ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಮುಕ್ತ ಚರ್ಚೆಗೆ ಸಿದ್ಧ: ಸಿಎಂ ಬಸವರಾಜ ಬೊಮ್ಮಾಯಿ
ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಕುರಿತು ಮುಕ್ತವಾಗಿ ಚರ್ಚೆ ಮಾಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಕುರಿತು ಮುಕ್ತವಾಗಿ ಚರ್ಚೆ ಮಾಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.
ಎಂಜಿನಿಯರ್‌ಗಳ ದಿನಾಚರಣೆ ಅಂಗವಾಗಿ ಕೆ.ಆರ್. ವೃತ್ತದ ಬಳಿ ಇರುವ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಸ್ತುತ ಕಾಲಕ್ಕೆ ತಕ್ಕಂತೆ ಶಿಕ್ಷಣ ಕೊಟ್ಟು ಯುವಕರಿಗೆ ಒಳ್ಳೆಯ ಭವಿಷ್ಯ ರೂಪಿಸಲು ನೀತಿ ಪೂರಕವಾಗಿದೆ. ಇದರಿಂದ ಕ್ರಾಂತಿಕಾರಿ ಬದಲಾವಣೆ ಸಾಧ್ಯ. ಈ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳುತ್ತೇವೆ’ ಎಂದು ಹೇಳಿದ್ದಾರೆ.
ನೀತಿ ಜಾರಿಗೂ ಮೊದಲು ಎಲ್ಲಾ ಕಡೆ ಚರ್ಚೆ ಆಗಿದೆ. ವಿಶ್ವವಿದ್ಯಾಲಯ ಮಟ್ಟದಲ್ಲೂ ಚರ್ಚೆ ನಡೆದಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಬಗ್ಗೆ ಇನ್ನೊಂದು ಸಮಿತಿ ಮಾಡಿ ಚರ್ಚೆ ಮಾಡುತ್ತೇವೆ. ಯಾರೂ ಕೂಡಾ ಆತಂಕಪಡುವ ಅಗತ್ಯ ಇಲ್ಲ ಎಂದು ತಿಳಿಸಿದರು.
‘ವಿಶ್ವೇಶ್ವರಯ್ಯ ಅವರ ಜಯಂತಿಯನ್ನು ಎಂಜಿನಿಯರ್ ದಿನ ಎಂದು ನಾವು ಆಚರಣೆ ಮಾಡುತ್ತೇವೆ. ನಿಜವಾಗಿ ನಾಡು ಕಟ್ಟಿದವರು ಶ್ರಮಿಕ ವರ್ಗ. ಹೊಲದಲ್ಲಿ ರೈತರು ಮತ್ತು ಕಾರ್ಮಿಕರು. ತಳಮಟ್ಟದಲ್ಲಿರುವ ದುಡಿಯುವ ವರ್ಗ. ವಿಶ್ವೇಶ್ವರಯ್ಯ ಅವರು ಈ ವರ್ಗವನ್ನು ಪ್ರತಿನಿಧಿಸುವವರು’ ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು.
‘ಪ್ರಗತಿಪರ ಚಿಂತನೆಯಿಂದ ನಾಡು ಕಟ್ಟಿದವರು ವಿಶ್ವೇಶ್ವರಯ್ಯ. ನಾವು ಕೂಡಾ ಅವರ ಹಾದಿಯಲ್ಲಿ ನಾಡು ಕಟ್ಟಲು ಸಂಕಲ್ಪ ಮಾಡಬೇಕು. ಕೆ.ಆರ್. ವೃತ್ತದಲ್ಲಿ ವಿಶ್ವೇಶ್ವರಯ್ಯ ಪ್ಲಾಜಾ ಮಾಡಿದ್ದೇವೆ. ಇನ್ನೂ 30 ವೃತ್ತಗಳಲ್ಲಿ ಬಿಬಿಎಂಪಿ ಇಂಥ ಪ್ಲಾಜಾ ಮಾಡಲಿದೆ. ಇದರಿಂದ ಬೆಂಗಳೂರಿನ ಅಂದ ಹೆಚ್ಚಲಿದೆ ಎಂದರು.
ಇದೇ ವೇಳೆ ಕರ್ನಾಟಕ ಎಂಜಿನಿಯರಿಂಗ್ ಸೇವಾ ಸಂಘದ ವತಿಯಿಂದ ಕೆ.ಆರ್. ವೃತ್ತದಲ್ಲಿ ನಿರ್ಮಿಸಲಾಗಿರುವ ಎಂಜಿನಿಯರ್‌ಗಳ ತರಬೇತಿ ಕೇಂದ್ರ ‘ಎಂಜಿನಿಯರ್ ಭವನ'ವನ್ನು ಮುಖ್ಯಮಂತ್ರಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಪುಷ್ಪಾರ್ಚನೆ ಮಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಮುಖ್ಯಮಂತ್ರಿಗಳು ಚಾಲನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


