3 ಸಾವಿರಕ್ಕೂ ಹೆಚ್ಚು ಹೋಂ ಗಾರ್ಡ್ ಸೇವೆ ಮುಂದುವರಿಸಲು ರಾಜ್ಯ ಸರ್ಕಾರ ತೀರ್ಮಾನ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಗೃಹ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಗೃಹ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ಕೋವಿಡ್-19 ನಿಯಂತ್ರಣ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಕುರಿತು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಇಲಾಖೆಯ ಸುಧಾರಣೆಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.
ರಾಜ್ಯದಲ್ಲಿ ಪೊಲೀಸ್ ಇಲಾಖೆಯು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದಲ್ಲಿ ಬದಲಾದ ಸನ್ನಿವೇಶಗಳಲ್ಲಿ ಸಿಇಎನ್(ಸೈಬರ್ ಕ್ರೈಂ, ಎಕನಾಮಿಕ್ ಅಫೆನ್ಸ್ ಮತ್ತು ನಾರ್ಕೊಟಿಕ್ಸ್) ಠಾಣೆಗಳನ್ನು ಬಲಪಡಿಸಲು ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಅಂತೆಯೇ ಅಪರಾಧಗಳನ್ನು ತ್ವರಿತವಾಗಿ ಪತ್ತೆ ಹಚ್ಚುವ ನಿಟ್ಟಿನಲ್ಲಿ ಫಾರೆನ್ಸಿಕ್ ಪ್ರಯೋಗಾಲಯಗಳನ್ನು ಬಲಪಡಿಸಲು ಕ್ರಮ ವಹಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.
ತುರ್ತು ಸ್ಪಂದನೆ ವ್ಯವಸ್ಥೆ ಯೋಜನೆಯಡಿ ವಾಹನ ಖರೀದಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇದೇ ವೇಳೆ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿರುವ ಮೂರು ಸಾವಿರಕ್ಕೂ ಹೆಚ್ಚು ಹೋಂ ಗಾರ್ಡ್ ಗಳನ್ನು ಸೇವೆಯಲ್ಲಿ ಮುಂದುವರಿಸಿ ವಿವಿಧ ಇಲಾಖೆಗಳಿಗೆ ನಿಯೋಜಿಸಲು ತೀರ್ಮಾನಿಸಲಾಯಿತು. ಮುಂದಿನ ದಿನಗಳಲ್ಲಿ ಖಾಸಗಿ ಸಂಸ್ಥೆಗಳಿಗೆ ಹೋಂ-ಗಾರ್ಡ್ ಗಳ ಸೇವೆಯನ್ನು ಒದಗಿಸುವ ಕುರಿತು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಮುಂಗಾರು ಸಂದರ್ಭದಲ್ಲಿ 200 ಮಂದಿ ಎಸ್.ಡಿ.ಆರ್.ಎಫ್ ಸಿಬ್ಬಂದಿಗೆ ತರಬೇತಿ ಪ್ರಾರಂಭವಾಗಿದೆ. ಕೆಲವು ದಿನಗಳಲ್ಲಿ ಅವರನ್ನು ನಾಲ್ಕು ವಿಭಾಗಗಳಲ್ಲಿ ನಿಯೋಜಿಸಲು ಸಾಧ್ಯವಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಕಾರಾಗೃಹಗಳಲ್ಲಿ ಕೋವಿಡ್-19 ಸಂದರ್ಭದಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಒಂದೇ ಒಂದು ಪ್ರಕರಣ ವರದಿಯಾಗಿಲ್ಲ. ಸುಪ್ರೀಂ ಕೋರ್ಟಿನ ಸೂಚನೆ ಅನ್ವಯ 5005 ಮಂದಿಯನ್ನು ಜಾಮೀನಿನ ಮೇಲೆ ಹಾಗೂ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಕಾರಾಗೃಹಗಳಲ್ಲಿ ಕೈದಿಗಳ ದಟ್ಟಣೆಯನ್ನು ಶೇ. 110 ರಿಂದ ಶೇ. 95 ಕ್ಕೆ ಇಳಿಸಲಾಗಿದೆ.
ಗೃಹ ಇಲಾಖೆಯಡಿ ಬರುವ ಎಲ್ಲ ಇಲಾಖೆಗಳ ವಿವಿಧ ಮೂಲ ಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ವಸ್ತುಸ್ಥಿತಿ ಆಧರಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ರಾಜ್ಯದಲ್ಲಿ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಬೃಹತ್ ಮೊತ್ತದ ಅನುದಾನವನ್ನು ಬ್ಯಾಂಕಿನಲ್ಲಿ ಠೇವಣಿ ಇಡುವ ಸಂದರ್ಭದಲ್ಲಿ ಯಾವುದೇ ರೀತಿಯ ದುರುಪಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ದುರುಪಯೋಗಗೊಂಡ ಪ್ರಕರಣಗಳಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಸೂಚಿಸಿದರು.
ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕರಾದ ಪ್ರವೀಣ್ ಸೂದ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


