ಕೋವಿಡ್ ಎಫೆಕ್ಟ್: ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ನಿಯಂತ್ರಣಕ್ಕೆ ಟೋಕನ್ ವ್ಯವಸ್ಥೆ ಜಾರಿಗೆ ಸರ್ಕಾರ ಚಿಂತನೆ
ಕೊರೋನಾ ಸಾಂಕ್ರಾಮಿಕ ನಡುವೆ ದೇವಾಲಯಗಳಲ್ಲಿ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆಯನ್ನು ನಿಯಂತ್ರಿಸಲು ಟೋಕನ್ ವ್ಯವಸ್ಥೆ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ನಡುವೆ ದೇವಾಲಯಗಳಲ್ಲಿ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆಯನ್ನು ನಿಯಂತ್ರಿಸಲು ಟೋಕನ್ ವ್ಯವಸ್ಥೆ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಬುಧವಾರ ವಿಧಾನಸೌಧದಲ್ಲಿ ಸಚಿವೆಯಾದ ಬಳಿಕ ಮೊದಲ ಬಾರಿಗೆ ಸಭೆ ನಡೆಸಿದ ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ, ದೇವಾಲಯಗಳಲ್ಲಿ ಕೋವಿಡ್-19 ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸಲು ಇಂತಹ ವ್ಯವಸ್ಥೆಯನ್ನು ಪರಿಗಣಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಲಾಕ್ ಡೌನ್ ಸಡಿಲಿಕೆ ಜಾರಿಯಾದಾಗಿನಿಂದಲೂ ದೇವಾಲಯಗಳತ್ತ ಹೆಚ್ಚಿನ ಸಂಖ್ಯೆಯ ಜನರು ಆಗಮಿಸುತ್ತಿದ್ದಾರೆ. ಪ್ರಸಿದ್ಧ ದೇವಾಲಯಗಳಲ್ಲಿ ಈ ದಟ್ಟಣೆ ಸಾಮಾನ್ಯವಾಗಿ ದೊಡ್ಡದಾಗಿದೆ. ಇದನ್ನು ನಿಯಂತ್ರಿಸಲು ನಿರ್ದಿಷ್ಟ ಸಂಖ್ಯೆಯ ಭಕ್ತರಿಗೆ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ರೂಪುರೇಷೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸುವಂತೆಯೂ ನಿರ್ದೇಶಿಸಿದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿಕಲಾ ಜೊಲ್ಲೆ, ರಾಜ್ಯದಲ್ಲಿನ ಎ, ಬಿ ಮತ್ತು ಸಿ ವರ್ಗೀಕರಣದ ದೇವಾಲಯಗಳ ಬಗ್ಗೆ ವರದಿ ಕೇಳಿದ್ದು, ಆಸ್ತಿ ಬಗ್ಗೆ ಸಮೀಕ್ಷೆ ನಡೆಸಿ, ದೇವಸ್ಥಾನಗಳ ಆಸ್ತಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಇಲಾಖೆ ವ್ಯಾಪ್ತಿಗೆ ಬರುವ ದೇವಸ್ಥಾನಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಅಲ್ಲದೆ ಭಕ್ತರಿಗೆ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದರು.
ಯಾತ್ರಿ ನಿವಾಸ ವಸತಿ ಮತ್ತು ಭಕ್ತರಿಗೆ ಬೋರ್ಡಿಂಗ್ ಸೌಲಭ್ಯಗಳನ್ನು ನಿರ್ಮಿಸಲು ಅವಕಾಶವಿರುವ ಸ್ಥಳಗಳ ಪಟ್ಟಿಯನ್ನು ತಯಾರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕರ್ನಾಟಕದ ಹೊರಗಿನ ಜನಪ್ರಿಯ ತಾಣಗಳಾದ ಮಹಾರಾಷ್ಟ್ರದ ಪಂಧಾರ್ ಪುರ ಮತ್ತು ತುಳಜಾಪುರ, ಆಂಧ್ರಪ್ರದೇಶದ ಶ್ರೀಶೈಲ ಮತ್ತು ಕೇರಳ ಮತ್ತು ತಮಿಳುನಾಡಿನ ಇತರ ಜನಪ್ರಿಯ ತಾಣಗಳಲ್ಲಿ ಯಾತ್ರಿ ನಿವಾಸ ಸೌಲಭ್ಯ ಕಲ್ಪಿಸಲು ಸ್ಥಳ ಲಭ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


