'ಕೋವಿಡ್ ಮಿತ್ರ' ಮಾದರಿ ಬಗ್ಗೆ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಮಾಹಿತಿ: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೋವಿಡ್-19 ಪ್ರಕರಣ ದಾಖಲಾಗುತ್ತಿರುವ ಜಿಲ್ಲೆಗಳೊಂದಿಗೆ ಚರ್ಚೆ ನಡೆಸಿದ್ದು, ಸೋಂಕಿನ ಪ್ರಮಾಣ ಕಡಿಮೆ ಮಾಡಲು ಹಮ್ಮಿಕೊಂಡಿರುವ ವಿನೂತನ ಪ್ರಯತ್ನಗಳ ಬಗ್ಗೆ ಕೇಳಿದರು.

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೋವಿಡ್-19 ಪ್ರಕರಣ ದಾಖಲಾಗುತ್ತಿರುವ ಜಿಲ್ಲೆಗಳೊಂದಿಗೆ ಚರ್ಚೆ ನಡೆಸಿದ್ದು, ಸೋಂಕಿನ ಪ್ರಮಾಣ ಕಡಿಮೆ ಮಾಡಲು ಹಮ್ಮಿಕೊಂಡಿರುವ ವಿನೂತನ ಪ್ರಯತ್ನಗಳ ಬಗ್ಗೆ ಕೇಳಿದರು. ನಮ್ಮ ಜಿಲ್ಲೆಯಲ್ಲಿ ಆರಂಭಿಸಿರುವ ಕೋವಿಡ್ ಮಿತ್ರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ಕಳುಹಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರು ಹೇಳಿದ್ದಾರೆ.
ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿಯವರು ಮಂಗಳವಾರ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಮಾಹಿತಿ ನೀಡಿದರು.
ನಮ್ಮ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಶೇ.50ರಷ್ಟು ಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದು, ಚಿಕಿತ್ಸೆಗೆ ನೆರವಾಗಲು 150 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕೋವಿಡ್ ಮಿತ್ರಗಳನ್ನಾಗಿ ಪರಿವರ್ತಿಸಲಾಗಿದೆ. ಈ ಪರಿಕಲ್ಪನೆಯನ್ನು ಕೇಂದ್ರಕ್ಕೆ ಕಳುಹಿಸಿಕೊಡಲಾಗುವುದು ಎಂದು ಹೇಳಿದರು.
ಕೋವಿಡ್ ಸೋಂಕು ಹಳ್ಳಿಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದು, ಸೋಂಕು ಹರಡದಂತೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿಯವರು ಕಾಳಜಿ ವ್ಯಕ್ತಪಡಿಸಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಇತ್ತೀಚೆಗೆ ಸೋಂಕಿನ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಆದರೂ ಗ್ರಾಮೀಣ ಭಾಗದ ಜನರ ಸುರಕ್ಷತೆ ಕ್ರಮ ವಹಿಸಲಾಗುತ್ತಿದೆ.
ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಮೊದಲನೇ ದಿನದಿಂದ ಚಿಕಿತ್ಸೆ ಪ್ರಾರಂಭಿಸಿದರೆ ಶೇ.85ರಷ್ಟು ಹೋಂ ಐಸೋಲೇಷನ್ ನಲ್ಲಿ ಗುಣಮುಖರಾಗಬಹುದು. ಎಲ್ಲಾ ತಾಲೂಕುಗಳಲ್ಲಿ 10 ಸಾವಿರಕ್ಕೂ ಹೆಚ್ಚು ಕೋವಿಡ್ ಮಿತ್ರಾಗೆ ಬಂದು ಔಷಧಿ ಪಡೆದಿದ್ದಾರೆ. ಕೋವಿಡ್ ಮಿತ್ರ ಇಲ್ಲದಿದ್ದರೆ ಅವರೆಲ್ಲರೂ ಆರೋಗ್ಯ ಗಂಭೀರವಾದಾಗ ಆಸ್ಪತ್ರೆದೆ ದಾಖಲಾಗುತ್ತಿದ್ದರು. ಕೋವಿಡ್ ಮಿತ್ರ ಜನರಿಗೆ ಉಪಯೋಗಕ್ಕೆ ಬರಲಿದ್ದು, ಆಶಾ ಕಾರ್ಯಕರ್ತೆಯರು, ಗ್ರಾಮೀಣ ಭಾಗದ ಟಾಸ್ಕ್ ಫೋರ್ಸ್ ಮೂಲಕ ಮನೆ ಮನೆಗೆ ತಲುಪುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುವ ಭರವಸೆ ಇದೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಸಂವಾದದ ವೇಳೆ ತಾಂತ್ರಿಕ ಸಮಸ್ಯೆಗಳು ಉಂಟಾಗಿದ್ದು, ಹೀಗಾಗಿ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಬಳಿಕ ಜಿಲ್ಲಾ ಪಂಚಾಯತ್'ನ್ನು ಸಂಪರ್ಕಿಸಲಾಗಿದೆ. ಪ್ರಧಾನಮಂತ್ರಿಗಳು ಮೈಸೂರು ಜಿಲ್ಲಾಧಿಕಾರಿಯೊಂದಿಗೆ ಮಾತುಕತೆ ನಡೆಸಲು ಸಾಧ್ಯವಾಗಿಲ್ಲ. ಆದರೆ, ಸಭೆ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ಸೋಂಕು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳು, ಸಭೆ ಕುರಿತ ಎಲ್ಲಾ ಮಾಹಿತಿಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


