ರಾಜ್ಯ

ಗ್ರಾಮೀಣ ಭಾಗದಲ್ಲಿರುವ 1.5 ಲಕ್ಷ ಮಕ್ಕಳು ಶಾಲೆಗೇ ಹೋಗುತ್ತಿಲ್ಲ: ಸಮೀಕ್ಷಾ ವರದಿ

ರಾಜ್ಯದ ಗ್ರಾಮೀಣ ಭಾಗದಲ್ಲಿನ 1.5 ಲಕ್ಷ ಮಕ್ಕಳು ಶಾಲೆಗೇ ಹೋಗುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಡೆಸಿರುವ ಸಮೀಕ್ಷಾ ವರದಿಯಿಂದ ಬಹಿರಂಗಗೊಂಡಿದೆ.

ಗ್ರಾಮೀಣ ಭಾಗದಲ್ಲಿರುವ 1.5 ಲಕ್ಷ ಮಕ್ಕಳು ಶಾಲೆಗೇ ಹೋಗುತ್ತಿಲ್ಲ: ಸಮೀಕ್ಷಾ ವರದಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದಲ್ಲಿನ 1.5 ಲಕ್ಷ ಮಕ್ಕಳು ಶಾಲೆಗೇ ಹೋಗುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಡೆಸಿರುವ ಸಮೀಕ್ಷಾ ವರದಿಯಿಂದ ಬಹಿರಂಗಗೊಂಡಿದೆ. 

ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ವಿಚಾರವಾಗಿ ಹೈಕೋರ್ಟ್‌ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿದ್ದು, ಈ ಸಂಬಂಧ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ನಿನ್ನೆ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಹಿರಿಯ ವಕೀಲ ಕೆ.ಎನ್. ಫಣೀಂದ್ರ ವರದಿ ಸಲ್ಲಿಸಿದ್ದು, ಸಮೀಕ್ಷಾ ವರದಿ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. 

‘ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು ಮನೆ ಮನೆ ಸಮೀಕ್ಷೆ ನಡೆಸಲಾಗಿದೆ. ನಗರ ಪ್ರದೇಶಗಳಲ್ಲಿನ 12,28,052 ಮಕ್ಕಳನ್ನು ಸಮೀಕ್ಷೆ ನಡೆಸಲಾಗಿದೆ. ಅದರಲ್ಲಿ 6ರಿಂದ 18 ವರ್ಷದೊಳಗಿನ 9,25,820 ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆ. ಇದೇ ವಯೋಮಾನದ 8,718 ಮಕ್ಕಳು ಶಾಲೆಗೆ ಹೋಗುತ್ತಿಲ್ಲ. 4,842 ಮಕ್ಕಳು ಶಾಲೆಗೆ ದಾಖಲಾತಿಯೇ ಮಾಡಿಕೊಂಡು ಬಂದಿಲ್ಲ. ಇನ್ನೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಲಾಗಿಲ್ಲ. ಅದಕ್ಕೆ ಅಧಿಕಾರಿಗಳು ಕೋವಿಡ್‌ ಸಾಂಕ್ರಾಮಿಕ ಕಾರಣ ನೀಡಿದ್ದಾರೆ. ಬೆಂಗಳೂರಿನಲ್ಲಿ 25 ಲಕ್ಷ ಕುಟುಂಬಗಳು ವಾಸವಾಗಿವೆ. ಅವುಗಳ ಸಮೀಕ್ಷೆ ನಡೆಸಲು 4 ಸಾವಿರ ಸಿಬ್ಬಂದಿ ಬೇಕಾಗಿದ್ದಾರೆ ಎಂಬುದಾಗಿ ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.

‘ಗ್ರಾಮೀಣ ಭಾಗದಲ್ಲಿ ಒಟ್ಟು 34,55,656 ಮಕ್ಕಳ ಸಮೀಕ್ಷೆ ನಡೆಸಿ ಗುರುತಿಸಲಾಗಿದೆ. ಅದರಲ್ಲಿ 6ರಿಂದ 18 ವರ್ಷದೊಳಗಿನ 32,14,257 ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆ. ಇದೇ ವಯೋಮಾನದ ಒಟ್ಟು 33,344 ಮಕ್ಕಳು ಶಾಲೆಗೆ ಹೋಗುತ್ತಿಲ್ಲ. 9,716 ಮಕ್ಕಳು ಶಾಲೆಗೆ ದಾಖಲಾತಿಯೇ ಪಡೆದಿಲ್ಲ. 3 ವರ್ಷಕ್ಕಿಂತ ಕಡಿಮೆ ವಯಸ್ಸಿನ 72,094 ಮಕ್ಕಳು ಶಾಲೆಗೆ ಹೋಗುತ್ತಿಲ್ಲ. 3 ರಿಂದ 6 ವರ್ಷದೊಳಗೆ 1,26,245 ಮಕ್ಕಳು ಶಾಲೆಗೆ ಹೋಗುತ್ತಿಲ್ಲ’ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಆ ವರದಿಯನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ನೇತೃತ್ವದ ವಿಭಾಗೀಯ ಪೀಠ, ಸರ್ವೇ ನಡೆಸುವ ಸಂಬಂಧ ಉತ್ತರಿಸುವಂತೆ ಬಿಬಿಎಂಪಿಗೆ ನೋಟಿಸ್‌ ಜಾರಿಗೊಳಿಸಿತು. ಹಾಗೆಯೇ, ಕೂಡಲೇ ಮನೆ ಮನೆ ಸರ್ವೇ ನಡೆಸುವಂತೆ ಬಿಬಿಎಂಪಿಗೆ ಸೂಚನೆ ನೀಡಬೇಕು ಎಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಸೂಚಿಸಿ ವಿಚಾರಣೆ ಮುಂದೂಡಿತು.

ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಲು ಮನೆ ಮನೆ ಸಮೀಕ್ಷೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ 2020ರ ಮಾ.16ರಂದು ಆದೇಶಿಸಿತ್ತು. ಅದರಂತೆ ಸಮೀಕ್ಷೆ ನಡೆಸಲಾಗಿತ್ತಾದರೂ ಅದಕ್ಕೆ ಅನುಸರಿಸಿದ ಮಾನದಂಡಗಳ ವಿವರಗಳು ತಿಳಿಸಿರಲಿಲ್ಲ. ಇದರಿಂದ ಸಮೀಕ್ಷೆಯ ವರದಿ ಹಾಗೂ ದಾಖಲೆಗಳ ಪರಿಶೀಲನೆಗಾಗಿ ಪ್ರಕರಣದ ಅಮಿಕಸ್‌ ಕ್ಯೂರಿ ಹಾಗೂ ಇತರ ವಕೀಲರೊಂದಿಗೆ ಸಭೆ ನಡೆಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್‌ 2021ರ ಜೂ.23ರಂದು ನಿರ್ದೇಶಿಸಿತ್ತು.

ಅದರಂತೆ ರಾಜ್ಯ ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌.ಉಮಾಶಂಕರ್‌ ಅವರ ನೇತೃತ್ವದಲ್ಲಿ ಇದೇ ಜು.8ರಂದು ನಡೆದ ಸಭೆಯಲ್ಲಿ ಸಂಬಂಧಿಸಿದ ಎಲ್ಲ ವಕೀಲರು ಮತ್ತು ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ಸಮೀಕ್ಷೆ ಬಗ್ಗೆ ಅಧಿಕಾರಿಗಳು ವಿವರಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.