ವಾತಾವರಣ ಸೃಷ್ಟಿಯಾಗುತ್ತಿರುವುದರಿಂದ ದೇಶೀಯ / ವಿದೇಶೀಯ ಪ್ರವಾಸಿಗರ ಸುರಕ್ಷತೆ ಹಾಗೂ ಭದ್ರತೆಗೆ ಧಕ್ಕೆಯಾಗುತ್ತಿರುವ ಕಾರಣದಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲೂ ಹೆಚ್ಚಿನ ಪರಿಣಾಮ ಉಂಟಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದ್ದು, ಇವುಗಳನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರದ ಇಲಾಖೆಗಳು ಹಾಗೂ ಕಾನೂನು ಮಟ್ಟದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವುದು ಅವಶ್ಯಕವಾಗಿರುತ್ತದೆ. ಆದ್ದರಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ವ್ಯಾಪ್ತಿಗೆ ಬರುವ ಅನುಮೋದಿತ ಹೋಟೆಲ್, ರೆಸಾರ್ಟ್‌ಗಳಲ್ಲಿ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಇಲಾಖೆ ತಿಳಿಸಿದೆ.
ಸ್ಥಳೀಯ ಪೊಲೀಸ್ ಠಾಣೆಯಿಂದ ನಿರಾಕ್ಷೇಪಣಾ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ಸಂಬಂಧಪಟ್ಟ ಸ್ಥಳೀಯ ಬಿಬಿಎಂಪಿ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರವನ್ನು ಕಡ್ಡಾಯವಾಗಿ ಪಡೆದಿರಬೇಕು. ಕರ್ನಾಟಕ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪಡೆದಿರುವ ಅನುಮತಿ ಪತ್ರ ಆಹಾರ ಸುರಕ್ಷತೆ ಗುಣಮಟ್ಟ ಪ್ರಾಧಿಕಾರ ಇವರಿಂದ ಪಡೆದಿರುವ ಅನುಮತಿ ಪತ್ರ ಪಡೆದಿರಬೇಕು. ಅಗ್ನಿ ಅನಾಹುತಗಳಿಗೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಮುಂಜಾಗ್ರತ ಕ್ರಮಗಳ ಬಗ್ಗೆ, ಎಕೊ - ಸೆನ್ಸ್ಟೀವ್ ಜೋನ್ ವ್ಯಾಪ್ತಿಗೆ ಒಳಪಟ್ಟಿರುವ ಅಥವಾ ಒಳಪಡದಿರುವ ಬಗ್ಗೆ ಅರಣ್ಯ ಇಲಾಖೆಯಿಂದ ಪಡೆದಿರುವ ಅನುಮತಿ ಪತ್ರ ಹೊಂದಿರಬೇಕೆಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


