ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗ ರಚನೆ: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ
ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಘೋಷಿಸಿದರು.

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಘೋಷಿಸಿದರು.
ಇಂದು, ವಿಧಾನ ಸೌಧದ ಔತಣ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಸರ್ಕಾರಿ ನೌಕರರು, ವಿಶೇಷವಾಗಿ ಪತ್ರಾಂಕಿತ ಎ ಮತ್ತು ಬಿ ಗುಂಪಿನ ನೌಕರರು, ಪುಣ್ಯಕೋಟಿ ಯೋಜನೆಯಡಿ 11,000 ರೂಪಾಯಿ ನೀಡಿ, ಗೋವುಗಳನ್ನು ದತ್ತು ಪಡೆದು, ಗೋ ಸಂರಕ್ಷಣೆ ಮಾಡುವಂತೆ ಮನವಿ ಮಾಡಿದರು.
ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರು. ಆದ ಕಾರಣ, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದರು. ಅಂತೆಯೇ ರಾಜ್ಯ ಸರ್ಕಾರದ ವತಿಯಿಂದ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆಯ ಸುಸಂದರ್ಭದಲ್ಲಿ ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿ, 30 ನೌಕರರಿಗೆ ತಲಾ ಐವತ್ತು ಸಾವಿರ ರೂಪಾಯಿ ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಮಾತನಾಡಿ ಸರ್ಕಾರಿ ಸೇವೆಗೆ ಬರಲು ದೇವರ ಆಶೀರ್ವಾದ ಇರಬೇಕು. ಆದ ಕಾರಣ, ಸರ್ಕಾರಿ ನೌಕರರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: ಭಾರೀ ಮಳೆ ಅವಾಂತರ: 'ಭಾರತದ ಯಾವುದೇ ನಗರವೂ ಹೊರತಾಗಿಲ್ಲ'; ಬೆಂಗಳೂರು ಬೆನ್ನಿಗೆ ನಿಂತ ತೆಲಂಗಾಣ ಸಚಿವ ಕೆಟಿಆರ್
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸಂಪುಟ ಶಾಖೆಯ ಉಪ ಕಾರ್ಯದರ್ಶಿ ಆರ್ ಚಂದ್ರಶೇಖರ್ ಅವರು ಪ್ರಶಸ್ತಿ ಪುರಸ್ಕೃತರ ಪರವಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ಸುಧಾರಣಾ ವಿಭಾಗದ ಅಧೀನ ಕಾರ್ಯದರ್ಶಿ ಬಿ ಎಸ್ ಲಕ್ಷ್ಮಣ್ ಅವರನ್ನು ಮುಖ್ಯಮಂತ್ರಿ ಗೌರವಿಸಿದರು.
ಈ ಮುನ್ನ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಪಿ ಹೇಮಲತಾ ಅವರು ಸ್ವಾಗತಿಸಿದರು. ಕಂದಾಯ ಸಚಿವ ಆರ್ ಅಶೋಕ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಅವರೂ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


