2 ಕೋಟಿ ಕೋವಿಡ್ ಲಸಿಕೆ ಪೂರೈಕೆಗೆ ಜಾಗತಿಕ ಟೆಂಡರ್: ಡಿಸಿಎಂ ಡಾ. ಅಶ್ವತ್ಥ ನಾರಾಯಣ
ರಾಜ್ಯದಲ್ಲಿ ಹೆಚ್ಚುತ್ತಿರುವ ವ್ಯಾಕ್ಸಿನ್ ಬೇಡಿಕೆಯನ್ನು ಪೂರೈಸಲು ಎರಡು ಕೋಟಿ ಕೋವಿಡ್ ಲಸಿಕೆಯನ್ನು ಜಾಗತಿಕ ಟೆಂಡರ್ ಮೂಲಕ ಖರೀದಿ ಮಾಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ವ್ಯಾಕ್ಸಿನ್ ಬೇಡಿಕೆಯನ್ನು ಪೂರೈಸಲು ಎರಡು ಕೋಟಿ ಕೋವಿಡ್ ಲಸಿಕೆಯನ್ನು ಜಾಗತಿಕ ಟೆಂಡರ್ ಮೂಲಕ ಖರೀದಿ ಮಾಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಇದರ ಜತೆಗೆ 3 ಕೋಟಿ ವ್ಯಾಕ್ಸಿನ್ ಖರೀದಿಗೆ ಈಗಾಗಲೇ ಬೇಡಿಕೆ ಸಲ್ಲಿಸಲಾಗಿದೆ. ಇದರಲ್ಲಿ 1 ಕೋಟಿ ಕೋವ್ಯಾಕ್ಸಿನ್, 2 ಕೋಟಿ ಕೋವಿಶೀಲ್ಡ್ ಲಸಿಕೆ ಸೇರಿದೆ. 18 ವರ್ಷದಿಂದ ಮೇಲ್ಪಟ್ಟು ಜನರಿಗೆ ಲಸಿಕೆ ಕೊಡಲು ಆರಂಭಿಸಿದ ನಂತರ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಖರೀದಿ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಡಿಸಿಎಂ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೂ ಕೇಂದ್ರ ಸರಕಾರ ಹಂಚಿಕೆ ಮಾಡುತ್ತಿದ್ದ ಲಸಿಕೆಯನ್ನು ಬಿಟ್ಟರೆ ನೇರವಾಗಿ ಮುಕ್ತ ಮಾರುಕಟ್ಟೆಯಲ್ಲಿ ಟೆಂಡರ್ ಕರೆದು ಖಾಸಗಿ ಕಂಪನಿಗಳಿಂದ ಖರೀದಿ ಮಾಡಿರಲಿಲ್ಲ. ಇವತ್ತೇ ಟೆಂಡರ್ ಕರೆಯಲು ಸೂಚಿಸಲಾಗಿದ್ದು, ಯಾವ ಕಂಪನಿ ಬೇಕಾದರೂ ಟೆಂಡರ್‌ನಲ್ಲಿ ಭಾಗವಹಿಸಬಹುದು. ಏಳು ದಿನದ ಒಳಗಾಗಿ ಈ ಪ್ರಕ್ರಿಯೆ ಮುಗಿಸಿ ಟೆಂಡರ್ ಪಡೆಯುವ ಕಂಪನಿಯು ಲಸಿಕೆಯನ್ನು ಪೂರೈಕೆ ಆರಂಭಿಸಬೇಕು ಎಂದರು.
1 ಲಕ್ಷ ಪಲ್ಸ್ ಅ್ಯಕ್ಸಿ ಮೀಟರ್ ಖರೀದಿ: ಸೋಂಕಿತರಿಗೆ ಅಗತ್ಯವಾದ ಪಲ್ಸ್ ಆಕ್ಸಿ ಮೀಟರ್ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಕೂಡಲೇ ಒಂದು ಲಕ್ಷ ಪಲ್ಸಾಕ್ಸಿ ಮೀಟರ್‌ಗಳನ್ನು ಖರೀದಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಅವುಗಳನ್ನು ಎಲ್ಲ ಜಿಲ್ಲೆ ಮತ್ತು ತಾಲ್ಲೂಕುಗಳಿಗೆ ಹಂಚಲಾಗುವುದು. ಅವುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಮತ್ತು ಸೋಂಕಿತರು ಗುಣಮುಖರಾದ ನಂತರ ವಾಪಸ್ ಪಡೆಯುವುದು ಆಯಾ ಜಿಲ್ಲಾ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಹೊಣೆ ಈ ಮೂಲಕ ಪಲ್ಸಾಕ್ಸಿ ಮೀಟರ್ ಬ್ಯಾಂಕ್ ಮಾಡುವ ಉದ್ದೇಶವಿದೆ ಎಂದರು.
