ಮತದಾರರ ಪಟ್ಟಿಯಲ್ಲಿ ಮಾರ್ಪಾಡು: ನಿಬಂಧನೆಗಳ ಕಟ್ಟುನಿಟ್ಟಾಗಿ ಪಾಲಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ
ಮತದಾರರ ಪಟ್ಟಿಯಿಂದ ಹಕ್ಕು ಚಲಾಯಿಸುವವರ ಹೆಸರನ್ನು ಕೈಬಿಡಲು ಮತ್ತು ಪುನರ್ ಸೇರ್ಪಡೆ ಮಾಡುವ ವಿಚಾರದಲ್ಲಿ ಕಟ್ಟುನಿಟ್ಟಾಗಿ ನಿಬಂಧನೆಗಳನ್ನು ಪಾಲಿಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಶುಕ್ರವಾರ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.

ಬೆಂಗಳೂರು: ಮತದಾರರ ಪಟ್ಟಿಯಿಂದ ಹಕ್ಕು ಚಲಾಯಿಸುವವರ ಹೆಸರನ್ನು ಕೈಬಿಡಲು ಮತ್ತು ಪುನರ್ ಸೇರ್ಪಡೆ ಮಾಡುವ ವಿಚಾರದಲ್ಲಿ ಕಟ್ಟುನಿಟ್ಟಾಗಿ ನಿಬಂಧನೆಗಳನ್ನು ಪಾಲಿಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಶುಕ್ರವಾರ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.
ಸರ್ಕಾರೇತರ ಸಂಸ್ಥೆ ವೈಟ್ಫೀಲ್ಡ್ ರೈಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠವು ಅರ್ಜಿ ವಿಲೇವಾರಿ ಮಾಡಿತು.
ಮತದಾರರ ಪಟ್ಟಿಗೆ ಸೇರ್ಪಡೆ, ವರ್ಗಾವಣೆ ಅಥವಾ ಇನ್ನಾವುದೇ ಮಾರ್ಪಾಡು ಮಾಡುವ ಕುರಿತು ಸಲ್ಲಿಸಿದ ಮನವಿಯನ್ನು ನಿರ್ದಿಷ್ಟ ಕಾಲಮಿತಿಯಲ್ಲಿ ವಿಲೇವಾರಿ ಮಾಡುವ ಸಂಬಂಧ ಕಾರ್ಯ ವಿಧಾನ ರೂಪಿಸುವ ಕುರಿತು ನಿರ್ದೇಶನ ನೀಡುವಂತೆ ಕೋರಿ 2018ರಲ್ಲಿ ವೈಟ್ಫೀಲ್ಡ್ ರೈಶೀಂಗ್ ಮನವಿ ಸಲ್ಲಿಸಿತ್ತು.
ಇಸಿಐ ಪ್ರರ ವಕೀಲರು “ಮತದಾರರ ಪಟ್ಟಿಯಲ್ಲಿ ಮತದಾರರ ಸೇರ್ಪಡೆ ಮತ್ತು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಕಾಲಮಿತಿಯಲ್ಲಿ ಅಹವಾಲನ್ನು ಪರಿಶೀಲಿಸುವ ಸಂಬಂಧ ಅಗತ್ಯ ಸೂಚನೆಗಳನ್ನು ನೀಡಲಾಗಿದೆ” ಎಂದರು.
ಅರ್ಜಿಯ ವಿಷಯದ ಕುರಿತು ಅಹವಾಲಿನ ಬಗ್ಗೆ ಸಂಚಾರಿ (ರೋವಿಂಗ್) ವಿಚಾರಣೆಯನ್ನು ಇಡೀ ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಪೀಠವು ಹೇಳಿತು. ಇಸಿಐ ವಾದವನ್ನು ಒಪ್ಪಿದ ನ್ಯಾಯಾಲಯವು ಅಹವಾಲು ಹೊಂದಿರುವವರು ಪ್ರಜಾಪ್ರತಿನಿಧಿ ಕಾಯಿದೆ ಮತ್ತು ಮತದಾರರ ನೋಂದಣಿ ಕಾಯಿದೆ ಮತ್ತು ನಿಯಮಗಳ ಅಡಿ ಪರಿಹಾರ ಕೋರಬಹುದಾಗಿದೆ. ಕಾನೂನಿನ ಅಡಿ ಅಧಿಕಾರಿಗಳು ಮನವಿಯನ್ನು ಪರಿಗಣಿಸದಿದ್ದರೆ ಅವರು ಹೈಕೋರ್ಟ್ ಕದ ತಟ್ಟಬಹುದಾಗಿದೆ ಎಂದು ಪೀಠ ಹೇಳಿತು.
ಅರ್ಜಿದಾರರ ಪರ ವಕೀಲರು “ಆನ್ಲೈನ್ನಲ್ಲಿ ಸಲ್ಲಿಸಿದ ಅರ್ಜಿಗಳ ಸಂಖ್ಯೆಯನ್ನು ನಿರ್ಧರಿಸಲು ಯಾವುದೇ ವಿಧಾನವನ್ನು ಅಳವಡಿಸಲಾಗಿಲ್ಲ. ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ನಿರ್ದಿಷ್ಟ ಕಾಲಮಿತಿಯಲ್ಲಿ ಅಹವಾಲನ್ನು ಪರಿಹರಿಸಲಾಗಿಲ್ಲ. ಮತದಾರರ ಪಟ್ಟಿಯಲ್ಲಿ ಮಾರ್ಪಾಡು ಕುರಿತು ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸ್ವೀಕೃತಿ ಪ್ರತಿ ನೀಡಲು ನಿರ್ದೇಶಿಸಬೇಕು” ಎಂದು ಕೋರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


