ಮುಂಬಯಿ-ಚೈನ್ನೈಗಿಂತ ಬೆಂಗಳೂರಿನಲ್ಲಿ ಕೋವಿಡ್-19 ನಿರ್ವಹಣೆ ಉತ್ತಮ: ಅಶ್ವತ್ಥ ನಾರಾಯಣ
ನೆರೆ ರಾಜ್ಯಗಳ ಹೈದರಾಬಾದ್, ಚೆನ್ನೈ, ಮುಂಬೈ ಮತ್ತಿತರ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಹೀಗಾಗಿ ಯಾರೂ ಆಧೈರ್ಯದಿಂದ ನಗರ ಬಿಟ್ಟು ತಮ್ಮ ಊರುಗಳ ಕಡೆ ಹೋಗುವುದು ಬೇಡ.

ಬೆಂಗಳೂರು: ನೆರೆ ರಾಜ್ಯಗಳ ಹೈದರಾಬಾದ್, ಚೆನ್ನೈ, ಮುಂಬೈ ಮತ್ತಿತರ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಹೀಗಾಗಿ ಯಾರೂ ಆಧೈರ್ಯದಿಂದ ನಗರ ಬಿಟ್ಟು ತಮ್ಮ ಊರುಗಳ ಕಡೆ ಹೋಗುವುದು ಬೇಡ. ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಮನವಿ ಮಾಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಮ್ಮಲ್ಲಿ ಅನುಭವಿ, ದಕ್ಷ, ದೂರದೃಷ್ಟಿಯುಳ್ಳ ಅಧಿಕಾರಿಗಳಿದ್ದಾರೆ. ಹೀಗಾಗಿ ಕೋವಿಡ್ ಪರಿಸ್ಥಿತಿಯನ್ನು ಅತ್ಯುತ್ತಮವಾಗಿ ನಿರ್ವಹಿಸಲು ಸಾಧ್ಯವಾಗಿದೆ. ಎಲ್ಲ ಹಂತಗಳಲ್ಲೂ ಕೆಲಸ ಸುಸೂತ್ರವಾಗಿ ಸಾಗಿದೆ. ಜನರು ಸೋಂಕಿನ ಬಗ್ಗೆ ಆತಂಕಕ್ಕೊಳಗಾಗಬೇಕಾದ ಅಗತ್ಯವಿಲ್ಲ’ ಎಂದು ತಿಳಿಸಿದರು.
ಕೊರೋನಾ ಬಿಕ್ಕಟ್ಟನ್ನು ರಾಜ್ಯದಲ್ಲಿ ಸಮರ್ಥವಾಗಿ ಎದುರಿಸುತ್ತಿದ್ದೇವೆ. ಅಧಿಕಾರಿಗಳು ಕೂಡ ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಎಂತಹುದೇ ಪರಿಸ್ಥಿತಿ ಎದುರಾದರೂ ಎದುರಿಸಲು ನಾವು ಸಂಪೂರ್ಣವಾಗಿ ತಯಾರಿದ್ದೇವೆ’ ಎಂದು ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ನಡುವೆ ಒಂದೆರಡು ದಿನ ಇದ್ದಕ್ಕಿದ್ದ ಹಾಗೆ ಸೋಂಕಿತರ ಪ್ರಮಾಣ ಹೆಚ್ಚಾಯಿತು, ಆಗ ಮಾತ್ರ ಕೊಂಚ ಗೊಂದಲವಾಗಿದ್ದು ಬಿಟ್ಟರೆ ಉಳಿದಂತೆ ಎಲ್ಲವೂ ನಮ್ಮ ನಿಯಂತ್ರಣದಲ್ಲಿದೆ’ ಎಂದು ತಿಳಿಸಿದರು. ಜತೆಗೆ ಸೋಂಕು ಹರಡದಂತೆ ತಡೆಗಟ್ಟಲು ಸರಕಾರ ನಡೆಸುತ್ತಿರುವ ಪ್ರಯತ್ನಕ್ಕೆ ಸಾರ್ವಜನಿಕರು ಕೂಡ ಕಾಣಿಕೆ ನೀಡಬೇಕು. ಹಾಗೆ ಮಾಡುವ ಮೂಲಕ ಸೋಂಕಿತರ ಸಂಖ್ಯೆ ಜಾಸ್ತಿಯಾಗದಂತೆ ನೋಡಿಕೊಳ್ಳಬಹುದು. ನಮ್ಮೆಲ್ಲರ ನಡುವೆ ವೈರಸ್ ಕೂಡ ಓಡಾಡುತ್ತಿದೆ ಎಂಬುದನ್ನು ಮರೆಯಬಾರದು’ ಎಂದು ಡಿಸಿಎಂ ಹೇಳಿದರು.
ಸದ್ಯಕ್ಕೆ ನಮ್ಮಲ್ಲಿ ಹಾಸಿಗೆಗಳ ಕೊರತೆ ಇಲ್ಲ. ಕೋವಿಡ್ ಕೇರ್ ಸೆಂಟರುಗಳನ್ನು ಸ್ಥಾಪನೆ ಮಾಡಿದ್ದೇವೆ. 30 ಸಾವಿರಕ್ಕೂ ಹೆಚ್ಚು ಹಾಸಿಗೆಗಳ ವ್ಯವಸ್ಥೆ ಮಾಡುವುದಕ್ಕೆ ನಾವು ಸಜ್ಜಾಗಿದ್ದೇವೆ. ವೈದ್ಯರು, ನರ್ಸ್‌ಗಳು ಹಾಗೂ ಪೂರಕ ಸಿಬ್ಬಂದಿಯ ಕೊರತೆಯಾಗದಂತೆ ನೋಡಿಕೊಂಡಿದ್ದೇವೆ. ಇನ್ನು ಕೋವಿಡ್ ಕೇರ್ ಕೇಂದ್ರಗಳು ಸಮರ್ಪಕವಾಗಿ ನಡೆಯುತ್ತಿವೆ.
ಮತ್ತಷ್ಟು ಕೇಂದ್ರಗಳನ್ನು ಸ್ಥಾಪನೆ ಮಾಡುವವರಿದ್ದೇವೆ. ಬೆಂಗಳೂರು ವಸ್ತು ಪ್ರದರ್ಶನ ಕೇಂದ್ರದಲ್ಲಿ (ಬಿಐಇಎಸ್) 10 ಸಾವಿರಕ್ಕೂ ಹೆಚ್ಚು ಹಾಸಿಗೆಗಳ ಕೋವಿಡ್ ಕೇಂದ್ರವನ್ನು ತೆರೆದಿದ್ದೇವೆ. ಇದು ಜಗತ್ತಿನಲ್ಲಿ ಅತಿದೊಡ್ಡ ಕೋವಿಡ್ ಚಿಕಿತ್ಸಾ ಕೇಂದ್ರ. ಜತೆಗೆ ಹೋಮ್ ಕೇರ್ ವ್ಯವಸ್ಥೆ ಬಗ್ಗೆಯೂ ಹೆಚ್ಚು ಗಮನ ನೀಡುತ್ತಿದ್ದೇವೆ. ಹೀಗಾಗಿ ಯಾವುದೇ ಆತಂಕ ಬೇಡ’ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


