25 ಲಕ್ಷ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಆರ್ಥಿಕ ನೆರವು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಘೋಷಣೆ ಮಾಡಿರುವ ತಲಾ 3 ಸಾವಿರ ರೂ. ಸಹಾಯಧನವನ್ನು ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಘೋಷಣೆ ಮಾಡಿರುವ ತಲಾ 3 ಸಾವಿರ ರೂ.ಸಹಾಯಧನವನ್ನು ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೋವಿಡ್ 19 ಸಾಂಕ್ರಾಮಿಕದ ಎರಡನೇ ಅಲೆಯ ಹಿನ್ನೆಲೆಯಲ್ಲಿ ಘೋಷಿಸಲಾದ ಪ್ಯಾಕೇಜ್ ನಡಿಯ ಈ ಕಾರ್ಯಕ್ರಮದಲ್ಲಿ ಸುಮಾರು 25 ಲಕ್ಷ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಆರ್ಥಿಕ ನೆರವನ್ನು ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗುತ್ತಿದೆ. ಇದಕ್ಕಾಗಿ 749.55 ಕೋಟಿ ಪರಿಹಾರ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ.
ಕ್ಷೌರಿಕರು, ಅಗಸರು, ಟೈಲರುಗಳು, ಹಮಾಲರು, ಗೃಹ ಕಾರ್ಮಿಕರು, ಮೆಕ್ಯಾನಿಕ್ ಗಳು, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರುಉ, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಸೇರಿದಂತೆ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ತಲಾ 2 ಸಾವಿರ ರೂ. ನೆರವು ಘೋಷಿಸಲಾಗಿದ್ದು, ಇದಕ್ಕಾಗಿ ಸೇವಾ ಸಿಂಧುವಿನಡಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು. ಸುಮಾರು 3.3 ಲಕ್ಷ ಫಲಾನುಭವಿಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.
ಕೋವಿಡ್ ನಿಯಂತ್ರಣಕ್ಕಾಗಿ ವಿಧಿಸಲಾದ ನಿರ್ಬಂಧಗಳಿಂದ ಸಂಕಷ್ಟಕ್ಕೊಳಗಾದ ದುರ್ಬಲ ವರ್ಗದವರು, ಅಸಂಘಟಿತ ವಲಯದ ಕಾರ್ಮಿಕರಿಗೆ, ಶ್ರಮಿಕರಿಗೆ 1250 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಿಸಿದೆ. ಇದರೊಂದಿಗೆ ಮೀನುಗಾರರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೂ ಪರಿಹಾರ ಘೋಷಿಸಲಾಗಿದೆ.
ಕರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸರ್ಕಾರ ಯುದ್ಧೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಲಸಿಕೆ ಅಭಿಯಾನವೂ ಉತ್ತಮವಾಗಿ ನಡೆಯುತ್ತಿದೆ. ಈ ವರೆಗೆ 1.47 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ನಿರ್ಮಾಣ ಕಾರ್ಮಿಕರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲು ಕ್ರಮ ವಹಿಸಲಾಗುತ್ತಿದೆ. ನಿರ್ಮಾಣ ಸಂಸ್ಥೆಗಳೂ ತಮ್ಮ ಕಾರ್ಮಿಕರಿಗೆ ಲಸಿಕೆ ಒದಗಿಸಬೇಕೆಂದು ಮುಖ್ಯಮಂತ್ರಿಗಳು ಸಲಹೆ ಮಾಡಿದರು.
ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಕಾರ್ಮಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ. ಕಲ್ಪನಾ, ಇ-ಆಡಳಿತ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ರಮಣರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


