ಕೋವಿಡ್-19: ಸೋಂಕಿಗೊಳಗಾದ ಎಚ್.ಡಿ.ಕುಮಾರಸ್ವಾಮಿಗೂ ತಟ್ಟಿದ ಹಾಸಿಗೆ ಅಭಾವ!
ಮಹಾಮಾರಿ ಕೊರೋನಾ ವೈರಸ್ ಸೋಂಕಿಗೊಳಗಾಗಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಲು ಹಾಸಿಗೆಗಾಗಿ ಪರದಾಡಿದ ಘಟನೆ ನಡೆದಿದೆ.

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಸೋಂಕಿಗೊಳಗಾಗಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಲು ಹಾಸಿಗೆಗಾಗಿ ಪರದಾಡಿದ ಘಟನೆ ನಡೆದಿದೆ.
ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕೆ ಹೋಗಿದ್ದ ಕುಮಾರಸ್ವಾಮಿ ಅವರಿಗೆ ಶುಕ್ರವಾರ ಸಂಜೆಯೇ ದಣಿವು ಕಾಣಿಸಿಕೊಂಡಿದೆ. ಹೀಗಾಗಿ ಬೆಂಗಳೂರಿಗೆ ಮರಳಿ, ಮನೆಗೆ ಹೋಗದೆ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದರು.
ಇದರಂತೆ ಇಂದು ಬೆಳಿಗ್ಗೆ ವೈದ್ಯಕೀಯ ತಪಾಸಣೆ ಮಾಡಿಸಿಕೊಂಡಿದ್ದು, ಈ ವೇಳೆ ಕುಮಾರಸ್ವಾಮಿಯವರಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಳಿಕ ವೈದ್ಯರು ಕೂಡಲೇ ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದ್ದಾರೆ.
ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲು ಮುಂದಾದ ಕುಮಾರಸ್ವಾಮಿಯವರು ಮಣಿಪಾಲ್ ಆಸ್ಪತ್ರೆಯನ್ನು ಸಂಪರ್ಕಿಸಿದ್ದಾರೆ. ಆದರೆ, ಈ ವೇಳೆ ಹಾಸಿಗೆ ಖಾಲಿಯಿಲ್ಲ ಎಂದು ಪ್ರತಿಕ್ರಿಯೆ ಬಂದಿದೆ. ಈ ನಡುವೆ ವಿಚಾರ ತಿಳಿದ ಕೂಡಲೇ ಆರೋಗ್ಯ ಸಚಿವ ಸುಧಾಕರ್ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಹಾಸಿಗೆ ದೊರಕಿಸಿ ಕೊಡಲು ಪ್ರಯತ್ನಿಸುತ್ತಿದ್ದಾರೆಂದು ತಿಳಿದುಬಂದಿದೆ.
ಹಾಸಿಗೆ ದೊರೆತ ಕೂಡಲೇ ಕುಮಾರಸ್ವಾಮಿಯವರು ಆಸ್ಪತ್ರೆಗೆ ದಾಖಲಾಗಲಿದ್ದಾರೆಂದು ಕುಮಾರಸ್ವಾಮಿಯವರ ಕುಟುಂಬ ಮೂಲಗಳು ಮಾಹಿತಿ ನೀಡಿದೆ.
ಈ ನಡುವೆ ಕುಮಾರಸ್ವಾಮಿಯವರಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಾರೈಸಿದ್ದಾರೆ.
ಯಡಿಯೂರಪ್ಪ ಅವರೂ ಕೂಡ ಕೊರೋನಾ ಸೋಂಕಿಗೊಳಗಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಿಂದಲೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಕುಮಾರಸ್ವಾಮಿಯವರಿಗೆ ಹಾರೈಸಿಸಿದ್ದಾರೆ.
ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರು ಟ್ವೀಟ್ ಮಾಡಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ, ಮತ್ತು ದೇವರ ದಯೆಯಿಂದ ಆದಷ್ಟು ಬೇಗ ಗುಣಮುಖರಾಗಲಿದ್ದಾರೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಯಾವುದೇ ಆತಂಕ ಬೇಡ ಎಂದು ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


