ರಾಜ್ಯ

ಬೆಂಗಳೂರಿನಲ್ಲಿ ಮತ್ತೆ ಮೂವರಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ, 24 ಗಂಟೆಯಲ್ಲಿ ಇದು 4ನೇ ಪ್ರಕರಣ, ಉನ್ನತ ಮಟ್ಟದ ಸಭೆ!

ನಿನ್ನೆ ಬೆಂಗಳೂರಿನಲ್ಲಿ ಟೆಕ್ಕಿಯೊಬ್ಬರಲ್ಲಿ ಕೊರೋನಾ ವೈರಸ್ ಪತ್ತೆಯಾಗಿತ್ತು. ಇದೀಗ ಮೂವರಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದ್ದು ಕಳೆದ 24 ಗಂಟೆಯಲ್ಲಿ ನಾಲ್ಕು ಪ್ರಕರಣ ಪತ್ತೆಯಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಮೂವರಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ, 24 ಗಂಟೆಯಲ್ಲಿ ಇದು 4ನೇ ಪ್ರಕರಣ, ಉನ್ನತ ಮಟ್ಟದ ಸಭೆ!
ಸಂಗ್ರಹ ಚಿತ್ರ
Published On :

ಬೆಂಗಳೂರು: ಕರ್ನಾಟಕದಲ್ಲಿ ಇದುವರೆಗೆ ನಾಲ್ವರಲ್ಲಿ ಕೋವಿಡ್‌ 19 ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ನಿನ್ನೆ ಅಮೆರಿಕದಿಂದ ಮರಳಿದ್ದ ವೈಟ್​ಫೀಲ್ಡ್​ ಮೂಲದ ಟೆಕ್ಕಿಯಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ಅವರಿಗೆ ರಾಜೀವ್​ ಗಾಂಧಿ ಆಸ್ಪತ್ರೆಯಲ್ಲಿ ತೀವ್ರಾ ನಿಗಾ ಘಟಕದಲ್ಲಿ ಪ್ರತ್ಯೇಕ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಬೆನ್ನಲ್ಲೇ ಇಂದು ಮತ್ತೆ ಮೂವರಿಗೆ ಈ ಸೋಂಕು ಇರುವುದು ದೃಢಪಟ್ಟಿದೆ.

ಸೋಂಕಿತರನ್ನು ಕುಟುಂಬ ಸದಸ್ಯರಿಂದ ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದ ಜನರು ಮುಂಜಾಗೃತ ಕ್ರಮವಾಗಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಮೂವರಿಗೆ ಸೋಂಕಿರುವ ಕುರಿತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರೀಸರ್ಚ್  ಪ್ರಕಟಣೆ ಹೊರಡಿಸಿದ್ದು, ಇದರ ಬೆನ್ನಲ್ಲೇ ಸಚಿವರು ಈ ಕುರಿತು ದೃಢಪಡಿಸಿದ್ದಾರೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್​, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ತುರ್ತು ಸಭೆಗೆ ಮುಂದಾಗಿದ್ದಾರೆ.

ಟೆಕ್ಕಿ ಜೊತೆ ಪ್ರಯಾಣ ಬೆಳಸಿದ್ದ ಅವರ ಪತ್ನಿ, ಪುತ್ರಿ ಹಾಗೂ ಸಹೋದ್ಯೋಗಿಗೆ ಸೋಂಕಿರುವುದು ದೃಢವಾಗಿದೆ. ಅವರು ಈಗಾಗಲೇ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್​ ತಿಳಿಸಿದರು.
ನಾಲ್ವರಿಗೆ ಸೋಂಕಿರುವುದು ದೃಢಪಟ್ಟ ಹಿನ್ನೆಲೆ ಇಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಮಧ್ಯಾಹ್ನ ಸಭೆ ಕರೆಯಲಾಗಿದೆ. ಆರೋಗ್ಯ ಸಚಿವ ಬಿ ಶ್ರೀರಾಮುಲು, ಉನ್ನತ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಕೂಡ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇದಾದ ಬಳಿಕ ಸಂಜೆ ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿಸಿದರು.

ಶ್ರೀರಾಮುಲು ಸುದ್ದಿಗಾರರೊಂದಿಗೆ ಮಾತನಾಡಿ, ಇಲ್ಲಿಯತನಕ 1 ಲಕ್ಷ ಜನರ ತಪಾಸಣೆ ಮಾಡಲಾಗಿದೆ. ನಿನ್ನೆ ಅಮೆರಿಕದಿಂದ ಬಂದ ವ್ಯಕ್ತಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಅವರ ಜೊತೆ ಅಮೆರಿಕದಿಂದ ಬಂದವರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಇಂತಹ ಖಾಯಿಲೆ ಬಂದಾಗ ಸಮರ್ಥವಾಗಿ ಎದುರಿಸಲು ಅನುದಾನದ ಕೊರತೆ ಇಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.