ಸತೀಶ್ ಜಾರಕಿಹೊಳಿ ಅರೆಬರೆ ಓದು, ಜ್ಞಾನದಿಂದ ಹೇಳಿಕೆ ನೀಡಿದ್ದಾರೆ; ರಾಹುಲ್ ಗಾಂಧಿ, ಸಿದ್ದರಾಮಯ್ಯ ಮೌನ ಏಕೆ: ಸಿಎಂ ಬೊಮ್ಮಾಯಿ
ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿಯವರು ಈ ದೇಶದ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ಹೇಳಿಕೆ ಕೊಟ್ಟಿದ್ದಾರೆ.

ಉಡುಪಿ: ಕಾಂಗ್ರೆಸ್ ನಾಯಕ ಶಾಸಕ ಸತೀಶ್ ಜಾರಕಿಹೊಳಿಯವರು ಈ ದೇಶದ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಸಂಪೂರ್ಣವಾದ ಆಳವಾದ ಅಧ್ಯಯನವಿಲ್ಲದೆ ಅರೆಬರೆಯ ಓದು, ಜ್ಞಾನದಿಂದ ಹೇಳಿಕೆ ನೀಡಿದ್ದಾರೆ. ಕೇವಲ ಓಟಿಗಾಗಿ, ತುಷ್ಠಿ ರಾಜಕಾರಣ ಮಾಡುವುದು, ಈ ರೀತಿ ಮಾತನಾಡಿದರೆ ಅಲ್ಪಸಂಖ್ಯಾತರ ಮತಗಳನ್ನು ಗಳಿಸಬಹುದು ಎಂಬ ಭ್ರಮೆಯಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಭಾರತದ ಜನರ ನಂಬಿಕೆ, ಬುನಾದಿಗಳಿಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದಾರೆ. ದೇಶದಲ್ಲಿ ಆಂತರಿಕ ಕ್ಷೋಭೆಯನ್ನುಂಟುಮಾಡುವುದು ದೇಶದ್ರೋಹದ ಕೆಲಸ, ಇದನ್ನು ಪ್ರತಿಯೊಬ್ಬರೂ ಖಂಡಿಸಬೇಕು ಎಂದರು.
ಕಾಂಗ್ರೆಸ್ ಪಕ್ಷ ಸತೀಶ್ ಜಾರಕಿಹೊಳಿಯವರ ಹೇಳಿಕೆಗೆ ಸಹಮತ ರೀತಿಯಲ್ಲಿ ನಡೆದುಕೊಳ್ಳುತ್ತಿದೆ. ಸಣ್ಣಪುಟ್ಟ ವಿಚಾರಕ್ಕೆ ಕೂಗುವ ರಾಹುಲ್ ಗಾಂಧಿ, ಸಿದ್ದರಾಮಯ್ಯನವರು ಈಗೇಕೆ ಮೌನವಾಗಿದ್ದಾರೆ, ಅವರ ಮೌನ ರಾಹುಲ್ ಗಾಂಧಿಯವರ ಸಮ್ಮತಿಯೇ, ಜಾರಕಿಹೊಳಿಯವರ ಹೇಳಿಕೆಯಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾದರೂ ಕೂಡ ಮಾತನಾಡುವುದಿಲ್ಲ ಎಂದರೆ ಅರ್ಥವೇನು ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ಇಷ್ಟೆಲ್ಲಾ ವಿವಾದ ಎದ್ದರೂ, ವಿರೋಧ ಕೇಳಿಬರುತ್ತಿದ್ದರೂ ಸತೀಶ್ ಜಾರಕಿಹೊಳಿಯವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದು ಅತ್ಯಂತ ಹೇಯಕೃತ್ಯ. ಸಮಾಜದಲ್ಲಿ ಹುಳಿಹಿಂಡುವ ಕೆಲಸ ಮಾಡುತ್ತಿದ್ದಾರೆ. ಅವರು ಮತ್ತು ಕಾಂಗ್ರೆಸ್ ಪಕ್ಷ ಕೂಡಲೇ ಕ್ಷಮೆಯಾಚನೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ಉಡುಪಿಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಹಿಂದೂಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿರುವ ಖಂಡನೀಯ. ಅವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದಾರೆ.
ಹಿಂದೂಗಳ ಬಗ್ಗೆ ಹಗುರವಾಗಿ ಮಾತನಾಡಿ ತಾನು ದೊಡ್ಡವನಾಗುತ್ತೇನೆ ಎಂಬ ಭ್ರಮೆಯಲ್ಲಿ ಸತೀಶ್ ಜಾರಕಿಹೊಳಿಯವರು ಇದ್ದಂತೆ ಕಂಡುಬರುತ್ತಿದೆ. ಇನ್ನು ಮುಂದೆಯಾದರೂ ಗೌರವದಿಂದ ನಡೆದುಕೊಂಡು ಹಿಂದೂಗಳಿಗೆ ಅಪಮಾನವಾಗುವ ರೀತಿಯಲ್ಲಿ ನಡೆದುಕೊಳ್ಳಬಾರದೆಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


