ರಾಜ್ಯ

ಒಪ್ಪಿಗೆಯಂತೆ ಕರ್ನಾಟಕಕ್ಕೆ ಆಕ್ಸಿಜನ್ ಪೂರೈಸಿ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ರಾಜ್ಯಕ್ಕೆ ಹಂಚಿಕೆ ಮಾಡಲು ಕೊಟ್ಟಿರುವ ಒಪ್ಪಿಗೆಯಂತೆ ದಿನಕ್ಕೆ 802 ಟನ್ ಆಮ್ಲಜನಕ ಪೂರೈಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ಮಂಗಳವಾರ ಸೂಚನೆ ನೀಡಿದೆ.

ಒಪ್ಪಿಗೆಯಂತೆ ಕರ್ನಾಟಕಕ್ಕೆ ಆಕ್ಸಿಜನ್ ಪೂರೈಸಿ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯಕ್ಕೆ ಹಂಚಿಕೆ ಮಾಡಲು ಕೊಟ್ಟಿರುವ ಒಪ್ಪಿಗೆಯಂತೆ ದಿನಕ್ಕೆ 802 ಟನ್ ಆಮ್ಲಜನಕ ಪೂರೈಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

‘ಆಮ್ಲಜನಕ ಕೊರತೆ ಬಗ್ಗೆ ಇದೇ 24ರಂದು ಕೇಂದ್ರ ಸರ್ಕಾರದ ಜತೆ ಸಮಾಲೋಚನೆ ನಡೆಸಲಾಗಿದೆ’ ಎಂದು ರಾಜ್ಯ ಸರ್ಕಾರ ಸಲ್ಲಿಸಿದ ವಿವರಣೆ ಆಧರಿಸಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ವಿಶೇಷ ವಿಭಾಗೀಯ ಪೀಠ ಈ ಆದೇಶ ನೀಡಿತು. ಇದೇ ವೇಳೆ ‘ಆಮ್ಲಜನಕ ಮತ್ತು ರೆಮ್‌ಡಿಸಿವಿರ್ ಪೂರೈಕೆಯ ಕೊರತೆ ಆತಂಕಕಾರಿ ವಿಷಯ’ ಎಂದೂ ಪೀಠ ಹೇಳಿತು.

ಆಮ್ಲಜನಕ ಮತ್ತು ರೆಮ್‌ಡಿಸಿವಿರ್ ಕೊರತೆ ಇದೆ ಎಂದು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಂ ಅಸೋಸಿಯೇಷನ್‌ (ಫನಾ) ಅಧ್ಯಕ್ಷ ಡಾ. ಎಚ್‌.ಎಂ. ಪ್ರಸನ್ನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. 
ಅರ್ಜಿಯಲ್ಲಿ ‘ಅಗತ್ಯ ಇರುವ ಪ್ರಮಾಣಕ್ಕಿಂತ ಶೇ 50ರಷ್ಟು ಕಡಿಮೆ ಆಮ್ಲಜನಕ ಮತ್ತು ಶೇ 25ರಷ್ಟು ರೆಮ್‌ಡಿಸಿವಿರ್ ಚುಚ್ಚುಮದ್ದುಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಪೂರೈಸಲಾಗುತ್ತಿದೆ’ ಎಂದು ಹೇಳಿದರು.

ಈ ನಡುವೆ ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿದ ರಾಜ್ಯ ಸರ್ಕಾರ, ‘ಏ.30ರ ವೇಳೆಗೆ 3,24,944 ಸೋಂಕಿತರಿಗೆ ಪೂರೈಸಲು ದಿನಕ್ಕೆ 1,471 ಟನ್ ಆಮ್ಲಜನಕ ಅಗತ್ಯವಿದೆ. ಆದರೆ, ಸ್ಥಳೀಯ ಉತ್ಪಾದನಾ ಸಾಮರ್ಥ 812 ಟನ್ ಇದೆ. ರಾಜ್ಯಕ್ಕೆ ದಿನಕ್ಕೆ 600 ಟನ್ ಆಮ್ಲಜನಕ ಕೊರತೆ ಇದೆ. 802 ಟನ್‌ ಆಮ್ಲಜನಕ ಪೂರೈಸಲು ಕೇಂದ್ರ ಸರ್ಕಾರ ಒಪ್ಪಿದೆ’ ಎಂದು ತಿಳಿಸಿತು.

ಈ ವೇಳೆ ‘ರಾಜ್ಯಕ್ಕೆ ಹಂಚಿಕೆ ಮಾಡಿರುವ ಆಮ್ಲಜನಕವನ್ನು ಪೂರೈಸಬೇಕು’ ಕೇಂದ್ರ ಸರ್ಕಾರಕ್ಕೆ ‍ಪೀಠ ನಿರ್ದೇಶನ ನೀಡಿತು. ಬೆಂಗಳೂರಿನ ಕಮಾಂಡೋ ಆಸ್ಪತ್ರೆ ಮತ್ತು ಇತರ ಆಸ್ಪತ್ರೆಗಳಲ್ಲಿ ಕೆಲ ಹಾಸಿಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗೆ ಪಡೆದುಕೊಳ್ಳಲು ಸಂಬಂಧಪಟ್ಟವರೊಂದಿಗೆ ಮಾತುಕತೆ ನಡೆಸಿ’ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಪೀಠ ಸೂಚಿಸಿತು.

ಕೋವಿಡ್‌ ರೋಗಿಗಳಿಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಲಭ್ಯ ಇರುವ ಹಾಸಿಗೆ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡು ಬಂದಿಲ್ಲ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.