ರಾಜ್ಯದ ಹಲವು ಆರ್ ಟಿಓ ಚೆಕ್ ಪೋಸ್ಟ್ ಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ: ಕಡತಗಳ ಪರಿಶೀಲನೆ
ಏಕಕಾಲಕ್ಕೆ ರಾಜ್ಯದ 9 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಒಂಭತ್ತು ಜಿಲ್ಲೆಗಳ ಆರ್ ಟಿಓ ಚೆಕ್ ಪೋಸ್ಟ್ ಗಳ ಮೇಲೆ ಬೆಳಗ್ಗೆ 4 ಗಂಟೆಯಿಂದ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರು: ಏಕಕಾಲಕ್ಕೆ ರಾಜ್ಯದ 9 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಒಂಭತ್ತು ಜಿಲ್ಲೆಗಳ ಆರ್ ಟಿಓ ಚೆಕ್ ಪೋಸ್ಟ್ ಗಳ ಮೇಲೆ ಬೆಳಗ್ಗೆ 4 ಗಂಟೆಯಿಂದ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಅತ್ತಿಬೆಲೆ, ವಿಜಯಪುರದ ಜಳಲಿ ಪೋಸ್ಟ್, ಬೆಳಗಾವಿಯ ನಿಪ್ಪಾಣಿ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ, ಕೋಲಾರದ ನಂಗ್ಲಿ, ಬಳ್ಳಾರಿ, ಕೊಪ್ಪಳ, ಹೊಸಪೇಟೆ, ಗುಂಡ್ಲುಪೇಟೆ, ಬೀದರ್ ನ ಹುಮನಬಾದ್ ಚೆಕ್ ಪೋಸ್ಟ್ ಮೇಲೆ ದಾಳಿ ಮಾಡಿದ್ದಾರೆ.
ಚೆಕ್ ಪೋಸ್ಟ್ ಗಳಲ್ಲಿ ಮಧ್ಯವರ್ತಿಗಳು ಹಾಗೂ ಲಂಚಕ್ಕೆ ಬೇಡಿಕೆ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಲೋಕಾಯುಕ್ತ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.
ಬೆಂಗಳೂರು ಹೊರವಲಯದ ಅತ್ತಿಬೆಲೆ ಆರ್ ಟಿಒ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. 2 ವಾಹನಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆ 4 ಗಂಟೆಗೆ ಕಚೇರಿ ಮೇಲೆ ರೈಡ್ ಮಾಡಿದ್ದಾರೆ. ಅತ್ತಿಬೆಲೆ ಆರ್ ಟಿಒ ಕಚೇರಿ ಮೇಲೆ ಹಲವು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಕಚೇರಿ ಒಳಗೆ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.
ಬೀದರ ಜಿಲ್ಲೆಯ ಹುಮನಾಬಾದ ಪಟ್ಟಣದ ಹೊರವಲಯದ ಆರ್.ಟಿ.ಓ. ಕಚೇರಿ ಮೇಲೆ ಸೆ.30ರ ಶುಕ್ರವಾರ ಬೆಳ್ಳಂ ಬೆಳಿಗ್ಗೆ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ. ಚೆಕ್ ಪೋಸ್ಟ್ ನಲ್ಲಿ ವಾಹನಗಳಿಂದ ಹಣ ವಸೂಲಿ ದೂರುಗಳ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 65ರ ಮೋಳಕೆರಾ ಗ್ರಾಮದ ಹತ್ತಿರದ ಚೆಕ್ ಪೋಸ್ಟ್ ನಲ್ಲಿ ದಾಳಿ ನಡೆದಿದೆ.
ಇನ್ನೂ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ನಡೆಯುತ್ತಿರುವ ಗುಂಡ್ಲುಪೇಟೆ ಚೆಕ್ ಪೋಸ್ಟ್ ಬಳಿಯಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


