ಕೊರೋನಾ ಹಿನ್ನೆಲೆ: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ 'ಸುಪ್ರೀಂ'ಗೆ ಅರ್ಜಿ
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದರೂ, ರಾಜ್ಯ ಸರ್ಕಾರ ಜೂ 25ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದರೂ, ರಾಜ್ಯ ಸರ್ಕಾರ ಜೂ 25ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.
ಬೆಳಗಾವಿ ನಿವಾಸಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಎಂಬುವವರು ವಿಶೇಷ ಮನವಿ ಅರ್ಜಿ (ಎಸ್ ಎಲ್ ಪಿ) ಸಲ್ಲಿಸಿದ್ದು, ಪರೀಕ್ಷೆ ನಡೆಸಲು ನಿರ್ಧರಿಸುವ ಮೂಲಕ ಸರ್ಕಾರ ಅಪ್ರಾಪ್ತ ಮಕ್ಕಳು, ಅವರ ಪೋಷಕರು ಮತ್ತು ಶಿಕ್ಷಣಾಧಿಕಾರಿಗಳ ಜೀವನವನ್ನು ಅಪಾಯಕ್ಕೆ ಸಿಲುಕಿಸಿದೆ. ಆದರೆ, ಈ ಅಂಶಗಳನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಪರಿಗಣಿಸಲು ನಿರಾಕರಿಸಿದೆ ಎಂದಿದ್ದಾರೆ.
ರಾಜ್ಯದಲ್ಲಿ ಜೂ.25ರಿಂದ ಜುಲೈ 4ರವರೆಗೆ ಎಸ್ಎಸ್ ಎಲ್ ಸಿ ಪರೀಕ್ಷೆಗಳನ್ನು ಘೋಷಿಸಲಾಗಿದೆ. ಇದರಲ್ಲಿ ಸುಮಾರು 8.48 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರೊಂದಿಗೆ ಇವರ ಪೋಷಕರು ಕೂಡ ಪ್ರಯಾಣ ಮಾಡುವ ಸಾಧ್ಯತೆಯಿದೆ. ರಾಜ್ಯಾದ್ಯಂತ 3 ಸಾವಿರಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪ್ರತಿ ಕೇಂದ್ರದಲ್ಲೂ 500 ಕ್ಕೂ ವಿದ್ಯಾರ್ಥಿಗಳಿರಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಎಷ್ಟು ಮಾರ್ಗಸೂಚಿಗಳನ್ನು ಪಾಲಿಸಿ, ಎಚ್ಚರಿಕೆ ವಹಿಸಿದರೂ ಅಪಾಯದ ಭೀತಿ ಇರುತ್ತದೆ. ಇದು ಅಪ್ರಾಪ್ತರ ಬದುಕುವ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಆರೋಪಿಸಿದ್ದಾರೆ.
ಅದ್ದರಿಂದ ಪರೀಕ್ಷಾ ವೇಳಾಪಟ್ಟಿಗೆ ತಡೆ ನೀಡಲು ನಿರಾಕರಿಸಿ ಹೈಕೋರ್ಟ್ ಮೇ 27ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕು. ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಜೂ. 25ಕ್ಕೆ ನಿಗದಿಯಾಗಿರುವ ಪರೀಕ್ಷೆಗಳನ್ನು ನಡೆಸದಂತೆ ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಮತ್ತು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು. ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನ ಮತ್ತು ಪೂರ್ವಭಾವಿ ಪರೀಕ್ಷಾ ಫಲಿತಾಂಶವನ್ನು ಪರಿಗಣಿಸಿ ಅಂತಿಮ ಫಲಿತಾಂಶ ನೀಡುವಂತೆ ನಿರ್ದೇಶನ ನೀಡಿ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


