ಐ.ಎಲ್.ಐ ಲಕ್ಷಣ ಇರುವವರು ಸಹ ತಪಾಸಣೆ ಮಾಡಿಸಿಕೊಳ್ಳಿ: ಡಾ. ಕೆ.ಸುಧಾಕರ್
ರಾಜಧಾನಿ ಬೆಂಗಳೂರಿನಲ್ಲಿ ಕೊರೋನ ಸೋಂಕು ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿಲ್ಲ. ಶೇ 50 ರಷ್ಟು ಸೋಂಕಿತರು ಈಗಾಗಲೇ ಗುಣಮುಖರಾಗಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೋನ ಸೋಂಕು ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿಲ್ಲ. ಶೇ 50 ರಷ್ಟು ಸೋಂಕಿತರು ಈಗಾಗಲೇ ಗುಣಮುಖರಾಗಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೆಂಗಳೂರಿನಲ್ಲಿ ಒಟ್ಟು ಕೊರೋನ ಪ್ರಕರಣಗಳಲ್ಲಿ ಶೇ 50 ರಷ್ಟು ಮಂದಿ ಗುಣಮುಖರಾಗಿ ಮನೆಗೆ ಹಿಂದಿರುಗಿದ್ದಾರೆ. ಇನ್ನುಳಿದ ಶೇ 50 ರಷ್ಟು ಪ್ರಕರಣಗಳಲ್ಲಿ ಶೇ 97 ರಷ್ಟು ಜನರಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲ. ಉಳಿದ ಶೇ 3 ರಷ್ಟು ಸೋಂಕಿತರಿಗೆ ಮಾತ್ರ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.
ಹೆಚ್ಚಿನ ಸೋಂಕಿತರು ರೋಗ ತೀವ್ರವಾಗಿ ಉಲ್ಬಣವಾದ ನಂತರ ಆಸ್ಪತ್ರೆಗೆ ಬರುತ್ತಿದ್ದಾರೆ. ಕೊನೆಯ ಹಂತದಲ್ಲಿ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಯಾರಿಗಾದರೂ ಐಎಲ್‌ಐ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಜ್ವರ ತಪಾಸಣಾ ಕೇಂದ್ರಗಳಿಗೆ ತೆರಳಿ ತೋರಿಸಿಕೊಳ್ಳುವಂತೆ ಸೂಚಿಸಿದರು.
ಅದರಲ್ಲೂ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಯಾವುದೇ ಲಕ್ಷಣ ಕಂಡುಬಂದಲ್ಲಿ ಮನೆಯಲ್ಲಿರುವ ಯುವಕರು ಜವಾಬ್ದಾರಿಯಿಂದ ತುರ್ತಾಗಿ ತಪಾಸಣೆ ಮಾಡಿಸಲು ಮುಂದಾಗಬೇಕು. ನಗರದಲ್ಲಿ ದೊಡ್ಡ ದೊಡ್ಡ ಸ್ಟೇಡಿಯಂಗಳನ್ನು ಕ್ವಾರಂಟೀನ್ ಕೇಂದ್ರವಾಗಿ ಮಾರ್ಪಾಡು ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ಹೇಳಿದರು.
ರೋಗಲಕ್ಷಣಗಳಿರುವವರನ್ನು ಪತ್ತೆ ಹಚ್ಚಿ ತಪಾಸಣೆಗೆ ಒಳಪಡಿಸಲು ಅನುವಾಗುವಂತೆ ಬಿಬಿಎಂಪಿಯಿಂದ 800 ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳು ಮನೆಮನೆಗೆ ತೆರಳಿ ರೋಗ ಲಕ್ಷಣವಿರುವವರ ಸಮಿಕ್ಷೆ ನಡೆಸಲಿದ್ದಾರೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು. ಇದರಿಂದಾಗಿ ಸೋಂಕಿತರ ಪತ್ತೆಗೆ ಅನುಕೂಲವಾಗಲಿದ್ದು, ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ನೀಡಬಹುದು ಎಂದು ಅವರು ಹೇಳಿದರು.
ನಗರದಲ್ಲಿ ಕಂಟೈನ್‌ಮೆಂಟ್ ಪ್ರದೇಶಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಂಟೈನ್‌ಮೆಂಟ್ ಪ್ರದೇಶಗಳು ಈಗ ಮೊದಲಿನಂತಿಲ್ಲ. ಅದರ ವ್ಯಾಖ್ಯಾನ ಬದಲಾಗಿದೆ. ಮೊದಲು ಪೂರ್ಣ ವಾರ್ಡ್‌ಗಳನ್ನು ಅಥವಾ 1 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಕಂಟೈನ್‌ಮೆಂಟ್ ಆಗಿ ಘೋಷಿಸಲಾಗುತ್ತಿತ್ತು. ಈಗ ಅದು ಕೇವಲ ಸೋಂಕಿತ ವ್ಯಕ್ತಿಯ ಮೆನೆಗೆ ಮಾತ್ರ ಸೀಮಿತವಾಗಿದೆ. ಆದ್ದರಿಂದ 1.2 ಕೋಟಿ ಜನಸಂಖ್ಯೆ ಇರುವ ಬೆಂಗಳೂರಿನಲ್ಲಿ 60 ಕಂಟೈನ್‌ಮೆಂಟ್ ವಲಯ ಹೆಚ್ಚೇನು ಅಲ್ಲ ಅಂದು ಸಚಿವರು ತಿಳಿಸಿದ್ದಾರೆ.
ನಗರದಲ್ಲಿ ಕೋವಿಡ್ ಅಲ್ಲದ ರೋಗಗಳಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಹಂತ ಹಂತವಾಗಿ ಕೋವಿಡ್ ಅಲ್ಲದ ಚಿಕಿತ್ಸೆಗಾಗಿ ಮುಕ್ತವಾಗಿಸಲು ನಿರ್ಧರಿಸಲಾಗಿದೆ. ಪ್ರಥಮ ಹಂತದಲ್ಲಿ ಬೋರಿಂಗ್ ಆಸ್ಪತ್ರೆಯನ್ನು ಕೋವಿಡ್ ಅಲ್ಲದ ರೋಗಗಳಿಗೆ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


