ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು: ಲಾಕ್'ಡೌನ್ ಬಗ್ಗೆ ಸಂಪುಟದಲ್ಲಿಂದು ಚರ್ಚೆ
ರಾಜ್ಯದಲ್ಲಿ ಪ್ರಮುಖವಾಗಿ ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈರಸ್ ನಿಯಂತ್ರಿಸಲು ಕೈಗೊಳ್ಳಬೇಕಾದ ಕಠಿಣ ಕ್ರಮಗಳ ಕುರಿತು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ಬೆಂಗಳೂರು: ರಾಜ್ಯದಲ್ಲಿ ಪ್ರಮುಖವಾಗಿ ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈರಸ್ ನಿಯಂತ್ರಿಸಲು ಕೈಗೊಳ್ಳಬೇಕಾದ ಕಠಿಣ ಕ್ರಮಗಳ ಕುರಿತು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.
ಮತ್ತೊಮ್ಮೆ ಲಾಕ್'ಡೌನ್ ಹೇರಬೇಕು ಎಂಬ ಒತ್ತಾಯದ ಬಗ್ಗೆಯೂ ಸ್ಪಷ್ಟಚಿತ್ರಣ ಹೊರಬೀಳುವ ನಿರೀಕ್ಷೆಯಿದೆ. ಗುರುವಾರದಿಂದಲೇ ಎಸ್ಎಸ್ಎಲ್'ಸಿ ಪರೀಕ್ಷೆ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅನಗತ್ಯ ಗೊಂದಲಗಳಿಗೆ ಅವಕಾಶವಾಗದ ರೀತಿಯಲ್ಲಿ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಧಕ್ಕೆ ಆಗದ ರೀತಿಯಲ್ಲಿ ಲಾಕ್'ಡೌನ್ ಮಾಡುವ ಬಗ್ಗೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.
ಮತ್ತೊಮ್ಮೆ ಲಾಕ್'ಡೌನ್ ಹೇರುವ ಬಗ್ಗೆ ಸರ್ಕಾರದ ಕೆಲವು ಸಚಿವರಿಗೆ ಒಲವು ಇದ್ದರೂ ಆರ್ಥಿಕ ಚಟುವಟಿಕೆ ಹಿನ್ನೆಲೆಯಲ್ಲಿ ಪರ್ಯಾಯ ಮಾರ್ಗಗಳನ್ನು ಹುಡುಕುವ ಬಗ್ಗೆ ಹೆಚ್ಚು ಒತ್ತು ನೀಡುವ ಸಂಭವವಿದೆ. ಆಯಾ ಜಿಲ್ಲಾಧಿಕಾರಿಗಳಿಗೆ ಅಥವಾ ತಾಲೂಕು ದಂಡಾಧಿಕಾರಿಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಸೀಮಿತ ಲಾಕ್'ಡೌನ್ ಹೇರುವ ಅಧಿಕಾರ ನೀಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಕಳೆದ 15 ದಿನಗಳಿಂದ ರಾಜ್ಯದಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ. ಬೆಂಗಳೂರು, ಬಳ್ಳಾರಿ, ಬೀದರ್, ಕಲಬುರಗಿ, ಯಾದಗಿರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಾಗಿ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿವೆ. ಸಂಕಷ್ಟದ ಸನ್ನಿವೇಶದಲ್ಲಿ ಮುಂದೆ ಏನು ಎಂಬುದು ಸರ್ಕಾರ ಚಿಂತನೆ ನಡೆಸಿದೆ. ಅದರಲ್ಲಿಯೂ ಬೆಂಗಳೂರಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದು ಸರ್ಕಾರಕ್ಕೆ ಸಹಜವಾಗಿಯೇ ಆತಂಕಕ್ಕೆ ಕಾರಣವಾಗಿದೆ.
ಲಾಕ್'ಡೌನ್ ಸಡಿಲಗೊಳಿಸಿದ ಬಳಿಕ ಜನರು ಅನಗತ್ಯವಾಗಿ ಓಡಾಟ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಅನಗತ್ಯ ಜನರ ಓಡಾಟಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆಗೆ ಹೆಚ್ಚು ಅಧಿಕಾರ ನೀಡುವ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ. ಇದಲ್ಲದೇ, ರಾಜ್ಯದ ಆರ್ಥಿಕ ಚಟುವಟಿಕೆ ನಿಧಾನಗತಿಯಲ್ಲಿ ಹೆಚ್ಚಳವಾಗುತ್ತಿದ್ದು, ಇದಕ್ಕೆ ಯಾವುದೇ ರೀತಿಯಲ್ಲಿಯೂ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕಾದ ಅನಿವಾರ್ಯತೆ ಸರ್ಕಾರಕ್ಕೆ ಇದೆ. ಹೀಗಾಗಿ ಯಾವ ರೀತಿಯಲ್ಲಿ ಮುಂದಿನ ಹೆಜ್ಜೆ ಇಡಬೇಕು ಎಂಬುದರ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