ಸೋಂಕಿತರಿಗೆ ಅತ್ಯಗತ್ಯವಾಗಿ ಬೇಕಾದ ಐವರ್‌ಮೆಕ್ಟಿನ್ ಮಾತ್ರೆಯನ್ನು 10 ಲಕ್ಷ ಖರೀದಿ ಮಾಡಲಾಗಿದ್ದು, ಇದೇ 14ಕ್ಕೆ ಪೂರೈಕೆ ಶುರುವಾಗುತ್ತದೆ. ಅಲ್ಲದೆ, ಇನ್ನೂ 25 ಲಕ್ಷ ಮಾತ್ರೆ ಖರೀದಿಸುವಂತೆ ಸೂಚಿಸಲಾಗಿದೆ. ಇದು ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲೂ ಲಭ್ಯ ಇರಬೇಕು. ಜತೆಗೆ, 35 ಲಕ್ಷ ಜಿಂಕ್ ಟ್ಯಾಬ್ಲೆಟ್ ಹಾಗೂ ಒಂದು ಕೋಟಿ ಕಾಲ್ಸಿಚಿನ್ ಮಾತ್ರೆಗಳನ್ನೂ ಕೂಡಲೇ ಖರೀದಿ ಮಾಡಲು ನಿರ್ಧರಿಸಲಾಗಿದೆ. ಈ ಎಲ್ಲ ಔಷಧಿಗಳು ರಾಜ್ಯದ ಎಲ್ಲ ಜಿಲ್ಲಾ, ತಾಲೂಕು, ಆಸ್ಪತ್ರೆ ಹಾಗೂ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಭ್ಯ ಇರುವಂತೆ ನೋಡಿಕೊಳ್ಳಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.
ರೆಮಿಡಿಸಿವರ್ ಸರಬರಾಜು ಮಾಡದ ಕಂಪನಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಇದೇ ವೇಳೆ ಮುಖ್ಯ ಕಾರ್ಯದರ್ಶಿಗಳ ಜತೆ ಮಾತನಾಡಿದ ಡಾ.ಅಶ್ವತ್ಥ ನಾರಾಯಣ ನೊಟೀಸ್ ಕೊಟ್ಟರೂ ಸಕಾಲಕ್ಕೆ ರೆಮಿಡಿಸಿವರ್ ಪೂರೈಕೆ ಮಾಡದ ಕಂಪನಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಇನ್ನು, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರನ್ನು ದಾಖಲು ಮಾಡಿಕೊಳ್ಳುವ ಮುನ್ನ ಭೌತಿಕ ಪರೀಕ್ಷೆ ನಡೆಸಿಯೇ ದಾಖಲು ಮಾಡಿಕೊಳ್ಳಬೇಕು. ಹೀಗೆ ಮಾಡುವುದರಿಂದ ಗಂಭೀರ ಸೋಂಕಿತರಿಗೆ ಹಾಸಿಗೆಗಳು ಸಿಗುತ್ತವೆ. ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಲಸಿಕೆಗಾಗಿ ಹಳ್ಳಿಗಳಿಗೆ ಹೋಗುವುದು ಬೇಡ
ನಗರದ ಜನರು ಲಸಿಕೆ ಪಡೆಯಲು ಗ್ರಾಮೀಣ ಪ್ರದೇಶಕ್ಕೆ ಹೋಗುವುದು ಬೇಡ. ಅವರು ನಗರದಲ್ಲೇ ಲಸಿಕೆ ಪಡೆಯಲಿ.
ಬೇಡಿಕೆಗೆ ತಕ್ಕಂತೆ ಲಸಿಕೆ ಪೂರೈಕೆ ಮಾಡಲು ಎಲ್ಲ ಕ್ರಮ ವಹಿಸಲಾಗಿದೆ ಎಂದ ಡಿಸಿಎಂ, ಈ ಬಗ್ಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


