ಬೇಡಿಕೆ ಆಧರಿಸಿ ಕೌಶಲ್ಯ ಅಭಿವೃದ್ಧಿ ತರಬೇತಿ; ಜುಲೈ 7 ರಂದು ಬೃಹತ್ ಆನ್ ಲೈನ್ ಉದ್ಯೋಗ ಮೇಳ ; ಬಿ.ಎಸ್.ಯಡಿಯೂರಪ್ಪ
ರಾಜ್ಯ ಸರ್ಕಾರವು ಬೇಡಿಕೆ ಆಧಾರಿತ ಕೌಶಲ್ಯ ಅಭಿವೃದ್ಧಿ ತರಬೇತಿಗೆ ಆದ್ಯತೆ ನೀಡುತ್ತಿದ್ದು, ನಾಡಿನ ಯುವಜನರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರವು ಬೇಡಿಕೆ ಆಧಾರಿತ ಕೌಶಲ್ಯ ಅಭಿವೃದ್ಧಿ ತರಬೇತಿಗೆ ಆದ್ಯತೆ ನೀಡುತ್ತಿದ್ದು, ನಾಡಿನ ಯುವಜನರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಅವರು ಇಂದು ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಸ್ಕಿಲ್ ಕನೆಕ್ಟ್ ಪೋರ್ಟಲ್ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಕೌಶಲ್ಯ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ವಿವಿಧ ಪಾಲುದಾರರನ್ನು ಜೋಡಿಸಲು ಈ ಪೋರ್ಟಲ್‍ನ್ನು ಅಭಿವೃದ್ಧಿಗೊಳಿಸಲಾಗಿದೆ. ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು, ತರಬೇತಿ ಕೇಂದ್ರಗಳು, ಉದ್ಯಮ, ಅಂತಾರಾಷ್ಟ್ರೀಯ ಏಜೆನ್ಸಿಗಳು ಹಾಗೂ ಸರ್ಕಾರವನ್ನು ಒಂದುಗೂಡಿಸುವ ಸಂಪರ್ಕ ಸೇತುವಾಗಿ ಸ್ಕಿಲ್ ಕನೆಕ್ಟ್ ಪೋರ್ಟಲ್ ಕಾರ್ಯನಿರ್ವಹಿಸಲಿದೆ ಎಂದು ಅವರು ಹೇಳಿದರು.
ಯುವಕರಿಗೆ ತಮ್ಮ ಕೌಶಲ್ಯವನ್ನು ಹೆಚ್ಚಿಸಲು, ಅಗತ್ಯ ಕೌಶಲ್ಯ ಮತ್ತು ಪರಿಣತಿಯನ್ನು ಪಡೆದುಕೊಳ್ಳಲು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಖಚಿತವಾದ ಉದ್ಯೋಗಾವಕಾಶಕ್ಕಾಗಿ ಕೌಶಲ್ಯ ತರಬೇತಿಗಳನ್ನು ನೀಡಲು ಮತ್ತು ಕೌಶಲ್ಯಗಳನ್ನು ಉನ್ನತೀಕರಿಸಲು 1000 ಪದವೀಧರರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ 2 ಕೋಟಿ ರೂ.ಗಳ ವೆಚ್ಚದಲ್ಲಿ talent acceleration programme ಅನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೋವಿಡ್ 19ರ ಕಾರಣದಿಂದಾಗಿ ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರ ನಡುವೆ ಉಂಟಾಗಿರುವ ಅಂತರ ನಿವಾರಿಸುವ ನಿಟ್ಟಿನಲ್ಲಿ ಜುಲೈ 7 ರಂದು ಬೃಹತ್ ಆನ್ ಲೈನ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ಸ್ಕಿಲ್ ಕನೆಕ್ಟ್ ಪೋರ್ಟಲ್ ಮೂಲಕ ನಾಡಿನ ಯುವಕರಿಗೆ ಉತ್ತಮ ಅವಕಾಶ ಒದಗಿಸುವ ಮಹತ್ವಪೂರ್ಣ ಉಪಕ್ರಮವಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ವಿವಿಧ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


